ಶುಕ್ರವಾರ, ಡಿಸೆಂಬರ್ 4, 2020
24 °C
ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ವಿಭಾಗೀಯ ಪೀಠ ಪ್ರಶ್ನೆ

'ಕೆಎಸ್‌ಪಿಸಿಬಿ ವಿರುದ್ಧ ವಿಚಾರಣೆ ನಡೆಸುತ್ತೀರಾ': ಹೈಕೋರ್ಟ್‌ ಪ್ರಶ್ನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈಕೋರ್ಟ್‌

ಬೆಂಗಳೂರು: ಕಾನೂನಿನಲ್ಲಿ ಲಭ್ಯವಿರುವ ಅಧಿಕಾರವನ್ನು ಸರಿಯಾಗಿ ಬಳಸಿಕೊಳ್ಳುವಲ್ಲಿ ವಿಫಲವಾಗಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ವಿರುದ್ಧ ವಿಚಾರಣೆಗೆ ಆದೇಶಿಸುವ ಇಚ್ಛಾಶಕ್ತಿಯನ್ನು ರಾಜ್ಯ ಸರ್ಕಾರ ಹೊಂದಿದೆಯೇ ಎಂದು ಹೈಕೋರ್ಟ್‌ ಬುಧವಾರ ಪ್ರಶ್ನಿಸಿದೆ.

ಘನ ತ್ಯಾಜ್ಯ ವಿಲೇವಾರಿ ನಿಯಮಗಳ ಉಲ್ಲಂಘನೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ನೇತೃತ್ವದ ವಿಭಾಗೀಯ ಪೀಠ, ಮಾಲಿನ್ಯ ನಿಯಂತ್ರಣ ಮಂಡಳಿಯ ಕಾರ್ಯವೈಖರಿ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

1986ರ ಪರಿಸರ ಸಂರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ ದಿನದಿಂದಲೇ ಮಾಲಿನ್ಯ ನಿಯಂತ್ರಣ ಮಂಡಳಿಯು ಘನ ತ್ಯಾಜ್ಯ ವಿಲೇವಾರಿಯಲ್ಲಿ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸುವ ಅಧಿಕಾರ ಹೊಂದಿತ್ತು. ಆದರೆ, ನ್ಯಾಯಾಲಯ ಆದೇಶ ನೀಡುವವರೆಗೂ ಒಂದು ಪ್ರಕರಣವನ್ನೂ ದಾಖಲಿಸಿರಲಿಲ್ಲ ಎಂದು ನ್ಯಾಯಪೀಠ ಹೇಳಿತು.

ಸರ್ಕಾರದ ಆದೇಶದ ಪ್ರಕಾರ, ನಿರ್ದಿಷ್ಟ ಅಧಿಕಾರಿಗಳಿಗೆ ಮಾತ್ರ ಪ್ರಕರಣ ದಾಖಲಿಸುವ ಅಧಿಕಾರವಿದೆ. ಆದರೆ, ಕೆಎಸ್‌ಪಿಸಿಬಿ ಈ ನಿಯಮ ಪಾಲಿಸದ ಕಾರಣದಿಂದ ಹೆಚ್ಚಿನ ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆ ಆಗಿದ್ದಾರೆ ಎಂಬುದನ್ನು ನ್ಯಾಯಾಲಯ ವಿಚಾರಣೆ ವೇಳೆ ಪ್ರಸ್ತಾಪಿಸಿತು.

ಮಂಗಳೂರಿನ ಪಚ್ಚನಾಡಿಯಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕದ ಬಳಿ ತ್ಯಾಜ್ಯ ರಾಶಿಯಲ್ಲಿ ಕಳೆದ ವರ್ಷ ಉಂಟಾದ ಕುಸಿತದಿಂದ 24 ಕುಟುಂಬಗಳಿಗೆ ಹಾನಿಯಾಯಿತು. ಆದರೆ, ಮಾಲಿನ್ಯ ನಿಯಂತ್ರಣ ಮಂಡಳಿ ಗಾಢ ನಿದ್ರೆಯಲ್ಲಿತ್ತು. ನ್ಯಾಯಾಲಯ ಮಧ್ಯಪ್ರವೇಶ ಮಾಡಿದ ಬಳಿಕ ಮಂಗಳೂರು ಮಹಾನಗರ ಪಾಲಿಕೆ ವಿರುದ್ಧ ಕ್ರಮಕ್ಕೆ ಮುಂದಾಯಿತು ಎಂದು ನ್ಯಾಯಪೀಠ ಹೇಳಿತು.

‘ಮಾಲಿನ್ಯ ನಿಯಂತ್ರಣ ಮಂಡಳಿಯ ಕಾರ್ಯವೈಖರಿಯು ಚಿಂತಿಸಬೇಕಾದ ವಿಷಯವಾಗಿದೆ. ಮಾಲಿನ್ಯ ತಡೆಯುವ ಕೆಲಸದಲ್ಲಿ ಕಾವಲು ನಾಯಿಯಂತೆ ಕೆಲಸ ಮಾಡಬೇಕಾದ ಮಂಡಳಿಯು ಈಗ ಕಾರ್ಯನಿರ್ವಹಿಸುತ್ತಿರುವ ಶೈಲಿಯ ಕುರಿತು ಹಿರಿಯ ಅಧಿಕಾರಿಗಳಿಂದ ವಿಚಾರಣೆ ನಡೆಸಲು ಸಿದ್ಧವೇ ಎಂಬುದನ್ನು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು’ ಎಂದು ವಿಭಾಗೀಯ ಪೀಠ ನಿರ್ದೇಶನ ನೀಡಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು