ಮಂಗಳವಾರ, ಮಾರ್ಚ್ 28, 2023
31 °C

ಕನ್ನಡದ ಸಮಗ್ರ ಮಸೂದೆ ಡಿಸೆಂಬರ್‌ನಲ್ಲಿ ಜಾರಿ: ಸುನಿಲ್ ಕುಮಾರ್

'ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: 'ಕನ್ನಡದ ಪರಿಣಾಮಕಾರಿ ಅನುಷ್ಠಾನಕ್ಕೆ ಕನ್ನಡ ಸಮಗ್ರ ಮಸೂದೆಯನ್ನು ಡಿಸೆಂಬರ್ ನಲ್ಲಿ ಅಂಗೀಕರಿಸಿ ಜಾರಿಗೊಳಿಸಲಿದ್ದೇವೆ' ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದರು.

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಇಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಂಗಳವಾರ ಮಾತನಾಡಿದರು.
'ನ್ಯಾಯಾಲಯದ ಕಲಾಪಗಳು ಕನ್ನಡದಲ್ಲಿ ನಡೆಯಬೇಕಿದೆ. ಉದ್ಯೋಗದಲ್ಲಿ ಕನ್ನಡಿಗರಿಗೆ ಆದ್ಯತೆ ಸಿಗಬೇಕಿದೆ. ಸರ್ಕಾರದ ಎಲ್ಲ ಸುತ್ತೋಲೆಗಳು ಕನ್ನಡದಲ್ಲಿ ಇರಬೇಕು. ಈ ಉದ್ದೇಶದಿಂದ ಕನ್ನಡ ಸಮಗ್ರ ಮಸೂದೆಯನ್ನು ರೂಪಿಸಿದ್ದೇವೆ. ಈ ಕುರಿತು ಸಾರ್ವಜನಿಕರು ಅಗತ್ಯ ಸಲಹೆಗಳನ್ನು ನೀಡಬೇಕು' ಎಂದರು‌.

'ದಕ್ಷಿಣ ಕನ್ನಡ ಜಿಲ್ಲೆಯ 275 ಕನ್ನಡದ ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದೇವೆ. ಈ ಶಾಲೆಗಳಲ್ಲಿ ಕೊಠಡಿ ಹಾಗೂ ಶೌಚಾಲಯ ನಿರ್ಮಾಣಕ್ಕೆ ಒಟ್ಟು 39 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ.  ಮಕ್ಕಳು ಗಣಿತ ಮತ್ತು ವಿಜ್ಞಾನದಲ್ಲಿ ಆಸಕ್ತಿ ಬೆಳೆಸಿಕೊಳ್ಳುವಂತೆ ಮಾಡಲು  ಜಿಲ್ಲೆಯ 27 ಶಾಲೆಗಳನ್ನು ಅಮೃತ ಶಾಲೆ ಎಂದು ಗುರುತಿಸಿ ಅಧ್ಯಯನಕ್ಕೆ ವಿಶೇಷ ಸೌಕರ್ಯ ಕಲ್ಪಿಸಲಾಗುತ್ತದೆ' ಎಂದರು‌.

'ಗಡಿ ಗ್ರಾಮಗಳ ಅಭಿವೃದ್ಧಿಗೆ 21ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಕಯ್ಯಾರ ಕಿಞ್ಞಣ್ಣ ರೈ ಸ್ಮಾರಕ ನಿರ್ಮಾಣಕ್ಕೆ 50 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ರಾಷ್ಟ್ರ ಕವಿ ಗೋವಿಂದ ಪೈ ಅವರ ಸಂಶೋಧನ ಲೇಖನಗಳ ಮರುಮುದ್ರಣಕ್ಕೆ 30 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ' ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಕುಮಾರ್, ಮಂಗಳೂರು ನಗರದ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ಇದ್ದರು.

34 ಮಂದಿಗೆ ಹಾಗೂ 20 ಸಂಘ ಸಂಸ್ಥೆಗಳಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ  ಪ್ರದಾನ ಮಾಡಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು