ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸೌಧದ ಆವರಣದಲ್ಲಿ ಕೆಂಪೇಗೌಡರ ಪ್ರತಿಮೆ

ನಾಡಪ್ರಭು ಕೆಂಪೇಗೌಡ ಜಯಂತಿ: ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ
Last Updated 27 ಜೂನ್ 2022, 15:44 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೋಮವಾರ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 513ನೇ ಜಯಂತ್ಯುತ್ಸವ ಸಮಾರಂಭದಲ್ಲಿ ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರ ಮಠದ ನಂಜಾವಧೂತ ಸ್ವಾಮೀಜಿ ಈ ಬೇಡಿಕೆ ಮಂಡಿಸಿದರು. ತಮ್ಮ ಭಾಷಣದಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಮುಂದಿನ ವರ್ಷ ನಡೆಯುವ ಕೆಂಪೇಗೌಡರ ಜಯಂತಿಯ ಮೊದಲು ವಿಧಾನಸೌಧದ ಆವರಣದಲ್ಲಿ ಪ್ರತಿಮೆ ಸ್ಥಾಪಿಸಿ, ಅನಾವರಣ ಮಾಡಲಾಗುವುದು’ ಎಂದರು.

ಬೆಂಗಳೂರನ್ನು ಕಟ್ಟಿದ ಕೆಂಪೇಗೌಡರ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಸ್ಥಾಪಿಸಬೇಕು ಎಂಬ ನಿರ್ಣಯವನ್ನು ಬಿಬಿಎಂಪಿ ಕೌನ್ಸಿಲ್‌ 2012ರಲ್ಲೇ ಕೈಗೊಂಡಿತ್ತು. ಇದಕ್ಕಾಗಿ ₹ 12 ಲಕ್ಷ ಅನುದಾನವನ್ನೂ ಕಾಯ್ದಿರಿಸಿತ್ತು. ಆದರೆ, ನಂತರ ಈ ನಿರ್ಣಯ ಅನುಷ್ಠಾನಕ್ಕೆ ಬರಲಿಲ್ಲ. ಈಗ ತಮ್ಮ ಸರ್ಕಾರ ಕೆಂಪೇಗೌಡರಿಗೆ ಗೌರವ ಸಲ್ಲಿಸುವ ಕೆಲಸ ಮಾಡಲಿದೆ ಎಂದು ಹೇಳಿದರು.

ಕೆಂಪೇಗೌಡರ ಆಶಯಕ್ಕೆ ತಕ್ಕಂತೆ ನಾಲ್ಕು ದಿಕ್ಕುಗಳಲ್ಲೂ ಬೆಂಗಳೂರು ನಗರವನ್ನು ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಿ, ಅನುಷ್ಠಾನಕ್ಕೆ ತರಲಾಗುವುದು ಎಂದರು.

ಆದಿ ಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ‘ಕೆಂಪೇಗೌಡ ಒಬ್ಬ ಅಪ್ಪಟ ಜಾತ್ಯತೀತ ಆಡಳಿತಗಾರನಾಗಿದ್ದರು. ಅವರು ಎಲ್ಲ ಸಮುದಾಯಗಳಿಗೂ ವ್ಯಾಪಾರ, ವಹಿವಾಟಿಗೆ ಅವಕಾಶ ಕಲ್ಪಿಸಿರುವುದೇ ಇದಕ್ಕೆ ಸಾಕ್ಷಿ. ಬೆಂಗಳೂರಿನ ಅಭಿವೃದ್ಧಿಯ ಹೆಸರಿನಲ್ಲಿ ಮತ್ತಷ್ಟು ಮಂದಿ ಭೂಮಾಲೀಕರು ಕೊಳೆಗೇರಿ ನಿವಾಸಿಗಳಾಗದಂತೆ ಸರ್ಕಾರ ಎಚ್ಚರ ವಹಿಸಬೇಕು’ ಎಂದು ಸಲಹೆ ನೀಡಿದರು.

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, ಸಚಿವರಾದ ಆರ್‌. ಅಶೋಕ, ಡಾ.ಸಿ.ಎನ್‌. ಅಶ್ವತ್ಥ ನಾರಾಯಣ, ವಿ. ಸುನಿಲ್‌ ಕುಮಾರ್‌, ಕೆ. ಗೋಪಾಲಯ್ಯ, ಮುನಿರತ್ನ, ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಕೃಷ್ಣಪ್ಪ, ಸಂಸದ ತೇಜಸ್ವಿ ಸೂರ್ಯ, ರಾಜ್ಯಸಭಾ ಸದಸ್ಯ ಜಗ್ಗೇಶ್‌, ಶಾಸಕ ರಿಜ್ವಾನ್‌ ಅರ್ಷದ್‌, ವಿಧಾನ ಪರಿಷತ್‌ ವಿರೋಧ ಪಕ್ಷದ ಉಪ ನಾಯಕ ಕೆ. ಗೋವಿಂದರಾಜು ಉಪಸ್ಥಿತರಿದ್ದರು.

ಕೆಂಪೇಗೌಡ ಅಂತರರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ, ಇನ್ಫೋಸಿಸ್‌ ಸಂಸ್ಥಾಪಕ ಎನ್‌.ಆರ್‌. ನಾರಾಯಣಮೂರ್ತಿ ಮತ್ತು ಬ್ಯಾಡ್ಮಿಂಟನ್‌ ಆಟಗಾರ ಪ್ರಕಾಶ್‌ ಪಡುಕೋಣೆ ಅವರಿಗೆ ‘ಕೆಂಪೇಗೌಡ ಅಂತರರಾಷ್ಟ್ರೀಯ ಪ್ರಶಸ್ತಿ’ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಸ್ವೀಕರಿಸಿದ ಕೃಷ್ಣ ಅವರು ₹ 5 ಲಕ್ಷ ಮೊತ್ತದ ಚೆಕ್‌ ಅನ್ನು ತಾವು ಓದಿದ ಮೈಸೂರಿನ ರಾಮಕೃಷ್ಣಾಶ್ರಮಕ್ಕೆ ನೀಡುವುದಾಗಿ ಪ್ರಕಟಿಸಿದರು. ನಾರಾಯಣಮೂರ್ತಿ ಅವರ ಪರವಾಗಿ ಪತ್ನಿ ಸುಧಾ ಮೂರ್ತಿ ಹಾಗೂ ಪ್ರಕಾಶ್‌ ಪಡುಕೋಣೆ ಪರವಾಗಿ ಅವರ ಗೆಳೆಯ ವಿಮಲ್‌ ಕುಮಾರ್‌ ಪ್ರಶಸ್ತಿ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT