ಸೋಮವಾರ, ಡಿಸೆಂಬರ್ 5, 2022
22 °C

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ನಿರ್ಧಾರ: ಸಿಎಂ ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ‌. ಈ ಸಂಬಂಧ ಶನಿವಾರವೇ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ವಿಧಾನಮಂಡಲದ ಉಭಯ ಸದನಗಳ ನಾಯಕರ ಜತೆ ಶುಕ್ರವಾರ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಆಯೋಗದ ಶಿಫಾರಸಿನಂತೆ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡ 15ರಿಂದ ಶೇ 17ಕ್ಕೆ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲು ಸಭೆಯಲ್ಲಿ ಒಮ್ಮತದ ನಿರ್ಧಾರ ಮಾಡಲಾಗಿದೆ. ಎರಡೂ ಸಮುದಾಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ನಾಗಮೋಹನ ದಾಸ್ ಆಯೋಗ ಹಾಗೂ ನ್ಯಾಯಮೂರ್ತಿ ಸುಭಾಷ್ ಅಡಿ ನೇತೃತ್ವದ ಸಮಿತಿಗಳ ಶಿಫಾರಸುಗಳನ್ನೂ ಒಪ್ಪಿಕೊಳ್ಳಲಾಗಿದೆ ಎಂದರು.

ಸಂಪುಟ ಸಭೆಯಲ್ಲಿ ವರದಿಯನ್ನು ಒಪ್ಪಿಕೊಂಡು ವಿಧಾನಮಂಡಲದ ಡಿಸೆಂಬರ್ ಅಧಿವೇಶನದಲ್ಲಿ ಮಂಡಿಸಲಾಗುವುದು. ಅಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗುವುದು ಎಂದರು.

ಮೀಸಲಾತಿ ಪ್ರಮಾಣ ಶೇಕಡ 50ರಷ್ಟನ್ನು ಮೀರಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸಂವಿಧಾನದ ಪರಿಚ್ಛೇದ 9ರ ವ್ಯಾಪ್ತಿಗೆ ಕರ್ನಾಟಕದ ಮೀಸಲಾತಿ ವಿಷಯವನ್ನು ಸೇರಿಸಿದರೆ ನ್ಯಾಯಾಲಯದ ಪರಿಶೀಲನೆ ವ್ಯಾಪ್ತಿಯಿಂದ ಹೊರಗಿಡಲು ಸಾಧ್ಯ. ಅದಕ್ಕೆ ಪೂರಕವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಎಸ್.ಸಿ ಮತ್ತು ಎಸ್.ಟಿ ಮೀಸಲಾತಿ ಹೆಚ್ಚಳದಿಂದ ಇತರ ಯಾವುದೇ ಸಮುದಾಯಗಳ ಮೀಸಲಾತಿ ಕಡಿತವಾಗುವುದಿಲ್ಲ. ಎಲ್ಲ ಸಮುದಾಯಗಳ ಮೀಸಲಾತಿ ಪ್ರಮಾಣ ಈಗಿನಂತೆ ಮುಂದುವರಿಯಲಿದೆ. ಎಸ್.ಸಿ ಮತ್ತು ಎಸ್.ಟಿ ಸಮುದಾಯಗಳ ಮೀಸಲಾತಿ ಪ್ರಮಾಣ ಮಾತ್ರ ಹೆಚ್ಚಳವಾಗಲಿದೆ ಎಂದು ಬೊಮ್ಮಾಯಿ ಹೇಳಿದರು.

ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿವಿಧ ಸಮುದಾಯಗಳ ಬೇಡಿಕೆ ಕುರಿತು ಹಿಂದುಳಿದ ವರ್ಗಗಳ ಆಯೋಗ ಹಾಗೂ ಸುಭಾಷ್ ಅಡಿ ಸಮಿತಿಗಳಲ್ಲಿ ಪರಿಶೀಲನೆ ನಡೆಯುತ್ತಿದೆ. ವರದಿಗಳು ಬಂದ ತಕ್ಷಣ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಎಸ್.ಸಿ ಮತ್ತು ಎಸ್.ಟಿ ಒಳ‌ ಮೀಸಲಾತಿಗೆ ಸಂಬಂಧಿಸಿದಂತೆಯೂ ಹಲವು ಬೇಡಿಕೆಗಳಿವೆ. ಆ ಕುರಿತು ಕೂಡ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು