ಬುಧವಾರ, ಜನವರಿ 20, 2021
17 °C

ನಡ್ಡಾ–ಜಾರಕಿಹೊಳಿ ಭೇಟಿ ಇಂದು: ರಾಜ್ಯ ಬಿಜೆಪಿ ವಲಯದಲ್ಲಿ ಕುತೂಹಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಬುಧವಾರ ರಾತ್ರಿ ದೆಹಲಿಗೆ ತೆರಳಿದ್ದು, ಗುರುವಾರ ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

ವರಿಷ್ಠರು ಜಾರಕಿಹೊಳಿ ಅವರನ್ನು ಕರೆಸಿಕೊಂಡಿರುವುದು ರಾಜ್ಯ ಬಿಜೆಪಿ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯ ರಾಜಕಾರಣ ವಿಚಾರವಾಗಿ ಚರ್ಚೆ ನಡೆಸಲಿದ್ದಾರೋ ಅಥವಾ ಮಹಾರಾಷ್ಟ್ರ ರಾಜಕಾರಣಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸುತ್ತಾರೋ ಎಂಬುದು ತಿಳಿದು ಬಂದಿಲ್ಲ.

ಜಾರಕಿಹೊಳಿ ಆಪ್ತರ ಪ್ರಕಾರ, ಮಹಾರಾಷ್ಟ್ರದಲ್ಲಿ ಬಿಜೆಪಿಯನ್ನು ಪುನಃ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಜಾರಕಿಹೊಳಿಯವರ ನೆರವು ಪಡೆದುಕೊಳ್ಳಲಾಗುತ್ತಿದೆ.

ಬುಧವಾರ ಬೆಳಿಗ್ಗೆ ಸುದ್ದಿಗಾರರ ಜತೆ ಮಾತನಾಡಿದ ಜಾರಕಿಹೊಳಿ, ‘ಪಕ್ಷದ ನಾಯಕರಿಂದ ಕರೆ ಬಂದಿದ್ದು, ಭೇಟಿಯಾಗಲು ಹೋಗುತ್ತಿದ್ದೇನೆ’ ಎಂದು ಹೇಳಿದರು.

‘ಪಕ್ಷದಲ್ಲಿ ನಾನೇನು ಪ್ರಭಾವಿ ನಾಯಕನಲ್ಲ. ನನ್ನನ್ನು ಮಾಧ್ಯಮದಲ್ಲಿ ಶಕ್ತಿಶಾಲಿ ನಾಯಕ ಎಂಬಂತೆ ಬಿಂಬಿಸಲಾಗುತ್ತಿದೆ. ಅದಕ್ಕೆ ನಾನೇನು ಮಾಡಲು ಆಗಲ್ಲ. ನಾನು ಉಪಮುಖ್ಯಮಂತ್ರಿ ಸ್ಥಾನವೂ ಸೇರಿದಂತೆ ಯಾವುದೇ ಬೇಡಿಕೆ ಇಟ್ಟಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೊಟ್ಟಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ’ ಎಂದರು.

‘ಕೆಲವು ಸಚಿವರು ಮತ್ತು ಶಾಸಕರು ನೀರಾವರಿ ವಿಷಯಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಲು ನನ್ನ ಬಳಿ ಬರುತ್ತಾರೆ. ಅದಕ್ಕೆ ರಾಜಕೀಯ ಅರ್ಥ ಕಲ್ಪಿಸಬೇಕಾಗಿಲ್ಲ’ ಎಂದು ಹೇಳಿದರು.

‘ಸಿ.ಪಿ.ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ನೀಡುವುದನ್ನು ಕೆಲವರು ವಿರೋಧಿಸುತ್ತಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡುವಂತೆ ಪಕ್ಷದ ಮುಖಂಡರ ಜತೆ ಮಾತನಾಡುತ್ತೇನೆ. ಅದು ನನ್ನ ಕರ್ತವ್ಯ. ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ಕೊಟ್ಟರೂ ಸರಿ, ಕೊಡದಿದ್ದರೂ ಸರಿ ಯಾರೂ ಬೇಸರ ಮಾಡಿಕೊಳ್ಳಬೇಕಾಗಿಲ್ಲ’ ಎಂದರು.

*

ಸಂಪುಟ ವಿಸ್ತರಣೆಯೋ ಅಥವಾ ಪುನರ್‌ರಚನೆಯೋ ಎಂಬುದು ಇನ್ನು ಎರಡು ದಿನಗಳಲ್ಲಿ ಗೊತ್ತಾಗಲಿದೆ.
-ಬಿ.ಎಸ್‌.ಯಡಿಯೂರಪ್ಪ, ಮುಖ್ಯಮಂತ್ರಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು