ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಕೆದಾಟು ಪಾದಯಾತ್ರೆಗೆ 4,817 ಜನ ನೋಂದಣಿ: ಡಿಕೆಶಿ

Last Updated 4 ಜನವರಿ 2022, 19:03 IST
ಅಕ್ಷರ ಗಾತ್ರ

ಬೆಂಗಳೂರು: ‘ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಆಗ್ರಹಿಸಿ ಪಕ್ಷ ಜ. 9ರಿಂದ ಹಮ್ಮಿಕೊಂಡಿರುವ ಪಾದಯಾತ್ರೆಗೆ ಈಗಾಗಲೇ 4,817 ಜನ ಆನ್‌ಲೈನ್‌ನಲ್ಲಿ ಹೆಸರು ನೋಂದಾಯಿಸಿದ್ದಾರೆ. ಯಾತ್ರೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

ಪಾದಯಾತ್ರೆಗೆ ತಯಾರಿ ಸಂಬಂಧಿಸಿದಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಹಿರಿಯ ನಾಯಕರ ಜೊತೆ ಮಂಗಳವಾರ ಸಮಾಲೋಚನೆ ನಡೆಸಿದ ಬಳಿಕ ಅವರು ಮಾತನಾಡಿದರು.

‘ಪಾದಯಾತ್ರೆಯ ಜೊತೆಗೆ 10 ಆಂಬುಲೆನ್ಸ್‌ಗಳು, 100 ವೈದ್ಯರು ಇರಲಿದ್ದಾರೆ. ಒಟ್ಟು 10 ದಿನಗಳ ಯಾತ್ರೆಯಲ್ಲಿ ರಾಜ್ಯದ ಎಲ್ಲ ಭಾಗಗಳಿಂದ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಮೈಸೂರು, ಹಾಸನ, ಮಂಡ್ಯ, ತುಮಕೂರು ಹೀಗೆ ಒಂದೊಂದು ಜಿಲ್ಲೆಯವರು ಒಂದೊಂದು ದಿನ ಭಾಗವಹಿಸಲಿದ್ದಾರೆ’ ಎಂದರು.

‘ನೀರಿಗಾಗಿ ನಾವು ಪಾದಯಾತ್ರೆ ಮಾಡುತ್ತೇವೆ. ನೀರು ಪಡೆಯುವುದು ನಮ್ಮ ಹಕ್ಕು. ಹೀಗಾಗಿ, ಯಾರು, ಯಾವುದೇ ರೀತಿಯ ಅಡಚಣೆ ಮಾಡಿದರೂ ಪಾದಯಾತ್ರೆ ನಡೆದೇ ನಡೆಯುತ್ತದೆ’ ಎಂದೂ ಹೇಳಿದರು.

ಮಲತಾಯಿ ಧೋರಣೆ: ‘ಮೇಕೆದಾಟು, ಮಹದಾಯಿ ಸೇರಿದಂತೆ ಎಲ್ಲ ನೀರಾವರಿ ಯೋಜನೆಗಳಲ್ಲಿ ರಾಜ್ಯದ ಬಗ್ಗೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತಾಳಿದೆ. ಈ ಅನ್ಯಾಯದ ವಿರುದ್ಧ ‌ಪಾದಯಾತ್ರೆಯ ಮೂಲಕ ಪ್ರತಿಭಟನೆ ನಡೆಸುತ್ತೇವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದರು.

ಸಭೆಯಲ್ಲಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಆರ್. ಧ್ರುವನಾರಾಯಣ್‌,ಸಲೀಂ ಅಹಮದ್ ಹಾಗೂ ಎಂ.ಬಿ. ಪಾಟೀಲ, ಕೆ.ಜೆ. ಜಾರ್ಜ್, ಆರ್.ವಿ. ದೇಶಪಾಂಡೆ, ಬಿ.ಕೆ. ಹರಿಪ್ರಸಾದ್, ಅಲ್ಲಂ ವೀರಭದ್ರಪ್ಪ ಮತ್ತಿತರರು ಇದ್ದರು.

***

ಬಿಜೆಪಿಯವರು ಜನಾಶೀರ್ವಾದ ಯಾತ್ರೆ ನಡೆಸಿದಾಗ ಆರೋಗ್ಯ ಸಚಿವ ಕೆ. ಸುಧಾಕರ್ ಎಲ್ಲಿದ್ದರು? ಪ್ರಧಾನಿ ಮೋದಿ ಸಭೆಗಳನ್ನು ನಡೆಸುತ್ತಲೇ ಇದ್ದಾರೆ. ಅವರಿಗೊಂದು ಕಾನೂನು, ನಮಗೊಂದು ಕಾನೂನಾ?

– ಸಿದ್ದರಾಮಯ್ಯ, ವಿಧಾನಸಭೆಯ ವಿರೋಧ ಪಕ್ಷದ ನಾಯಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT