ಬುಧವಾರ, ಅಕ್ಟೋಬರ್ 28, 2020
23 °C
ಪ್ರತಿಭಟನಾಕಾರರ ಬಂಧನ, ಬಿಡುಗಡೆ: ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

ಬಂದ್‌: ಕೊಡಗು ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೃಷಿ, ಎಪಿಎಂಸಿಗೆ ಸಂಬಂಧಿಸಿದಂತೆ ಹೊರಡಿಸಿರುವ ತಿದ್ದುಪಡಿ ಮಸೂದೆಗಳನ್ನು ಖಂಡಿಸಿ, ರಾಜ್ಯ ರೈತ ಸಂಘಟನೆಗಳು ಕರೆ ನೀಡಿದ್ದ ಬಂದ್‌ಗೆ ‘ಕಾಫಿ ನಾಡು ಕೊಡಗು ಜಿಲ್ಲೆ’ಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮಡಿಕೇರಿಯಲ್ಲಿ ಭಾಗಶಃ ಬಂದ್‌ ವಾತಾವರಣವಿತ್ತು. ವಿರಾಜಪೇಟೆಯಲ್ಲಿ ಬಹುತೇಕ ಬಂದ್‌ ಯಶಸ್ವಿಯಾಗಿದೆ. ಕುಶಾಲನಗರ, ಸೋಮವಾರಪೇಟೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮಡಿಕೇರಿಯ ಕಾಲೇಜು ರಸ್ತೆ, ಚೌಕಿ, ಜನರಲ್‌ ತಿಮ್ಮಯ್ಯ ವೃತ್ತ ಸೇರಿದಂತೆ ಬಹುತೇಕ ಕಡೆ ಅಂಗಡಿ ಮುಂಗಟ್ಟುಗಳು ಸಂಜೆಯ ತನಕ ಬಂದ್‌ ಆಗಿದ್ದವು.

ನಗರದ ಜನರಲ್‌ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮುಖಂಡರು, ಕಾರ್ಯಕರ್ತರು ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ ಹೊರಹಾಕಿದರು. ವಿವಿಧ ಸಂಘಟನೆಗಳೂ ಬೆಂಬಲ ಸೂಚಿಸಿದ್ದವು. ತಿದ್ದುಪಡಿ ಮಸೂದೆಗಳನ್ನು ವಿರೋಧಿಸಿದರು. ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಿದರು. 

ತಿಮ್ಮಯ್ಯ ವೃತ್ತದಲ್ಲಿ ರಸ್ತೆತಡೆ ನಡೆಸುತ್ತಿದ್ದ ವೇಳೆ ಕಾಂಗ್ರೆಸ್‌, ಜೆಡಿಎಸ್‌, ಎಸ್‌ಡಿಪಿಐ ಸೇರಿ ವಿವಿಧ ಸಂಘಟನೆಗಳ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಸ್ಥಳದಲ್ಲಿಯೇ ಬಸ್‌ ನಿಲ್ಲಿಸಿಕೊಂಡಿದ್ದ ಪೊಲೀಸರು ಪ್ರತಿಭಟನಾಕಾರರನ್ನು ಅದರಲ್ಲಿ ಕರೆದೊಯ್ದರು. ವಶಕ್ಕೆ ಪಡೆಯುವ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು.
ಭೂಸುಧಾರಣಾ ತಿದ್ದುಪಡಿ ಮಸೂದೆಯು ಕಾಯ್ದೆಯಾಗಿ ಅನುಷ್ಠಾಕ್ಕೆ ಬಂದರೆ, ರೈತರಿಗೆ ತೊಂದರೆ ಆಗಲಿದೆ. ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದರೆ, ಪೊಲೀಸರು ಸಹಕಾರ ನೀಡುತ್ತಿಲ್ಲ. ತೊಂದರೆ ನೀಡುತ್ತಿದ್ದಾರೆ. ಇದು ಖಂಡನೀಯ ಎಂದು ಆಕ್ರೋಶ ವ್ಯಕ್ತವಾಯಿತು.

ಬಂದೋಬಸ್ತ್‌:
ನಗರದ ವಿವಿಧೆಡೆ ಇಡೀ ದಿನ ಪೊಲೀಸ್‌ ಬಂದೋಬಸ್ತ್‌ ಇತ್ತು. ಸುದರ್ಶನ ವೃತ್ತದಲ್ಲೂ ಪೊಲೀಸರು ಖಾಸಗಿ ಕಾರಿನಲ್ಲಿ ಕುಳಿತು ಭದ್ರತೆ ಒದಗಿಸಿದ್ದು ಕಂಡುಬಂತು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಕೆ.ಕೆ.ಮಂಜುನಾಥ್‌ ಕುಮಾರ್, ಜೆಡಿಎಸ್‌ ಜಿಲ್ಲಾ ಅಧ್ಯಕ್ಷ ಕೆ.ಎಂ.ಬಿ.ಗಣೇಶ್, ಮುಖಂಡರಾದ ತನ್ನೀರ ಮೈನಾ, ಚುಮ್ಮಿ ದೇವಯ್ಯ, ನೆರವಂಡ ಉಮೇಶ್‌, ಎಸ್‌ಡಿಪಿಐ ಮುಖಂಡ ಅಮೀನ್‌ ಮೊಹಿಸಿನ್‌, ಲೀಲಾ ಶೇಷಮ್ಮ, ಅಬ್ದುಲ್‌ ರಜಾಕ್‌, ಮೀನಾಜ್‌ ಪ್ರವೀಣ್‌ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು