ಶನಿವಾರ, ಜನವರಿ 16, 2021
27 °C
ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧ

ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲವೇ ಹೆಚ್ಚು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ವಿವಿಧ ಕನ್ನಡ  ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಬಹುತೇಕ ಸಂಘಟನೆಗಳು ನೈತಿಕ ಬೆಂಬಲ ಮಾತ್ರ ಘೋಷಿಸಿವೆ.

ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಕನ್ನಡ  ಸಂಘಟನೆಗಳು ಶನಿವಾರ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ಸಜ್ಜಾಗಿವೆ.

‘ಕನ್ನಡ ಸಂಘಟನೆಗಳು ರಾಜ್ಯದಾದ್ಯಂತ ಬೃಹತ್‌ ಪ್ರತಿಭಟನಾ ರ‍್ಯಾಲಿ ನಡೆಸಲಿವೆ. ನಗರದಲ್ಲಿ ಲಕ್ಷಕ್ಕೂ ಹೆಚ್ಚು ಜನ ಸೇರಲಿದ್ದಾರೆ’ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದರೆ, ‘ರಸ್ತೆ ತಡೆ ಸೇರಿದಂತೆ ಜನ–ಜೀವನಕ್ಕೆ ಯಾವುದೇ ಅಡ್ಡಿ ಮಾಡುವುದಿಲ್ಲ. ಆದರೆ, ರಾಜ್ಯದಾದ್ಯಂತ ಪ್ರತಿಭಟನೆ ನಡೆಯಲಿದೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ.

ಕರ್ನಾಟಕ ನವನಿರ್ಮಾಣ ಸೇನೆ ಹಾಗೂ ದಲಿತ ಸಂಘಟನೆಗಳು ಮತ್ತು ರೈತ ಸಂಘಟನೆಗಳು ನೈತಿಕ ಬೆಂಬಲ ಘೋಷಿಸಿದ್ದು, ಪ್ರತಿಭಟನೆ ನಡೆಸದಿರಲು ತೀರ್ಮಾನಿಸಿವೆ.

ಬಿಗಿ ಭದ್ರತೆ: ಡಿ.5ರಂದು ರಾಜ್ಯದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್‌ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಏನೇನಿರುತ್ತದೆ?: ಬೆಂಗಳೂರು ನಗರದಲ್ಲಿ ಬಿಎಂಟಿಸಿ, ಮೆಟ್ರೊ ರೈಲು ಸಂಚಾರ ಎಂದಿನಂತಿರುತ್ತದೆ. ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಸಾರಿಗೆ ಸಂಸ್ಥೆಗಳ ಅಧಿಕಾರಿಗಳು ತಿಳಿಸಿದ್ದಾರೆ. ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸಲಿವೆ. ಪೆಟ್ರೋಲ್‌ ಬಂಕ್‌, ಆರೋಗ್ಯ ಸೇವೆ, ಔಷಧ ಅಂಗಡಿ, ಹಾಲು, ತರಕಾರಿ, ಪತ್ರಿಕೆಗಳು ಲಭ್ಯ ಇರಲಿವೆ. ಹೋಟೆಲ್‌ ಮಾಲೀಕರ ಸಂಘವು ಬಂದ್‌ಗೆ ನೈತಿಕ ಬೆಂಬಲ ಮಾತ್ರ ನೀಡಿದ್ದು, ಇವುಗಳ ಸೇವೆಯೂ  ಇರಲಿದೆ.

ಏನೇನಿರುವುದಿಲ್ಲ?

ಆಟೊ ಚಾಲಕರು–ಮಾಲೀಕರ ಸಂಘ, ಓಲಾ–ಉಬರ್‌ ಚಾಲಕರ ಸಂಘಗಳ ಪದಾಧಿಕಾರಿಗಳ ನಡುವೆಯೂ ಬಂದ್‌ಗೆ ಬೆಂಬಲ ನೀಡುವ ಬಗ್ಗೆ ಗೊಂದಲವಿದೆ. ಪ್ರತಿಭಟನೆ ತೀವ್ರಗೊಂಡರೆ ಮಾತ್ರ ಆಟೊ, ಟ್ಯಾಕ್ಸಿ ಹಾಗೂ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು