ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಆದೇಶ

Last Updated 27 ಜನವರಿ 2022, 19:16 IST
ಅಕ್ಷರ ಗಾತ್ರ

ಬೆಂಗಳೂರು: ಅಕ್ರಮವಾಗಿ ಕಬ್ಬಿಣದ ಅದಿರು ಮಾರಾಟ ಮಾಡಿ ಸರ್ಕಾರದ ಬೊಕ್ಕಸಕ್ಕೆ ತೆರಿಗೆ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹಾಗೂ ಆಪ್ತರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಈ ಕುರಿತಂತೆ ತನಿಖಾಧಿಕಾರಿ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ, ’ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ‘ದ ನ್ಯಾಯಾಧೀಶೆ ಪ್ರೀತ್ ಜೆ. ಈ ಆದೇಶ ಹೊರಡಿಸಿದ್ದಾರೆ.

ಆರೋಪಿಗಳಾದಗಾಲಿ ಜನಾರ್ದನ ರೆಡ್ಡಿ, ಅವರ ಆಪ್ತ ಕಾರ್ಯದರ್ಶಿ ಮೆಹಫೂಜ್ ಅಲಿ ಖಾನ್ ಹಾಗೂ ಓಬಳಾಪುರಂ ಮೈನಿಂಗ್ ಕಂಪೆನಿ ಮತ್ತು ಶ್ರೀ ಮಿನರಲ್ಸ್ ಪಾಲುದಾರ ಬಿ.ವಿ ಶ್ರೀನಿವಾಸ ರೆಡ್ಡಿ ವಿರುದ್ಧ ಗಣಿ ಮತ್ತು ಖನಿಜ ಅಭಿವೃದ್ಧಿ ಹಾಗೂ ನಿಯಂತ್ರಣ ಕಾಯ್ದೆ-1957ರ ಕಲಂ 21, 23 ಹಾಗೂ 4(1)ರ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಲಾಗಿದೆ.

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 2009ರಲ್ಲಿ ಆರೋಪಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದ ಸಂದರ್ಭದಲ್ಲಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಈ ವೇಳೆ ಅಕ್ರಮವಾಗಿ ಕಬ್ಬಿಣದ ಅದಿರು ಸಾಗಿಸಿರುವುದು ಪತ್ತೆಯಾಗಿತ್ತು.

‘ಆರೋಪಿಗಳು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸೇರಿದಂತೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರಗಳಿಂದ ಅನುಮತಿ ಪಡೆಯದೇ ಸಾವಿರಾರು ಮೆಟ್ರಿಕ್ ಟನ್ ಅದಿರನ್ನು ಮಾರಾಟ ಮಾಡಿದ ಕಾರಣ ಸರ್ಕಾರದ ಬೊಕ್ಕಸಕ್ಕೆ ₹ 23 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ’ ಎಂದು ತನಿಖಾಧಿಕಾರಿ ಆರೋಪಿಸಿದ್ದರು. ವಿಚಾರಣೆಯನ್ನು ಫೆಬ್ರುವರಿ 14ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT