ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧ ಬೇಡಿಕೆಗಳ ಈಡೇರಿಕೆಗೆ ಸಾರಿಗೆ ನೌಕರರ ಒತ್ತಾಯ

Last Updated 12 ಡಿಸೆಂಬರ್ 2022, 15:56 IST
ಅಕ್ಷರ ಗಾತ್ರ

ಬೆಂಗಳೂರು: ಸಾರಿಗೆ ಮುಷ್ಕರದ ಸಮಯದಲ್ಲಿ ವಜಾಗೊಂಡಿರುವ ನೌಕರರನ್ನು ಯಾವುದೇ ನಿಂಬಧನೆಗಳನ್ನು ವಿಧಿಸದೇ ಪುನರ್‌ ನೇಮಿಸಿಕೊಳ್ಳಬೇಕು ಎಂದು ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ಆಗ್ರಹಿಸಿದೆ.

ಬೆಳಗಾವಿ ಚಳಿಗಾಲದ ಅಧಿವೇಶನದ ಸಮಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಡಿ. 19ರಿಂದ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸಾರಿಗೆ ನೌಕರರು ಮತ್ತು ಅವರ ಕುಟುಂಬ ಸದಸ್ಯರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನೌಕರರಿಗೆ ಸರ್ಕಾರಿ ನೌಕರರಂತೆ ಸಮಾನ ವೇತನವನ್ನು ನೀಡಬೇಕು. ಸಂಸ್ಥೆಯಲ್ಲಿ ನಾಲ್ಕು ವರ್ಷಕ್ಕೊಮ್ಮೆ ಮಾಡುವ ಚೌಕಾಸಿ ವೇತನ ಪರಿಷ್ಕರಣಾ ಪದ್ಧತಿಯನ್ನು ಕೈಬಿಟ್ಟು, ಇತರೆ ಇಲಾಖೆಗಳ ಮತ್ತು ವೇತನ ಆಯೋಗದ ಮಾದರಿಯನ್ನು ಅಳವಡಿಸಿಕೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಆರ್‌. ಚಂದ್ರಶೇಖರ್‌ ಸೋಮವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

‘ಮುಷ್ಕರದ ಸಮಯದಲ್ಲಿ ನಾಲ್ಕು ನಿಗಮಗಳ ಸಾರಿಗೆ ನೌಕರರು ಮತ್ತು ಅವರ ಕುಟುಂಬಗಳ ಸದಸ್ಯರ ಮೇಲೆ ದಾಖಲಿಸಿರುವ ಪೊಲೀಸ್‌ ಪ್ರಕರಣಗಳನ್ನು ಹಿಂಪಡೆಯಬೇಕು. ನಿಗಮಗಳಲ್ಲಿ ಕೂಡಲೇ ಕಾರ್ಮಿಕ ಸಂಘಗಳ ಚುನಾವಣೆ ನಡೆಸಬೇಕು. ಸಾರಿಗೆ ಸಂಸ್ಥೆಗಳಲ್ಲಿ ವಿದ್ಯುತ್‌ ಚಾಲಿತ ವಾಹನಗಳಿಗೆ ಖಾಸಗಿ ಚಾಲಕರನ್ನು ಮತ್ತು ಅದರ ನಿರ್ವಹಣೆಯ ವ್ಯವಸ್ಥೆಯನ್ನು ಖಾಸಗಿಯವರಿಗೆ ವಹಿಸಿರುವುದು ಖಂಡನೀಯ’ ಎಂದರು.

ವೇದಿಕೆ ಪ್ರಧಾನ ಕಾರ್ಯದರ್ಶಿ ನಾಗರಾಜು ಮಾತನಾಡಿ, ‘ಸಂಸ್ಥೆಯ ಇತರೆ ವಾಹನಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಚಾಲಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ಕೆಲ ಮಾರ್ಗಗಳಲ್ಲಿ ಖಾಸಗಿ ವಾಹನಗಳ ಚಾಲನೆಗೆ ಅನುಮತಿ ನೀಡುವ ಮೂಲಕ ಮುಂದಿನ ದಿನಗಳಲ್ಲಿ ಸಾರಿಗೆ ಸಂಸ್ಥೆಯನ್ನು ಖಾಸಗೀಕರಣ ಮಾಡುವ ಯತ್ನ ನಡೆಯುತ್ತಿದೆ. ಅದನ್ನು ಕೈಬಿಡಬೇಕು’ ಎಂದು ಒತ್ತಾಯಿಸಿದರು.

‘ಸಾರಿಗೆ ಸಚಿವರು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಜನವರಿಯಲ್ಲಿ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರಕ್ಕೆ ಕರೆ ನೀಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT