ಭಾನುವಾರ, ಸೆಪ್ಟೆಂಬರ್ 25, 2022
21 °C
ಸಭೆ ನಡೆಸಿದ ಭೂ ವಂಚಿತರ ಹೋರಾಟ ಸಮಿತಿ

ಪಿಟಿಸಿಎಲ್‌ ಕಾಯ್ದೆ ಸಮಗ್ರ ತಿದ್ದುಪಡಿಗೆ ಆಗ್ರಹ: ಅಹೋರಾತ್ರಿ ಹೋರಾಟಕ್ಕೆ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಭೂಮಿ ಪರಭಾರೆ ನಿಷೇಧ (ಪಿಟಿಸಿಎಲ್) ಕಾಯ್ದೆ ಸಮಗ್ರ ತಿದ್ದುಪಡಿ ಬಗ್ಗೆ ಮುಂದಿನ ಅಧಿವೇಶನದ ವೇಳೆಗೆ ಸರ್ಕಾರ ಸ್ಪಷ್ಟ ನಿರ್ಧಾರ ಪ್ರಕಟಿಸದಿದ್ದರೆ ಅಹೋರಾತ್ರಿ ಹೋರಾಟ ನಡೆಸಲು ದಲಿತ ಮುಖಂಡರು ನಿರ್ಧರಿಸಿದ್ದಾರೆ.

ಭೂ ವಂಚಿತರ ಹೋರಾಟ ಸಮಿತಿ ಬುಧವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಪ್ರಜಾ ಪರಿವರ್ತನಾ ವೇದಿಕೆಯ ಅಧ್ಯಕ್ಷ ಬಿ.ಗೋಪಾಲ್ ಮಾತನಾಡಿ, ‘ವಿಧಾನ ಮಂಡಲ ಅಧಿವೇಶನ ಪ್ರಾರಂಭವಾಗುವ ಮುನ್ನ ಕಾಯ್ದೆ ತಿದ್ದುಪಡಿ ಕುರಿತು ರಾಜ್ಯ ಸರ್ಕಾರ ಸರಿಯಾದ ನಿರ್ಧಾರ ಕೈಗೊಳ್ಳಬೇಕು. ನಿರ್ಲಕ್ಷ್ಯ ವಹಿಸಿದರೆ ನಿರಂತರ ಹೋರಾಟ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಮಾತನಾಡಿ, ‘ಪಿಟಿಸಿಎಲ್ ಕಾಯ್ದೆ ತಿದ್ದುಪಡಿ ಅನುಷ್ಠಾನದ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲು ಇದೇ 18ರಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 51 ಶಾಸಕರ ಸಭೆ ಕರೆಯಲಾಗಿದೆ. ಸಭೆಯಲ್ಲಿ ವ್ಯಕ್ತವಾಗುವ ಅಭಿಪ್ರಾಯ ಆಧರಿಸಿ 19ರಂದು ದಲಿತ ಮುಖಂಡರ ಸಭೆ ನಡೆಸುವುದು ಸೂಕ್ತ’ ಎಂದರು.

ಪಿಟಿಸಿಎಲ್ ತಿದ್ದುಪಡಿ ಕಾಯ್ದೆ ಅನುಷ್ಠಾನಕ್ಕೆ ಸಂಘ ಪರಿವಾರ ಅವಕಾಶ ನೀಡುತ್ತಿಲ್ಲ. ದಲಿತ ಸಮುದಾಯದವರು ಒಟ್ಟಾಗಿ ದೊಡ್ಡಮಟ್ಟದಲ್ಲಿ ಹೋರಾಟ ನಡೆಸಬೇಕಿದೆ ಎಂದು ಹೇಳಿದರು.

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಘಟಕದ ಅಧ್ಯಕ್ಷ ಎಂ ವೆಂಕಟಸ್ವಾಮಿ, ‘ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಮುಖ್ಯಮಂತ್ರಿ ಸಿದ್ಧವಿದ್ದರೂ ಕಂದಾಯ ಸಚಿವ ಆರ್.ಅಶೋಕ ಅಡ್ಡಿಪಡಿಸುತ್ತಿದ್ದಾರೆ. ಶಾಸಕರಾದ ಎಂ.ಪಿ.ಕುಮಾರಸ್ವಾಮಿ ಮತ್ತು ಎನ್.ಮಹೇಶ್ ಅವರು ಪ್ರಾಮಾಣಿಕವಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ’ ಎಂದರು. ಮುಖಂಡರಾದ ಮಾವಳ್ಳಿ ಶಂಕರ್, ಹೆಣ್ಣೂರು ಶ್ರೀನಿವಾಸ್ ಮಾತನಾಡಿದರು.

ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ಹೆಣ್ಣೂರು ಶ್ರೀನಿವಾಸ್ ಮಾತನಾಡಿದರು.‌ ಅನಂತ ನಾಯಕ್, ನರಸಿಂಹ ನಾಯಕ್, ಎಂ.ಎಚ್. ಮಂಜುನಾಥ್, ಈಶ್ವರ್ ಬಳ್ಳಾರಿ, ಶಾಂತಕುಮಾರ್ ಚಳ್ಳಕೆರೆ, ತುಮಕೂರಿನ ದಾಸಪ್ಪ ಸಭೆಯಲ್ಲಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು