ಗುರುವಾರ , ಮಾರ್ಚ್ 30, 2023
24 °C
ಹುದ್ದೆಗೆ ₹30 ಲಕ್ಷದಿಂದ ₹50 ಲಕ್ಷ ಲಂಚದ ಆರೋಪ

ಕೆಎಂಎಫ್‌: 487 ಹುದ್ದೆ ನೇಮಕಾತಿಗೆ ಹೈಕೋರ್ಟ್‌ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕರ್ನಾಟಕ ಹಾಲು ಮಹಾಮಂಡಲದ (ಕೆಎಂಎಫ್) 487 ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ‘ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನೇಮಕಾತಿಗೆ ತಡೆ ನೀಡಿರುವ ಹೈಕೋರ್ಟ್‌, ಮುಂದಿನ ವಿಚಾರಣೆವರೆಗೆ ನೇಮಕಾತಿ ಪಟ್ಟಿ ಪ್ರಕಟಿಸದಂತೆ ಆದೇಶಿಸಿದೆ.

ಈ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲೆಯ ಐತಪ್ಪನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಸೇರಿದಂತೆ ಒಟ್ಟು ಐದು ಸಂಘಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ಹಿರಿಯ ವಕೀಲ ಡಿ.ಆರ್‌.ರವಿಶಂಕರ್‌ ಅವರ ವಾದ ಆಲಿಸಿದ ಬಳಿಕ ನ್ಯಾಯಪೀಠ ಮಧ್ಯಂತರ ಆದೇಶ ನೀಡಿತು. ಪ್ರತಿವಾದಿಗಳಾದ ರಾಜ್ಯ ಸಹಕಾರ ಇಲಾಖೆ, ಕೆಎಂಎಫ್, ಇನ್‌ಸ್ಟಿಟ್ಯೂಟ್ ಆಫ್ ರೂರಲ್ ಮ್ಯಾನೇಜ್‌ಮೆಂಟ್ ಮತ್ತು ಸಿಐಡಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದೆ.

‘ನೇಮಕದಲ್ಲಿ ಭಾರಿ ಭ್ರಷ್ಟಾಚಾರ ನಡೆದಿದ್ದು ಅಭ್ಯರ್ಥಿಗಳ ಅಂಕಗಳನ್ನು ತಿದ್ದಲು ಪ್ರತಿ ಹುದ್ದೆಗೆ ₹ 30 ಲಕ್ಷದಿಂದ ₹ 50 ಲಕ್ಷದವರೆಗೆ ಲಂಚ ಪಡೆಯಲಾಗಿದೆ’ ಎಂಬುದು ಅರ್ಜಿದಾರರ ಆರೋಪ.

487 ಹುದ್ದೆಗಳ ನೇಮಕಕ್ಕೆ ಕೆಎಂಎಫ್ 2022ರ ಅಕ್ಟೋಬರ್ 20ರಂದು ಅಧಿಸೂಚನೆ ಹೊರಡಿಸಿತ್ತು. ನೇಮಕಾತಿ ಪ್ರಕ್ರಿಯೆ ನಡೆಸಲು ಗುಜರಾತ್‌ನ ಆನಂದ ಜಿಲ್ಲೆಯ ಇನ್‌ಸ್ಟಿಟ್ಯೂಟ್ ಆಫ್ ರೂರಲ್ ಮ್ಯಾನೇಜ್ ಮೆಂಟ್ ಏಜೆನ್ಸಿಯನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಪರೀಕ್ಷೆಯ ನಂತರ, 2023ರ ಫೆಬ್ರುವರಿ 2ರಿಂದ 28ವರೆಗೆ ಸಂದರ್ಶನ ನಡೆಸಿ ಅಂತಿಮ ಪಟ್ಟಿ ಸಿದ್ಧಪಡಿಸಲಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು