ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸೆಂಬರ್‌ನಲ್ಲಿ ‘ವಿನಯ ಸಾಮರಸ್ಯ’ ಯೋಜನೆಗೆ ಚಾಲನೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

Last Updated 24 ನವೆಂಬರ್ 2022, 8:28 IST
ಅಕ್ಷರ ಗಾತ್ರ

ಬೆಂಗಳೂರು: ‘ಅಸ್ಪೃಶ್ಯತೆ ನಿವಾರಣೆಗಾಗಿ ರೂಪಿಸಲಾಗಿರುವ ‘ವಿನಯ ಸಾಮರಸ್ಯ’ ವಿನೂತನ ಯೋಜನೆಯ ಬೃಹತ್ ಸಮಾವೇಶವನ್ನು ಡಿಸೆಂಬರ್ ತಿಂಗಳ ಎರಡನೇ ವಾರದಲ್ಲಿ ಬೆಂಗಳೂರು ಅಥವಾ ಕೊಪ್ಪಳದಲ್ಲಿ ಹಮ್ಮಿಕೊಳ್ಳುವ ಬಗ್ಗೆ ಶೀಘ್ರದಲ್ಲಿ ಸ್ಥಳ ಹಾಗೂ ದಿನ ಅಂತಿಮಗೊಳಿಸಲಾಗುವುದು’ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಅನಾರೋಗ್ಯದಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವರು, ಈ ಯೋಜನೆಗೆ ಚಾಲನಾ ಸಮಾವೇಶ ಸಂಬಂಧ ಇಲಾಖೆ ಅಧಿಕಾರಿಗಳ ಜೊತೆ ಗುರುವಾರ ವಿಡಿಯೊ ಸಂವಾದ ಮೂಲಕ ಸಭೆ ನಡೆಸಿದರು. ಯೋಜನೆಗೆ ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ ಎಂದು ಅವರು ತಿಳಿಸಿದರು.

‘ಅಸ್ಪೃಶ್ಯತೆಯಂಥ ಅನಿಷ್ಠ ಪದ್ಧತಿಯನ್ನು ಅನುಭವಿಸುವವರಿಗಿಂತ ಅನುಸರಿಸುವವರಿಗೆ ಜಾಗೃತಿ ಮೂಡಿಸಬೇಕಿದೆ. ಈ ಹಿನ್ನೆಲೆಯಲ್ಲಿ ಪರಿಶಿಷ್ಟೇತರ ಸಮುದಾಯಗಳ ಧುರೀಣರು, ಮಠಾಧಿಪತಿಗಳು, ಧಾರ್ಮಿಕ ಮುಖಂಡರನ್ನು ಸಮಾವೇಶಕ್ಕೆ ಆಹ್ವಾನಿಸಬೇಕು. ಈ ಮೂಲಕ, ಸಮಾಜದಲ್ಲಿನ ಅಸ್ಪೃಶ್ಯತೆ ನಿವಾರಣೆಯ ಜಾಗೃತಿ ಸಮಾವೇಶ ಅರ್ಥಪೂರ್ಣವಾಗಿ ಯಶಸ್ವಿಯಾಗಬೇಕು ಇದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಪ್ರತಿ ಗ್ರಾಮ ಪಂಚಾಯಿತಿ ಹಂತದಲ್ಲೂ ಈ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತರಬೇಕಿದ್ದು ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮ ಅನುಷ್ಠಾನಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು‘ ಎಂದು ಅಧಿಕಾರಿಗಳಿಗೆ ಅವರು ಸೂಚಿಸಿದರು

ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಪಿ.ಮಣಿವಣ್ಣನ್, ಇಲಾಖೆ ಸಲಹೆಗಾರ ಇ. ವೆಂಕಟಯ್ಯ, ಆಯುಕ್ತ ಡಾ.ಕೆ. ರಾಕೇಶಕುಮಾರ್ ಇದ್ದರು.

2021 ಸೆಪ್ಟೆಂಬರ್‌ನಲ್ಲಿ ಕೊಪ್ಪಳ ಜಿಲ್ಲೆ ಮಿಯಾಪುರದಲ್ಲಿ ವಿನಯ್ ಎಂಬ ದಲಿತ ಸಮುದಾಯದ ನಾಲ್ಕು ವರ್ಷದ ಬಾಲಕ ಮಾರುತಿ ದೇವಸ್ಥಾನ ಪ್ರವೇಶಿಸಿದ್ದರಿಂದ ಗ್ರಾಮದ ಸವರ್ಣಿಯರು ಬಾಲಕನ ಪೋಷಕರಿಗೆ ₹ 25 ಸಾವಿರ ದಂಡ ವಿಧಿಸಿ ಬಹಿಷ್ಕರಿಸಿದ ಘಟನೆ ನಡೆದಿತ್ತು. ಸುದ್ದಿ ತಿಳಿದ ಜಿಲ್ಲಾಡಳಿತ ಹಾಗೂ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಿದ್ದರು. ಈನಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ವಿನಯ್ ಹೆಸರಿನಲ್ಲಿ ಅಸ್ಪೃಶ್ಯತೆ ನಿವಾರಣೆಯ ‘ವಿನಯ ಸಾಮರಸ್ಯ’ ಯೋಜನೆಯನ್ನು ಸರ್ಕಾರ ಘೋಷಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT