ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಸಾಮಾಜಿಕ ನ್ಯಾಯಕ್ಕೆ ಚಟ್ಟ ಕಟ್ಟಿ ಸ್ಮಶಾನ ಕೇಕೆ ಹಾಕುತ್ತಿದೆ: HDK ಕಿಡಿ

Last Updated 25 ಮಾರ್ಚ್ 2023, 13:32 IST
ಅಕ್ಷರ ಗಾತ್ರ

ಬೆಂಗಳೂರು: ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಹೊಸ ಮೀಸಲಾತಿ ಘೋಷಣೆ ಮಾಡುವ ಮೂಲಕ ಸಾಮಾಜಿಕ ನ್ಯಾಯಕ್ಕೆ ಚಟ್ಟ ಕಟ್ಟಿ ಸ್ಮಶಾನ ಕೇಕೆ ಹಾಕುತ್ತಿದೆ ಎಂದು ಜೆಡಿಎಸ್‌ ನಾಯಕ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ಗಳ ಮೂಲಕ ಅವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ರಾಜ್ಯ ಬಿಜೆಪಿ ಸರಕಾರ ಪ್ರತಿಯೊಂದರಲ್ಲಿಯೂ ರಾಜಕೀಯ ಮಾಡುತ್ತದೆ. ಪ್ರತಿಯೊಂದರಲ್ಲಿಯೂ ಚುನಾವಣೆಯನ್ನೇ ಕಾಣುತ್ತದೆ! ಸಂಪುಟದಲ್ಲಿ ಸಭೆಯ ಮೀಸಲಾತಿ ಹಕೀಕತ್ತೇ ಒಂದು ಖತರ್ನಾಕ್ ನಾಟಕ. ಕೊಡಲು ಕೈ ಬಾರದು, ಕೊಡಲೂ ಆಗದು. ಹಣೆಗೆ ಮಣೆಯಿಂದ ಬಾರಿಸಿಕೊಳ್ಳುವುದೂ ಎಂದರೆ ಇದೆ. ಪಾಪದ ಪಾಶ ಬಿಜೆಪಿ ಬೆನ್ನುಬಿದ್ದಿದೆ ಎಂದು ಕಿಡಿಕಾರಿದ್ದಾರೆ.

ಚುನಾವಣೆ ಎಂಬ ಚದುರಂಗದಾಟದಲ್ಲಿ ಬಿಜೆಪಿ ಬಿಸಿಲುಗುದರೆಯ ಮೇಲೆ ಸವಾರಿ ಮಾಡುತ್ತಿದೆ, ಅಷ್ಟೇ ಅಲ್ಲ; ಕ್ರೂರ ವ್ಯಾಘ್ರನ ಮೇಲೂ ಕುಳಿತು ಕುರುಡಾಗಿ ಸರ್ಕಸ್‌ ಮಾಡುತ್ತಿದೆ. ಸಾಗು, ಇಲ್ಲವೇ ಹೋಗು ಎನ್ನುವ ದುಸ್ಥಿತಿಯಲ್ಲಿ ತೋಯ್ದಾಡುತ್ತಿದೆ. ಮತದ ಹೆಸರಿನಲ್ಲಿ ಮತಯುದ್ಧ ಗೆಲ್ಲಬಹುದೆಂದು ಚಟಕ್ಕೆ ಬಿದ್ದಿರುವ ಬಿಜೆಪಿ ಈಗ ಸರ್ವಜನರ ಕಲ್ಯಾಣದ ಪ್ರತೀಕವಾದ ಕರ್ನಾಟಕದಲ್ಲಿ ಮೀಸಲು ಕಳ್ಳಾಟ ಆಡಿದೆ. ಗೆಲ್ಲಲೇಬೇಕು, ಗೆಲ್ಲದಿದ್ದರೆ ಇನ್ನೊಬ್ಬರ ತಟ್ಟೆಗೆ ಕೈ ಹಾಕು, ಆಗದಿದ್ದರೆ ಕಸಿದುಕೋ.. ಇದೇ ಕಮಲಪಕ್ಷದ ಕುಟಿಲತೆ ಎಂದು ಹರಿಹಾಯ್ದಿದ್ದಾರೆ.

ಮೂರೂವರೆ ವರ್ಷದಿಂದ ಗಾಳಿಯಲ್ಲಿ ಗಾಳೀಪಟ ಹಾರಿಸಿಕೊಂಡೇ ಕಾಗಕ್ಕಗುಬ್ಬಕ್ಕನ ಕಥೆ ಹೇಳಿದ್ದ ಬಿಜೆ‍ಪಿ, ಚುನಾವಣೆ ಗಿಮಿಕ್ಕಿನ ಸಂಪುಟ ಸಭೆಯಲ್ಲಿ ಮೀಸಲು ತುಪ್ಪವನ್ನು ಜನರ ಹಣೆಗೆ ಸವರುವ ಬೂಟಾಟಿಕೆ ನಡೆಸಿದೆ. ಕಲ್ಲಬೆಕ್ಕು ಕಣ್ಮುಚ್ಚಿ ಹಾಲು ಕುಡಿಯಲು ಹೊರಟಿದೆ. ಒಬ್ಬರ ಅನ್ನ ಕಸಿದುಕೊಂಡು ಇನ್ನೊಬ್ಬರ ಹೊಟ್ಟೆ ತುಂಬಿಸಬಹುದು ಎನ್ನುವ ಬಿಜೆಪಿಗರ ರಕ್ಕಸಚಾಳಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಆಶಯಕ್ಕೆ ಶಾಶ್ವತ ಸಮಾಧಿ ಕಟ್ಟುವಂತಿದೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆಯೇ ಇಲ್ಲದವರ ನಡವಳಿಕೆ ಇದು ಎಂದು ಹೇಳಿದ್ದಾರೆ.

ಮೀಸಲು ಕೊಡುವುದು ತಪ್ಪಲ್ಲ, ಆದರೆ, ತನ್ನ ಹಿಡೆನ್‌ ಅಜೆಂಡಾವನ್ನು ಮೀಸಲಿನೊಳಕ್ಕೂ ನುಸುಳಿಸಿದ ಬಿಜೆಪಿ ನರಿ ರಾಜಕಾರಣ ಆಘಾತಕಾರಿ. ಸಾಮಾಜಿಕ ನ್ಯಾಯದಿಂದಲೇ ಇಡೀ ದೇಶಕ್ಕೆ ಮೇಲ್ಪಂಕ್ತಿಯಾಗಿದ್ದ ಕರ್ನಾಟಕವನ್ನು ಮೀಸಲು ಮೂಲಕವೇ ವಿಭಜಿಸಿ ಮತಫಸಲು ತೆಗೆಯುವ ದುರಾಲೋಚನೆಯೊಂದಿಗೆ ಬಿಜೆಪಿ, ಸಾಮಾಜಿಕ ನ್ಯಾಯಕ್ಕೆ ಚಟ್ಟ ಕಟ್ಟಿ ಸ್ಮಶಾನ ಕೇಕೆ ಹಾಕುತ್ತಿದೆ ಎಂದು ಹೇಳಿದ್ದಾರೆ.

ಒಳ ಮೀಸಲು ಎನ್ನುವುದು ಒಡೆಯಲಾಗದ ಕಗ್ಗಂಟೇನಲ್ಲ. ಬಿಜೆಪಿ ಸರಕಾರಕ್ಕೆ ಇಚ್ಛಾಶಕ್ತಿ ಇಲ್ಲವಷ್ಟೇ. ಆದರೆ, ಚುನಾವಣೆ ಹೊತ್ತಿನಲ್ಲಿ ಜಾತಿ ಜಾತಿಗಳ ನಡುವೆ ವೈಮನಸ್ಸು ತಂದು ಉರಿಯುವ ಕಿಚ್ಚಿನಲ್ಲಿ ಚಳಿ ಕಾಯಿಸಿಕೊಳ್ಳಬೇಕು ಎನ್ನುವುದೇ ಬಿಜೆಪಿಯ ಅಸಲಿ ಆಟ. ಮಾಜಿ ಪ್ರಧಾನಿಗಳಾದ ಶ್ರೀ ಎಚ್‌ಡಿ ದೇವೇಗೌಡ ಅವರು ಮುಸ್ಲೀಮರಿಗೆ 2ಬಿ ಅಡಿಯಲ್ಲಿ ನೀಡಿದ್ದ ಶೇ.4ರಷ್ಟು ಮೀಸಲು ಕಸಿದುಕೊಂಡು, ಅದಕ್ಕೆ ಆರ್ಥಿಕ ಹಿಂದುಳಿದಿರುವಿಕೆಯ ಲೇಪ ಹಚ್ಚಿ, ಮೀಸಲು ಆಶಯವನ್ನೇ ಹಾಳುಗೆಡವಿ ಬದುಕುಗಳನ್ನು ಸುಟ್ಟು ಹಾಕುವ ದುಷ್ಟತನವಲ್ಲದೆ ಮತ್ತೇನೂ ಅಲ್ಲ ಎಂದು ಖಾರವಾಗಿ ಹೇಳಿದ್ದಾರೆ.

ಬಿಜೆಪಿ ಪಾಪದಕೊಡ ಭರ್ತಿ ಆಗಿದೆ. ರಾಜ್ಯವನ್ನು ಧರ್ಮದ ಹೆಸರಿನಲ್ಲಿ ವಿಭಜಿಸಿ, ಜಾತಿಜಗಳಕ್ಕೆ ತುಪ್ಪ ಸುರಿಯುತ್ತಿದೆ. ಅರಗಿನ ಮನೆಯಲ್ಲಿ ಪಾಂಡವರಿಗೆ ಕೊಳ್ಳಿ ಇಡಲು ಹೋಗಿ ಮುಂದೊಮ್ಮೆ ತಾವೇ ಎಸಗಿದ ಪಾಪಕುಂಡದಲ್ಲಿ ಬೆಂದುಹೋದ ಕೌರವರಂತೆ, ಬಿಜೆಪಿಗರು ಮದವೇರಿ ಮೆರೆಯುತ್ತಿದ್ದಾರೆ.ಉರಿಯುತ್ತಿರುವ ಜನರ ಒಡಲು ತಣ್ಣಗಾಗುವುದಿಲ್ಲ. ನೆನಪಿರಲಿ ಎಂದು ಎಚ್ಚರಿಕೆ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT