ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಜಾಬ್: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಗೆ- ಶೀಘ್ರ ನಿರ್ಧಾರ ಎಂದ ವಕೀಲರು

Last Updated 15 ಮಾರ್ಚ್ 2022, 10:45 IST
ಅಕ್ಷರ ಗಾತ್ರ

ಬೆಂಗಳೂರು: ಶಾಲಾ, ಕಾಲೇಜು ತರಗತಿಗಳಲ್ಲಿ ಹಿಜಾಬ್‌ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿರುವ ಕರ್ನಾಟಕ ಹೈಕೋರ್ಟ್‌ನ ಮಹತ್ವದ ತೀರ್ಪಿನ ನಂತರ, ಮಂಗಳವಾರ ವಿದ್ಯಾರ್ಥಿಗಳ ಪರ ಹಾಜರಾಗಿದ್ದ ವಕೀಲರು ಸುಪ್ರೀಂಕೋರ್ಟ್ ಮೊರೆ ಹೋಗುವ ಬಗ್ಗೆ ಶೀಘ್ರದಲ್ಲೇ ನಿರ್ಧರಿಸುವುದಾಗಿ ತಿಳಿಸಿದ್ದಾರೆ.

ತರಗತಿಗಳಿಗೆ ಹಿಜಾಬ್ ಧರಿಸಿ ಹಾಜರಾಗುವುದಕ್ಕೆ ನಿರ್ಬಂಧ ವಿಧಿಸಿರುವ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್‌ನ ವಿಶೇಷ ಪೀಠ ಎತ್ತಿ ಹಿಡಿದಿದೆ.

'ಹೈಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ನಾವು ಆದೇಶದ ಪ್ರತಿಯನ್ನು ಪಡೆದುಕೊಳ್ಳುತ್ತೇವೆ ಮತ್ತು ಈ ವಿಚಾರವಾಗಿ ಸುಪ್ರೀಂ ಮೊರೆ ಹೋಗಬಹುದೇ ಎಂಬುದನ್ನು ಪರಿಶೀಲಿಸುತ್ತೇವೆ' ಎಂದು ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಶತಾಬಿಶ್ ಶಿವಣ್ಣ ಹೇಳಿದ್ದಾರೆ.

'ಕಳೆದ 11 ದಿನಗಳಿಂದ ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯ ಇಂದು ತೀರ್ಪು ನೀಡಿದೆ. ಆದೇಶದ ಪ್ರತಿಯನ್ನು ಪಡೆದುಕೊಂಡಿದ್ದೇವೆ. ಇದನ್ನು ವಿಸ್ತೃತವಾಗಿ ಅಧ್ಯಯನ ಮಾಡಿದ ನಂತರ ಮುಂದಿನ ನಿರ್ಧಾರವನ್ನು ಕೈಗೊಳ್ಳಲಾಗುತ್ತದೆ' ಎಂದು ಪುನರುಚ್ಚರಿಸಿದರು.

ಇದೇ ವೇಳೆ ಕಾಂಗ್ರೆಸ್ ಮತ್ತು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಸಿ.ಎಂ. ಇಬ್ರಾಹಿಂ, ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ಹೇಳಿದ್ದಾರೆ. 'ಈ ಸಂಬಂಧ ಮುಂಬೈನಲ್ಲಿ ವಕೀಲರ ಜತೆ ಮಾತನಾಡಿದ್ದೇನೆ, ಯಾರೂ ಬೀದಿಗೆ ಬರಬಾರದು' ಎಂದು ಮನವಿ ಮಾಡಿದ್ದಾರೆ.

ಹಿಜಾಬ್‌ನಿಂದ ಇತರರಿಗೆ ಯಾವುದೇ ತೊಂದರೆಯಾಗುವುದಿಲ್ಲ ಮತ್ತು ಅವರು ಅದನ್ನು ಸಮವಸ್ತ್ರದೊಂದಿಗೆ ಧರಿಸುತ್ತಾರೆ ಎಂದು ಪಕ್ಷವು ಅಭಿಪ್ರಾಯಪಟ್ಟಿದೆ. ಆದರೆ ಈಗ ಈ ವಿಚಾರವಾಗಿ ನ್ಯಾಯಾಲಯದ ತೀರ್ಪು ಬಂದಿದ್ದು, ಈ ವಿಚಾರ ಮುಗಿದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನೊಂದೆಡೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಹೈಕೋರ್ಟ್ ತೀರ್ಪನ್ನು ಎಲ್ಲರೂ ಗೌರವಿಸಬೇಕು. ಮತ್ತೆ ವಿವಾದ ಹುಟ್ಟುಹಾಕಬೇಡಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT