ಬುಧವಾರ, ಜೂನ್ 29, 2022
26 °C

ತಳವಾರ ಸಮಾಜಕ್ಕೆ ಎಸ್‌ಟಿ ಪ್ರಮಾಣಪತ್ರ: ಶೀಘ್ರವೇ ಕ್ರಮ- ಕೋಟ ಶ್ರೀನಿವಾಸ ಪೂಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಥಣಿ: ‘ತಳವಾರ ಸಮಾಜಕ್ಕೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣಪತ್ರ ನೀಡುವ ವಿಷಯದಲ್ಲಿ ಶೀಘ್ರವೇ ಕ್ರಮ ವಹಿಸಲಾಗುವುದು’ ಎಂದು ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಇಲ್ಲಿ ಮಾಧ್ಯಮದವರೊಂದಿಗೆ ಶುಕ್ರವಾರ ಮಾತನಾಡಿ, ‘ತಾಂತ್ರಿಕ ಅಡಚಣೆಗಳಿಂದಾಗಿ ಇಲ್ಲಿಯವರೆಗೆ ಆ ಪ್ರಮಾಣಪತ್ರ ನೀಡಲು ಸಾಧ್ಯವಾಗಿಲ್ಲ. ಈಗಾಗಲೇ ಹಿಂದುಳಿದ ವರ್ಗಗಳ ಆಯೋಗವು ಸಮಾಜ ಕಲ್ಯಾಣ ಇಲಾಖೆಗೆ ಪ್ರಸ್ತಾವ ಸಲ್ಲಿಸಿದೆ. ಶೀಘ್ರದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದು ಪ್ರಮಾಣಪತ್ರ ನೀಡುವ ಮೂಲಕ ತಳವಾರ ಸಮಾಜದವರಿಗೆ ನ್ಯಾಯ ಒದಗಿಸುತ್ತೇವೆ’ ಎಂದು ಭರವಸೆ ನೀಡಿದರು.

‘ತಳವಾರ ಸಮಾಜವನ್ನು ಎಸ್‌ಟಿಗೆ ಸೇರ್ಪಡೆ ಮಾಡುವಂತೆ ಕೇಂದ್ರ ಸರ್ಕಾರದ ನಿರ್ದೇಶನವೂ ಇದೆ. ಆದರೆ, ಆಡಳಿತಾತ್ಮಕ ಸಮಸ್ಯೆಗಳಿಂದ ಸ್ವಲ್ಪ ಹಿನ್ನಡೆಯಾಗಿದೆ. ಸ್ವಲ್ಪ ಕಾಲಾವಕಾಶ ಬೇಕು’ ಎಂದು ತಿಳಿಸಿದರು.

ಲಿಂಗಾಯತ ಪಂಚಮಸಾಲಿ ಸಮಾಜದವರು ಹಿಂದುಳಿದ ವರ್ಗ 2ಎ ಮೀಸಲಾತಿಗೆ ಬೇಡಿಕೆ ಇಟ್ಟಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ಬೇರೆ ಬೇರೆ ಸಮುದಾಯದವರು ಬೇಡಿಕೆಗಳನ್ನು ಇಟ್ಟಿದ್ದಾರೆ. ಹಂತ ಹಂತವಾಗಿ ಎಲ್ಲರ ಮನವಿಗೂ ಸ್ಪಂದಿಸುವ ಕೆಲಸವಾಗುತ್ತದೆ’ ಎಂದರು.

‘ಪಠ್ಯಪುಸ್ತಕಗಳಲ್ಲಿ ಯಾವುದೇ ಗೊಂದಲಗಳಿಲ್ಲ. ಅದನ್ನು ಓದಿದ ನಂತರ ಎಲ್ಲವೂ ಅರ್ಥವಾಗುತ್ತದೆ. ರಾಷ್ಟ್ರದ ಎಲ್ಲರ ಭಾವನೆಗಳನ್ನೂ ಗೌರವಿಸಬೇಕೆಂಬ ಆಶಯ ನಮ್ಮದಾಗಿದೆ. ಹೀಗಾಗಿ ಎಲ್ಲರೂ ರಾಷ್ಟ್ರೀಯತೆಗೆ ಒತ್ತು ಕೊಡಬೇಕಾಗುತ್ತದೆ’ ಎಂದು ಪ್ರತಿಕ್ರಿಯಿಸಿದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು