ಮಂಗಳವಾರ, ನವೆಂಬರ್ 29, 2022
21 °C

ನವರಾತ್ರಿಗೆ ಕರೆಂಟ್ ಶಾಕ್; ಕೇಂದ್ರದ ಹಾದಿಯಲ್ಲೇ ರಾಜ್ಯ ಸರ್ಕಾರ: ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಸರ್ಕಾರ ಇಂಧನ ದರ ಏರಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಶನಿವಾರ ಆರೋಪಿಸಿದ್ದಾರೆ.  

ಈ ಕುರಿತು 'ನವರಾತ್ರಿಗೆ ಕರೆಂಟ್ ಶಾಕ್' ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ, ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ ಎಂದು ಹೇಳಿದ್ದಾರೆ. 

ಇದನ್ನೂ ಓದಿ: 

ವಿಧಾನಮಂಡಲ ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್ ದರ ಏರಿಕೆ ಆಗಿದೆ. ಏನೀ ಹುನ್ನಾರ? ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರ್ಕಾರ, ಕರೆಂಟ್‌ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ.‌ ಪ್ರತಿ ಯೂನಿಟ್‌ಗೆ 24ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ ಮತ್ತು ಖಂಡನೀಯ ಎಂದು ಪ್ರತಿಕ್ರಿಯಿಸಿದ್ದಾರೆ. 

ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿವೆ. ವಿದ್ಯುತ್‌ ಉತ್ಪಾದನೆ ಉತ್ತಮವಾಗಿದೆ. ಆದರೂ ಖರೀದಿ ವೆಚ್ಚದಲ್ಲಿ 1,244 ಕೋಟಿ ರೂ. ಹೆಚ್ಚಳ ಆಗಿದೆ ಎನ್ನುವ ಲೆಕ್ಕವನ್ನು ನಂಬುವ ರೀತಿಯಲ್ಲಿ ಇಲ್ಲ. ಇಂಧನ ವಲಯದ ಕೆಲ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಎಸ್ಕಾಂಗಳ ಭುಜದ ಮೇಲೆ ಗುಂಡಿಟ್ಟು, ಜನರಿಗೆ ಹೊಡೆಯುವ ಕೆಲಸ ಆಗುತ್ತಿದೆ ಎಂದು ಹೇಳಿದ್ದಾರೆ. 

ರಾಜ್ಯ ಬಿಜೆಪಿ ಸರಕಾರ ಜನರ ಪರ ಇಲ್ಲ ಎನ್ನುವುದು ಸತ್ಯ. ಜಾಗತಿಕ ಪೇಟೆಯಲ್ಲಿ ಕಚ್ಚಾತೈಲದ ಬೆಲೆ ನಿರಂತರ ಇಳಿದರೂ ದೇಶದಲ್ಲಿ ತೈಲಬೆಲೆ ಇಳಿಸದ ಕೇಂದ್ರದ ಬಿಜೆಪಿ ಸರ್ಕಾರದ ಹಾದಿಯಲ್ಲೇ ರಾಜ್ಯದ ಬಿಜೆಪಿ ಸರ್ಕಾರವೂ ಸಾಗಿದೆ. ವಿದ್ಯುತ್‌ ದರದ ನಿರಂತರ ಏರಿಕೆ ಬಗ್ಗೆ ಗಂಭೀರ ಅನುಮಾನಗಳಿವೆ ಎಂದು ಹೇಳಿದ್ದಾರೆ. 

ಇದನ್ನೂ ಓದಿ: 

ಇಂಧನ ಹೊಂದಾಣಿಕೆ ಶುಲ್ಕವನ್ನು (ಎಫ್‌ಎಸಿ) ಅಕ್ಟೋಬರ್‌ 1ರಿಂದ 2023ರ ಮಾರ್ಚ್‌ 31ರವರೆಗೆ ಅನ್ವಯ ವಾಗುವಂತೆ (6 ತಿಂಗಳ ಅವಧಿಗೆ) ಪರಿಷ್ಕರಿಸಿ ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗವು (ಕೆಇಆರ್‌ಸಿ) ಆದೇಶ ಹೊರಡಿಸಿದೆ. ಹೀಗಾಗಿ, ಪ್ರತಿ ಯೂನಿಟ್‌ಗೆ 24 ಪೈಸೆಯಿಂದ 43 ಪೈಸೆಯವರೆಗೆ ಹೆಚ್ಚಿಸಿ ಆದೇಶ ನೀಡಿದೆ. ಇದರಿಂದ ಜುಲೈ ತಿಂಗಳಿನಲ್ಲಷ್ಟೇ ವಿದ್ಯುತ್‌ ದರ ಏರಿಕೆಯ ಬಿಸಿ ತಾಗಿಸಿ ಕೊಂಡಿದ್ದ ರಾಜ್ಯದ ಜನ, ಅಕ್ಟೋಬರ್‌ 1ರಿಂದ ಅನ್ವಯವಾಗುವಂತೆ ಪ್ರತಿ ತಿಂಗಳು ವಿದ್ಯುತ್‌ ಬಳಕೆಗೆ ಹೆಚ್ಚಿನ ವೆಚ್ಚ ಮಾಡಬೇಕಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು