ಜೆಡಿಎಸ್ ಅಧಿಕಾರಕ್ಕೆ ಬಂದರೆ ಉಚಿತ ಶಿಕ್ಷಣ, ಚಿಕಿತ್ಸೆ: ಕುಮಾರಸ್ವಾಮಿ

ವಿಜಯಪುರ: ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಎಲ್‌ಕೆಜಿಯಿಂದ ಪಿಯುಸಿ ವರೆಗೆ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಹೈಟೆಕ್ ಶಾಲೆ ಹಾಗೂ ಎಲ್ಲ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡಲು ಹೈಟೆಕ್ ಆಸ್ಪತ್ರೆ ನಿರ್ಮಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು.
ಜೆಡಿಎಸ್ ಪಂಚರತ್ನ ಯಾತ್ರೆ ಹಿನ್ನೆಲೆಯಲ್ಲಿ ನಗರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪಂಚರತ್ನ ಯೋಜನೆಗೆ ಜಾತಿ, ಧರ್ಮದ ಸೋಂಕಿಲ್ಲ, ಸರ್ವ ಜನತೆ ಹಿತವೇ ಈ ಯೋಜನೆ ಧ್ಯೇಯ. ಉಚಿತ ಶಿಕ್ಷಣ, ಉಚಿತ ಆರೋಗ್ಯ ಸೇವೆ ಒದಗಿಸಲಾಗುವುದು. ರೈತರ ಸಾಲ ಮನ್ನಾ ಮಾಡಲಾಗುವುದು, ಯುವಕರ ಕೈಗೆ ಉದ್ಯೋಗ ನೀಡಲಾಗುವುದು ಎಂದರು.
ರೈತರು ಸಾಲಗಾರರಾಗಬಾರದು, ರೈತರು ದೃತಿಗೆಡಬಾರದು, ನಾನಿದ್ದೇನೆ. ರೈತಬಂಧು, ರೈತ ಚೈತನ್ಯ ಯೋಜನೆಗಳನ್ನು ಜಾರಿ ಮಾಡಲಾಗುವುದು ಎಂದರು.
ಬಿತ್ತನೆ ಮಾಡಲು ರೈತರಿಗೆ ಎಕರೆಗೆ ₹10 ಸಾವಿರ ನೀಡಲಾಗುವುದು, ನೇರವಾಗಿ ರೈತನ ಖಾತೆಗೆ ಹಣ ಜಮೆ ಮಾಡಲಾಗುವುದು, ಹೈನುಗಾರಿಕೆ, ಕುರಿ ಸಾಕಾಣಿಕೆಗೆ ಸಹಾಯಧನ ನೀಡಲಾಗುವುದು ಎಂದು ತಿಳಿಸಿದರು.
ಜೆಡಿಎಸ್ ಸರ್ಕಾರ ರೈತರ ಸಾಲಮನ್ನಾಕ್ಕೆ ಮೀಸಲಿರಿಸಿದ್ದ ಸಾವಿರಾರು ಕೋಟಿ ಅನುದಾನವನ್ನು ಬೇರೆ ಉದ್ದೇಶಗಳಿಗೆ ಹಂಚಿಕೆ ಮಾಡುವ ಮೂಲಕ ಬಿಜೆಪಿ ಸರ್ಕಾರ ರೈತರಿಗೆ ದ್ರೋಹ ಮಾಡಿದೆ ಎಂದು ಆರೋಪಿಸಿದರು.
ಧರ್ಮದ ಹೆಸರಿನಲ್ಲಿ ಅಶಾಂತಿ ಸೃಷ್ಟಿಸುವ, ಯುವಕರ ಮನಸ್ಸು ಕೆಡಿಸುವ ಕೆಲಸ ಬಿಜೆಪಿ ಮಾಡುತ್ತಿರುವುದು ಖಂಡನಾರ್ಹ ಎಂದರು.
ಬಿಜೆಪಿಯ ಅಂತ್ಯಕಾಲ ಬಂದಿದೆ, ಪಾಪದ ಕೊಡ ತುಂಬಿದೆ, ಬಿಜೆಪಿ ಟೆಂಟ್ ಖಾಲಿ ಮಾಡಿಕೊಂಡು ವಾಪಾಸ್ಸಾಗುವ ದಿನ ಸನ್ನಿಹಿತವಾಗಿದೆ ಎಂದು ಹೇಳಿದರು.
ರಾಜಕೀಯ ನಿವೃತ್ತಿ:
ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಮಾತನಾಡಿ, ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂಬುದನ್ನು ಬರೆದಿಟ್ಟುಕೊಳ್ಳಿ, ಅವರು ಮುಖ್ಯಮಂತ್ರಿಯಾಗದೇ ಇದ್ದರೆ ನಾನು ರಾಜಕೀಯವಾಗಿ ನಿವೃತ್ತಿಯಾಗುತ್ತೇನೆ ಎಂದು ಘೋಷಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ನಾಗಠಾಣ ಶಾಸಕ ಡಾ.ದೇವಾನಂದ ಚವ್ಹಾಣ, ಎಚ್.ಡಿ.ಕುಮಾರಸ್ವಾಮಿ ಅವರ ಅವಧಿಯಲ್ಲಿ ಮಂಜೂರಾದ ಹೊರ್ತಿ ರೇವಣಸಿದ್ದೇಶ್ವರ ಏತನೀರಾವರಿ ಯೋಜನೆಯನ್ನು ಬಿಜೆಪಿ ತನ್ನ ಸಾಧನೆ, ತನ್ನ ಕೊಡುಗೆ ಎಂದು ಬಿಂಬಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದರು.
ಪ್ರಧಾನಿ ಮೂಲಕ ಲಂಬಾಣಿ ಸಮುದಾಯಕ್ಕೆ ಹಕ್ಕು ಪತ್ರ ನೀಡುವ ಮೂಲಕ ಕಣ್ಣೆರೊಸುವ ತಂತ್ರ ಅನುಸರಿಸಲಾಗುತ್ತಿದೆ. ಇದು ಎಂದೋ ಆಗಿರುವ ಕೆಲಸ, ಈಗ ನಮಗೆ ಬೇಕಾಗಿರುವುದು, ಶಿಕ್ಷಣ, ಉದ್ಯೋಗದ ಮೂಲಕ ಗುಳೇ ಹೋಗುವುದು ತಪ್ಪಿಸಬೇಕಾಗಿದೆ ಎಂದು ಹೇಳಿದರು.
ಶಾಸಕ ವೆಂಕಟಪ್ಪ ನಾಯಕ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಸ್. ಪಾಟೀಲ ಮಾಡಗಿ, ಮುಖಂಡರಾದ ಬಿ.ಡಿ. ಪಾಟೀಲ, ಶಿವಾನಂದ ಪಾಟೀಲ ಸೋಮಜ್ಯಾಳ, ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಜಿ. ಪಾಟೀಲ ಹಲಸಂಗಿ, ಡಾ.ಸುನೀತಾ ಚವ್ಹಾಣ, ಬಸವರಾಜ ಹೊನವಾಡ, ಪಾಲಿಕೆ ಸದಸ್ಯ ರಾಜು ಚವ್ಹಾಣ, ಬಂದೇನವಾಜ್ ಮಹಾಬರಿ ಇದ್ದರು.
***
ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ದೇವಾನಂದ ಚವ್ಹಾಣ ಅವರನ್ನು ಸಚಿವರನ್ನಾಗಿ ಮಾಡಲಾಗುವುದು
–ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.