ಪಠ್ಯಪುಸ್ತಕ ಪರಿಷ್ಕರಣೆ ವಿವಾದ | ದೇವೇಗೌಡರಿಂದ ಪತ್ರ; ನಾಳೆ ಸಿಎಂ ಬೊಮ್ಮಾಯಿ ಸಭೆ

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಬುಧವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮತ್ತು ಆ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸೇರಿದಂತೆ ಕೆಲವರು ಪತ್ರ ಬರೆದಿದ್ದಾರೆ. ಅವರ ಪತ್ರದ ಸಾರಾಂಶವನ್ನು ಅವಲೋಕಿಸಿದ್ದೇನೆ. ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿ ಏನೆಲ್ಲ ಮಾಡಲು ಸಾಧ್ಯವೋ ಆ ಸಂಬಂಧ ತೀರ್ಮಾನ ತೆಗೆದುಕೊಳ್ಳುತ್ತೇವೆ ಮತ್ತು ಗೌರವಪೂರ್ವಕವಾಗಿ ಉತ್ತರ ಕೊಡತ್ತೇವೆ ಎಂದು ತಿಳಿಸಿದರು.
ಕೋವಿಡ್ ಸಂದರ್ಭದಲ್ಲಿ ರಾಜ್ಯಕ್ಕೆ ಏನೂ ಮಾಡದೇ ಈಗ ಯೋಗ ಮಾಡಲು ಬಂದಿದ್ದಾರೆ ಎಂಬ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಮೋದಿಯವರು ಇಡೀ ದೇಶದಲ್ಲಿ ಕೋವಿಡ್ ಯಾವ ರೀತಿ ನಿರ್ವಹಿಸಿದ್ದಾರೆ ಎಂಬುದು ಜಗತ್ತಿಗೇ ಗೊತ್ತಿಗೆ. ಭಾರತದ ಕೋವಿಡ್ ನಿರ್ವಹಣೆಗೆ ಜಗತ್ತೇ ಕೊಂಡಾಡಿದೆ. ಕರ್ನಾಟಕಕ್ಕೆ ಸಾವಿರಾರು ಕೋಟಿ ಹಣ ನೀಡಿದ್ದೂ ಅಲ್ಲದೇ, ಔಷಧ, ಲಸಿಕೆ, ಉಪಕರಣಗಳು, ಆಮ್ಲಜನಕವನ್ನು ಪೂರೈಸಿದ್ದಾರೆ. ಮೋದಿಯವರ ಜನಪ್ರಿಯತೆ ಸಹಿಸದೇ ಅವರು ಏನೇನೋ ಮಾತನಾಡುತ್ತಾರೆ ಎಂದರು.
ಇದನ್ನೂ ಓದಿ: ನಾಡಧ್ವಜವನ್ನು ಒಳ ಉಡುಪಿಗೆ ಹೋಲಿಸಿದ್ದ ವ್ಯಕ್ತಿಯಿಂದ ಪಠ್ಯ ಪರಿಷ್ಕರಣೆ: ಎಚ್ಡಿಡಿ
ಪ್ರಧಾನಿಯವರು ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅಭಿವೃದ್ಧಿಪರ ಆಡಳಿತವನ್ನು ಮೆಚ್ಚಿಕೊಂಡಿದ್ದಾರೆ. ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ಯೋಜನೆಗಳನ್ನು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಅವರ ಮೆಚ್ಚುಗೆ ನನಗೆ ಹೆಚ್ಚಿನ ಶಕ್ತಿ ತುಂಬಿದೆ. ಇನ್ನಷ್ಟು ದಕ್ಷತೆ, ಪ್ರಾಮಾಣಿಕತೆಯಿಂದ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಬೊಮ್ಮಾಯಿ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.