ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಪ್ರಮುಖರ ಸಮಿತಿ ಸಭೆ ಭಾನುವಾರ ನಡೆಯಲಿದ್ದು, ರಾಜ್ಯದಲ್ಲಿ ಚುನಾವಣಾ ಸಿದ್ಧತೆ, ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯಲಿದೆ.
ಬೀದರ್ ಮತ್ತು ರಾಯಚೂರು ಪ್ರವಾಸ ಮುಗಿಸಿ ಭಾನುವಾರ ಸಂಜೆ ಬೆಂಗಳೂರಿಗೆ ಬಂದಿಳಿಯುವ ಅಮಿತ್ ಶಾ, ಹೋಟೆಲ್ ತಾಜ್ ವೆಸ್ಟೆಂಡ್‌ನಲ್ಲಿ ಗುಜರಾತಿ ಸಮಾಜದ ನೇತೃತ್ವದಲ್ಲಿ ಆಯೋಜಿಸಿರುವ ಅನಿವಾಸಿ ಗುಜರಾತಿಯರ ಸಮಾವೇಶದಲ್ಲಿ ಪಾಲ್ಗೊಳ್ಳುವರು. ನಂತರ ವಿಧಾನಸೌಧದ ಮುಂಭಾಗದಲ್ಲಿ ನಡೆಯುವ ‘ನಮ್ಮ ಬೆಂಗಳೂರು ಹಬ್ಬ’ದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ಬಸವೇಶ್ವರ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡುವರು.
ತಾಜ್ ವೆಸ್ಟೆಂಡ್ ಹೋಟೆಲ್‌ನಲ್ಲಿ ರಾತ್ರಿ 8.30ರಿಂದ ನಡೆಯುವ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪಕ್ಷದ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಪ್ರಮುಖ ನಾಯಕರು ಪಾಲ್ಗೊಳ್ಳುವರು.
ಹಳೆ ಮೈಸೂರು ಭಾಗದಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸುವ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಚುನಾವಣಾ ಗೆಲುವಿಗೆ ಕಾರ್ಯತಂತ್ರ ರೂಪಿಸಲು ಸಚಿವ ಶಾ ಮಾರ್ಗದರ್ಶನ ಮಾಡಲಿದ್ದಾರೆ ಎಂದು ಮೂಲಗಳು ಹೇಳಿವೆ.
ಸಿದ್ದರಾಮಯ್ಯ ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕೆ: ಬೊಮ್ಮಾಯಿ
ದಾವಣಗೆರೆ: ‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಅವರಿಗೇ ಬಿಟ್ಟ ವಿಚಾರ. ಎಲ್ಲೇ ಸ್ಪರ್ಧಿಸಿದರೂ ಬಿಜೆಪಿ ಅವರ ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಲಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣೆಯಲ್ಲಿ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆಯಲಿದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಏಪ್ರಿಲ್ ಮೊದಲ ವಾರದಲ್ಲಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಲಿದೆ ಎಂದು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.