ಮಂಗಳವಾರ, ಸೆಪ್ಟೆಂಬರ್ 29, 2020
21 °C

ರಸ್ತೆ, ಗಲ್ಲಿ, ಓಣಿ, ಮೈದಾನಗಳಲ್ಲಿ ಗಣೇಶೋತ್ಸವ ನಿಷೇಧ: ಮೆರವಣಿಗೆಯೂ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಸಾರ್ವಜನಿಕ ಸ್ಥಳಗಳು, ರಸ್ತೆ, ಗಲ್ಲಿ, ಓಣಿ ಮತ್ತು ಮೈದಾನಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ಗಣೇಶೋತ್ಸವ ಆಚರಿಸುವುದು ಹಾಗೂ ಮೆರವಣಿಗೆ ನಡೆಸುವುದನ್ನು ನಿರ್ಬಂಧಿಸಿರುವ  ರಾಜ್ಯ ಸರ್ಕಾರ, ಮನೆ ಮತ್ತು ದೇವಸ್ಥಾನಗಳಲ್ಲಿ ಗಣೇಶ ಮೂರ್ತಿ ಸ್ಥಾಪಿಸಿ ಪೂಜೆ ಮಾಡಬಹುದು ಎಂದು  ಆದೇಶ ಹೊರಡಿಸಿದೆ.

ಕೋವಿಡ್ ಹರಡುತ್ತಿರುವುದನ್ನು ತಡೆಯಲು ಎಲ್ಲ ರೀತಿಯ ಸಾರ್ವಜನಿಕ ಕಾರ್ಯಕ್ರಮಗಳನ್ನೂ ನಿರ್ಬಂಧಿಸಲಾಗಿದೆ. ಕೇಂದ್ರ ಸರ್ಕಾರ ಕೋವಿಡ್‌–19 ನಿಯಂತ್ರಿಸಲು ಹೊರಡಿಸಿರುವ ಮಾರ್ಗಸೂಚಿ ಗಣೇಶೋತ್ಸವಕ್ಕೂ ಅನ್ವಯವಾಗಲಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು, ಗಣೇಶೋತ್ಸವ ಆಚರಿಸುವ ಕುರಿತ ವಿಶೇಷ ಮಾರ್ಗಸೂಚಿಯನ್ನು ಶುಕ್ರವಾರ ಬಿಡುಗಡೆ ಮಾಡಿದ್ದಾರೆ.

ಮಾರ್ಗಸೂಚಿಯಲ್ಲಿರುವ ನಿಬಂಧನೆಗಳನ್ನು ಉಲ್ಲಂಘಿಸಿದರೆ ಭಾರತೀಯ ದಂಡ ಸಂಹಿತೆಯ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದೂ ಅವರು ಎಚ್ಚರಿಸಿದ್ದಾರೆ.

ಗಣೇಶೋತ್ಸವವನ್ನು ಸಾಧ್ಯವಾದಷ್ಟೂ ಸರಳವಾಗಿ ಆಚರಿಸಬೇಕು. ತಮ್ಮ ಮನೆಗಳು ಅಥವಾ ದೇವಸ್ಥಾನಗಳಲ್ಲಿ ಗಣೇಶ ಮೂರ್ತಿ ಇಟ್ಟು ಧಾರ್ಮಿಕ ಆಚರಣೆಗಳನ್ನು ಮಾಡಬಹುದು. ಇವೆರಡೂ ಸ್ಥಳಗಳನ್ನು ಹೊರತುಪಡಿಸಿ ಬೇರೆಲ್ಲೂ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವಂತಿಲ್ಲ. ಮನೆ ಮತ್ತು ದೇವಸ್ಥಾನಗಳಲ್ಲಿ ಪ್ರತಿಷ್ಠಾಪಿಸಿದ ಗೌರಿ–ಗಣೇಶ ಮೂರ್ತಿಗಳನ್ನು ನದಿ, ಕೆರೆ, ಕೊಳ, ಬಾವಿ ಮತ್ತು ಕಲ್ಯಾಣಿಗಳಲ್ಲಿ ವಿಸರ್ಜಿಸುವಂತಿಲ್ಲ. ಮನೆಯಲ್ಲಿ ಪ್ರತಿಷ್ಠಾಪಿಸಿದ ಗೌರಿ–ಗಣೇಶ ಮೂರ್ತಿಗಳನ್ನು ಮನೆಯಲ್ಲಿಯೇ ವಿಸರ್ಜಿಸಬೇಕು. ದೇವಸ್ಥಾನಗಳಿಗೂ ಇದೇ ನಿಯಮ ಅನ್ವಯಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಗಣೇಶ ಮೂರ್ತಿಯನ್ನು ತರುವಾಗ ಮತ್ತು ವಿಸರ್ಜಿಸುವ ಸಂದರ್ಭದಲ್ಲಿ ಮೆರವಣಿಗೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ದೇವಸ್ಥಾನಗಳಲ್ಲಿ ಗಣೇಶ ಹಬ್ಬ ಆಚರಿಸುವ ದಿನಗಳಲ್ಲಿ ಪ್ರತಿ ದಿನ ದೇವಸ್ಥಾನಗಳನ್ನು ಸ್ಯಾನಿಟೈಸ್‌ ಮಾಡಬೇಕು. ಭಕ್ತರನ್ನು ಒಳಗೆ ಬಿಡುವಾಗ ಥರ್ಮಲ್‌ ಸ್ಕ್ರೀನಿಂಗ್‌ ಮಾಡಿ, ಸ್ಯಾನಿಟೈಸರ್‌ ನೀಡಬೇಕು. ಭಕ್ತರು ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳಬೇಕು ಮತ್ತು ಮುಖಗವಸು ಹಾಕಿಕೊಳ್ಳವುದು ಕಡ್ಡಾಯ ಎಂದು ವಿಜಯಭಾಸ್ಕರ್‌ ಹೇಳಿದ್ದಾರೆ.

ಗಣೇಶೋತ್ಸವ ಆಚರಣೆ ಸಂದರ್ಭದಲ್ಲಿ ಸರ್ಕಾರ, ಜಿಲ್ಲಾಡಳಿತ, ಪೊಲೀಸ್‌, ಮಹಾನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳು, ಪ್ರಾಧಿಕಾರಗಳು ಹೊರಡಿಸುವ ಎಲ್ಲ ಆದೇಶಗಳನ್ನೂ ಪಾಲಿಸಲೇಬೇಕು. ಕಾನೂನು ಸುವ್ಯವಸ್ಥೆಗೆ ಭಂಗಬಾರದಂತೆ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಗಣೇಶೋತ್ಸವಕ್ಕೆ ಅನುಮತಿ ನೀಡಿ’
ಹುಬ್ಬಳ್ಳಿ:
ಕೋವಿಡ್ ನೆಪ ಹೇಳದೆ ರಾಜ್ಯ ಸರ್ಕಾರ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಬೇಕು ಎಂದು ಒತ್ತಾಯಿಸಿ ಆ.17ರಂದು ಮಧ್ಯಾಹ್ನ 12 ಗಂಟೆಗೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಕಚೇರಿಗಳ ಎದುರು ಗಣೇಶಮೂರ್ತಿಯೊಂದಿಗೆ ಧರಣಿ ನಡೆಸಲಾಗುವುದು ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಗಣೇಶ ಮಹಾಮಂಡಳಗಳ ಜೊತೆಗೂಡಿ ಧರಣಿ ನಡೆಸಲಾಗುವುದು. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುವ ಅಧಿಕಾರವನ್ನು ಸರ್ಕಾರ ಜಿಲ್ಲಾಧಿಕಾರಿಗಳಿಗೆ ಕೊಟ್ಟಿದೆ. ಬಹಳಷ್ಟು ಜಿಲ್ಲಾಧಿಕಾರಿಗಳು ಅನುಮತಿ ನೀಡಿಲ್ಲ. ಬಾರ್‌, ಜಿಮ್‌, ದೇವಸ್ಥಾನಗಳು ಸೇರಿದಂತೆ ಎಲ್ಲದಕ್ಕೂ ಅನುಮತಿ ಕೊಟ್ಟಿರುವಾಗ ಗಣೇಶೋತ್ಸವಕ್ಕೆ ಅನುಮತಿ ಏಕಿಲ್ಲ’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು