ಮಂಗಳವಾರ, ಏಪ್ರಿಲ್ 20, 2021
25 °C

24 ಗಂಟೆಗಳಲ್ಲಿ 921 ಮಂದಿಗೆ ಕೋವಿಡ್; ಒಂದಕ್ಕೆ ಇಳಿದ ಮೃತರ ಸಂಖ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್ ಪ್ರಕರಣಗಳ ಸಂಖ್ಯೆ ಶನಿವಾರ ಮತ್ತಷ್ಟು ಏರಿಕೆ ಕಂಡಿದ್ದು, 921 ಪ್ರಕರಣಗಳು ವರದಿಯಾಗಿವೆ. ಎರಡು ತಿಂಗಳಲ್ಲಿ 24 ಗಂಟೆಗಳ ಅವಧಿಯಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿವೆ.

ರಾಜ್ಯದಲ್ಲಿ ಜ.8ರಂದು 970 ಪ್ರಕರಣಗಳು ದೃಢಪಟ್ಟಿದ್ದವು. ಬಳಿಕ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿತ್ತು. ಎರಡು ವಾರಗಳಿಂದ ಪ‍್ರಕರಣಗಳ ಸಂಖ್ಯೆ ಏರುಗತಿ ಪಡೆದುಕೊಂಡಿದೆ. ನಾಲ್ಕು ದಿನಗಳ ಅವಧಿಯಲ್ಲಿ 3,297 ಪ್ರಕರಣಗಳು ವರದಿಯಾಗಿವೆ. ಈ ತಿಂಗಳ 13 ದಿನಗಳ ಅವಧಿಯಲ್ಲಿ 8,087 ಮಂದಿ ಕೊರೊನಾ ಸೋಂಕಿತರಾಗಿರುವುದು ಖಚಿತಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 622 ಪ್ರಕರಣಗಳು ದೃಢಪಟ್ಟಿವೆ.

ಸೋಂಕಿತರಲ್ಲಿ 992 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಗುಣಮುಖರಾದವರ ಸಂಖ್ಯೆ 9.38 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 8,042ಕ್ಕೆ ತಲುಪಿದೆ. ಸೋಂಕಿತರಲ್ಲಿ 123 ಮಂದಿ ತೀವ್ರ ನಿಗಾ ಘಟಕದಲ್ಲಿ ಇದ್ದಾರೆ. ಒಂದು ದಿನದ ಅವಧಿಯಲ್ಲಿ 72 ಸಾವಿರ ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಈವರೆಗೆ 1.97 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.

ಒಂದು ಸಾವು ದೃಢ: ರಾಜ್ಯದಲ್ಲಿ ಶನಿವಾರ ಒಂದೇ ಒಂದು ಸಾವಿನ ಪ್ರಕರಣ ವರದಿಯಾಗಿರುವುದು ಸಮಾಧಾನಕರ ಸಂಗತಿ. ಮೈಸೂರಿನಲ್ಲಿ 40 ವರ್ಷದ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ. ಜ.10ರ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ 24 ಗಂಟೆಯ ಅವಧಿಯಲ್ಲಿ ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ. ಆದರೆ, ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. 630 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 4.10 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 47 ಪ್ರಕರಣಗಳು ದೃಢಪಟ್ಟಿವೆ. ಅಲ್ಲಿ ಕೋವಿಡ್ ಪೀಡಿತರಾದವರ ಒಟ್ಟು ಸಂಖ್ಯೆ 54,414ಕ್ಕೆ ತಲುಪಿದೆ. ದಕ್ಷಿಣ ಕನ್ನಡದಲ್ಲಿ 43, ತುಮಕೂರಿನಲ್ಲಿ 38, ಕಲಬುರ್ಗಿಯಲ್ಲಿ 35 ಪ್ರಕರಣಗಳು ಹೊಸದಾಗಿ ದೃಢಪಟ್ಟಿವೆ.

ರಾಜ್ಯದಲ್ಲಿ ಶನಿವಾರ 1,093 ಕೇಂದ್ರಗಳಲ್ಲಿ ಕೋವಿಡ್‌ ಲಸಿಕೆ ವಿತರಣೆ ಅಭಿಯಾನ ನಡೆದಿದ್ದು, 39,253 ಮಂದಿಗೆ ಲಸಿಕೆ ವಿತರಣೆ ಮಾಡಲಾಗಿದೆ. ಇವರಲ್ಲಿ 24,824 ಮಂದಿ ಹಿರಿಯ ನಾಗರಿಕರು ಸೇರಿದ್ದಾರೆ. ಈವರೆಗೆ 13.40 ಲಕ್ಷ ಡೋಸ್ ಲಸಿಕೆಯನ್ನು ಫಲಾನುಭವಿಗಳಿಗೆ ನೀಡಲಾಗಿದೆ. 4.83 ಲಕ್ಷ ಆರೋಗ್ಯ ಕಾರ್ಯಕರ್ತರು ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ಇವರಲ್ಲಿ 2.86 ಲಕ್ಷ ಮಂದಿ ಎರಡನೇ ಡೋಸ್ ಪೂರ್ಣಗೊಳಿಸಿದ್ದಾರೆ. 60 ವರ್ಷ ಮೇಲ್ಪಟ್ಟವರಲ್ಲಿ 3.17 ಲಕ್ಷ ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ. 45ರಿಂದ 60 ವರ್ಷದೊಳಗಿನ ಕೋವಿಡೇತರ ಕಾಯಿಲೆ ಎದುರಿಸುತ್ತಿರುವವರಲ್ಲಿ 62,203 ಮಂದಿ ಲಸಿಕೆ ಪಡೆದುಕೊಂಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು