ಸೋಮವಾರ, ಆಗಸ್ಟ್ 8, 2022
21 °C

ಕೆಪಿಎಸ್‌ಸಿ ನೇಮಕಾತಿ ಅಕ್ರಮ: ಸಂಪುಟ ಉಪ ಸಮಿತಿ ರಚಿಸಲು ಸರ್ಕಾರ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 2011ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ಆಯ್ಕೆ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳಲ್ಲಿ ಭಾಗಿಯಾಗಿರುವ ಕೆಪಿಎಸ್‌ಸಿಯ ಅಂದಿನ ಅಧ್ಯಕ್ಷರು ಮತ್ತು 9 ಸದಸ್ಯರನ್ನು ಪ್ರಾಸಿಕ್ಯೂಷನ್‌ಗೆ ಒಳಪಡಿಸುವಂತೆ ರಾಷ್ಟ್ರಪತಿಗೆ ಶಿಫಾರಸು ಮಾಡಬೇಕೇ, ಬೇಡವೇ ಎಂಬ ಬಗ್ಗೆ ಸಂಪುಟ ಉಪ ಸಮಿತಿ ನೀಡುವ ಶಿಫಾರಸಿನ ಮೇಲೆ ತೀರ್ಮಾನಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಸಭೆಯ ಬಳಿಕ ಈ ಕುರಿತು ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ‘ಈ ಪ್ರಕರಣದ ಕುರಿತು ಕೆಎಟಿ, ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್ ನೀಡಿದ ತೀರ್ಪುಗಳನ್ನು ಪರಾಮರ್ಶಿಸಿ, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕೇ, ಬೇಡವೇ ಎಂಬ ಬಗ್ಗೆ ಶಿಫಾರಸು ಮಾಡಲು ಮುಖ್ಯಮಂತ್ರಿಯವರ ಸೂಚನೆಯಂತೆ ಸಂಪುಟ ಉಪ ಸಮಿತಿ ರಚಿಸಲಾಗಿದೆ’ ಎಂದರು.

‘ಸಮಿತಿಯಲ್ಲಿ ನಾನು, ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಇರುತ್ತೇವೆ’ ಎಂದೂ ಹೇಳಿದರು.

‘ಪ್ರಾಸಿಕ್ಯೂಷನ್‌ಗೆ ರಾಷ್ಟ್ರಪತಿ ಅನುಮತಿ ನೀಡಬೇಕು. ಹಿಂದಿನ ಸರ್ಕಾರ ಆಕಸ್ಮಿಕವಾಗಿ ರಾಜ್ಯಪಾಲರಿಂದ ಅನುಮತಿ ಕೇಳಿತ್ತು. ಕಾನೂನು ಪ್ರಕಾರ ಅದು ಸರಿಯಲ್ಲ. ಹೀಗಾಗಿ, ಅವರ ಪ್ರಾಸಿಕ್ಯೂಷನ್‌ ಆಗಿಲ್ಲ. ಈ ಮಧ್ಯೆ ವಿಧಾನಮಂಡಲ ಅಧಿವೇಶನದಲ್ಲಿ ಎಲ್ಲ ಪಕ್ಷಗಳ ಸದಸ್ಯರು, ಈ ಪ್ರಕರಣದಲ್ಲಿ ಗುರುತರವಾದ ಯಾವುದೂ ಇಲ್ಲ. ಆಯ್ಕೆಯಾದ ಅಭ್ಯರ್ಥಿಗಳಿಗೆ ತೊಂದರೆ ಮಾಡಬೇಡಿ ಎಂದು ಬೇಡಿಕೆ ಇಟ್ಟಿದ್ದರು’ ಎಂದರು.

‘ಅಂದಿನ ಎ.ಜಿ ದೂರಿನಂತೆ ಸಿಐಡಿಯವರೇ ಈ ಪ್ರಕರಣವನ್ನು ದಾಖಲು ಮಾಡಿದ್ದರು. ಆದರೆ, ಕೆಪಿಎಸ್‌ಸಿ ಅಧ್ಯಕ್ಷರು, ಸದಸ್ಯರ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಸರ್ಕಾರಕ್ಕೆ ಅವಕಾಶ ಇಲ್ಲ. ರಾಷ್ಟ್ರಪತಿ ಸಹಮತಿ ನೀಡಬೇಕು. ಈಗಾಗಲೇ ವಿಳಂಬವಾಗಿದೆ. ಅಲ್ಲದೆ, ಈ ಪ್ರಕರಣದಲ್ಲಿ ಕಾನೂನು ಅಡ್ಡಿಗಳು ಬಹಳಷ್ಟಿವೆ. ಈ ಪ್ರಕರಣದಲ್ಲಿ ಯಾವುದೇ ಮಹತ್ವ ಇಲ್ಲ ಎಂಬ ಕಾರಣಕ್ಕೆ ಸಚಿವ ಸಂಪುಟ ಸಭೆಗೆ ಪ್ರಸ್ತಾವ ತಂದಿದ್ದೇವೆ’ ಎಂದು ಸಮರ್ಥನೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು