ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಡಿಹಳ್ಳಿ ಚಂದ್ರಶೇಖರ್ ಹಸಿರು ಟವೆಲ್ ಧರಿಸಬಾರದು: ರೈತ ಸಂಘ , ಹಸಿರು ಸೇನೆ ಆಗ್ರಹ

Last Updated 22 ಜೂನ್ 2022, 20:08 IST
ಅಕ್ಷರ ಗಾತ್ರ

ಬೆಂಗಳೂರು: ‘ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಗೂ ಮತ್ತು ಕೋಡಿಹಳ್ಳಿ ಚಂದ್ರಶೇಖರಗೂ ಯಾವುದೇ ಸಂಬಂಧವಿಲ್ಲ. ಭ್ರಷ್ಟಾಚಾರ ಆರೋಪ ಮುಕ್ತವಾಗುವರೆಗೂ ಅವರು ಹಸಿರು ಟವೆಲ್ ಧರಿಸಬಾರದು’ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ ಆಗ್ರಹಿಸಿದರು.

‘ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ನೌಕರರ ಹೋರಾಟದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪದಲ್ಲಿ ಕೋಡಿಹಳ್ಳಿ ಚಂದ್ರಶೇಖರ ಭಾಗಿಯಾಗಿದ್ದಾರೆ ಎಂಬ ಆರೋಪವಿದೆ. ಈ ಕುರಿತು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಶಿವಮೊಗ್ಗದಲ್ಲಿ ತುರ್ತು ಸಭೆ ನಡೆಸಿತ್ತು. ರೈತ ಮುಖಂಡರ ಒಮ್ಮತದಿಂದ ಕೋಡಿಹಳ್ಳಿ ಅವರನ್ನು ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಲಾಗಿದೆ’ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಕೋಡಿಹಳ್ಳಿ ಮೊಂಡುತನ ಪ್ರದರ್ಶಿಸಿ ತಾನೇ ಸರ್ವಾಧ್ಯಕ್ಷ ಎಂದು ಹೇಳುತ್ತಿರುವುದು ರೈತ ಸಂಘದ ಮೂಲ ಆಶಯಗಳಿಗೆ ಅಪಮಾನ ಮಾಡಿದಂತಾಗಿದೆ. ಶಿವಮೊಗ್ಗದಲ್ಲಿ ನಡೆದ ಸಭೆಗೂ ನನಗೂ ಯಾವುದೇ ರೀತಿ ಸಂಬಂಧವಿಲ್ಲ, ಈಗಲೂ ನಾನೇ ರಾಜ್ಯ ಘಟಕದ ಅಧ್ಯಕ್ಷನೆಂದು ಅವರು ಹೇಳುತ್ತಿರುವುದು ಗೊಂದಲದ ಹೇಳಿಕೆಗಳನ್ನು ನೀಡುತ್ತಿರುವುದು ಖಂಡನೀಯ’ ಎಂದರು.

‘ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದಿದೆ. ಆದರೆ ರಾಜ್ಯ ಸರ್ಕಾರ ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿ ಕಾಯ್ದೆಗಳನ್ನು ಹಿಂಪಡೆದಿಲ್ಲ. ಎಲ್ಲಾ ರೈತ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉಗ್ರ ಹೋರಾಟ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.

‘ಕೇಂದ್ರ ಸರ್ಕಾರ ಖಾಸಗೀಕರಣದ ಹೆಸರಿನಲ್ಲಿ ರೈತರಿಗೆ ಮಾರಕವಾಗಿರುವ ವಿದ್ಯುತ್ ಕಾಯ್ದೆ ಜಾರಿಗೆ ತರಲು ಮುಂದಾಗಿದ್ದು, ಇದನ್ನು ಕೂಡಲೇ ಕೈಬಿಡಬೇಕು’ ಎಂದೂ ಅವರು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT