ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅವಕಾಶ ಕೊಡಿ’:

ಲೇಖಕರು, ಸಾಹಿತಿಗಳು, ಚಿಂತಕರು, ಹೋರಾಟಗಾರರಿಂದ ಮುಖ್ಯಮಂತ್ರಿಯವರಿಗೆ ಪತ್ರ
Last Updated 28 ಮಾರ್ಚ್ 2022, 16:22 IST
ಅಕ್ಷರ ಗಾತ್ರ

ಬೆಂಗಳೂರು: ‘ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರಿಗೆ ಸಮವಸ್ತ್ರದ ಭಾಗವಾಗಿಯೇ ಶಿರವಸ್ತ್ರ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿ’ ಎಂದು ಲೇಖಕರು, ಸಾಹಿತಿಗಳು, ಚಿಂತಕರು ಹಾಗೂ ಹೋರಾಟಗಾರರು ಮನವಿ ಮಾಡಿದ್ದಾರೆ.

ಡಾ.ಕೆ.ಮರುಳಸಿದ್ದಪ್ಪ, ಡಾ.ವಿಜಯಾ, ಪ್ರೊ.ಎಸ್‌.ಜಿ.ಸಿದ್ದರಾಮಯ್ಯ, ಬೊಳುವಾರು ಮಹಮ್ಮದ್‌ ಕುಂಞ, ಡಾ.ಪುರುಷೋತ್ತಮ ಬಿಳಿಮಲೆ, ಡಾ.ರಾಜೇಂದ್ರ ಚೆನ್ನಿ, ಡಾ.ಬಂಜಗೆರೆ ಜಯಪ್ರಕಾಶ್‌, ಬಿ.ಸುರೇಶ್‌, ಕೆ.ನೀಲಾ, ಡಾ.ರಹಮತ್ ತರಿಕೆರೆ, ಡಾ.ವಸುಂಧರಾ ಭೂಪತಿ, ಕೆ.ಎಸ್‌.ವಿಮಲಾ, ಡಾ.ಕೆ.ಷರೀಫಾ, ಡಾ.ಕಾಳೆಗೌಡ ನಾಗವಾರ ಹಾಗೂಮಾವಳ್ಳಿ ಶಂಕರ್ ಸೇರಿದಂತೆ ಒಟ್ಟು 61 ಮಂದಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

‘ಶೈಕ್ಷಣಿಕ ವರ್ಷಾಂತ್ಯದಲ್ಲಿ ಅನಗತ್ಯವಾಗಿ ಎದ್ದ ಶಿರವಸ್ತ್ರ ವಿವಾದದಿಂದ ಮುಸ್ಲಿಂ ಹೆಣ್ಣುಮಕ್ಕಳು ತೊಂದರೆಗೊಳಗಾಗಿದ್ದಾರೆ. ಅವರ ಸಾಂವಿಧಾನಿಕ ಹಕ್ಕನ್ನು ನಿರಾಕರಿಸಬೇಡಿ. ಮಕ್ಕಳ ಭವಿಷ್ಯ ಗಮನದಲ್ಲಿಟ್ಟುಕೊಂಡು ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಈ ಸಂಬಂಧ ಸರ್ಕಾರವೇ ಅಗತ್ಯ ಸೂಚನೆ ನೀಡಬೇಕು’ ಎಂದು ಕೋರಿದ್ದಾರೆ.

‘ಎಸ್ಸೆಸ್ಸೆಲ್ಸಿ ಪರೀಕ್ಷೆಯ ಹಿಂದಿನ ದಿನ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ವಸ್ತ್ರ ಸಂಹಿತೆ ವಿಧಿಸಿ ಏಕಾಏಕಿ ಸುತ್ತೋಲೆ ಹೊರಡಿಸಿದೆ. ಇದು ಅವೈಜ್ಞಾನಿಕವಾಗಿದೆ. ಇದನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

‘ರಾಜ್ಯದ ವಿವಿಧೆಡೆ ನಡೆಯುತ್ತಿರುವ ಜಾತ್ರೆಗಳಲ್ಲಿ ಈ ಮೊದಲಿನಂತೆ ಸಾಮರಸ್ಯ ಪರಂಪರೆಯ ಚಟುವಟಿಕೆಗಳು, ವ್ಯಾಪಾರ ವಹಿವಾಟುಗಳಿಗೆ ಅವಕಾಶ ಮುಂದುವರಿಸಬೇಕು. ಧರ್ಮದ ಹೆಸರಿನಲ್ಲಿ ಸಾಮರಸ್ಯ ಕದಡಲು‍ಪ್ರಯತ್ನಿಸುತ್ತಿರುವವರ ಮೇಲೆ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಬೇಕು. ಭಗವದ್ಗೀತೆಯನ್ನು ಪಠ್ಯಕ್ರಮದಲ್ಲಿ ಅಳವಡಿಸುವ ಪ್ರಸ್ತಾಪವನ್ನು ಕೈಬಿಡಬೇಕು’ ಎಂದು ಒತ್ತಾಯಿಸಿದ್ದಾರೆ.

‘ಕನ್ನಡ ನೆಲದ ಸಾಮರಸ್ಯ ಪರಂಪರೆಗೆ ಯಾವುದೇ ಕುತ್ತು ಬಾರದಂತೆ ಸರ್ಕಾರವು ಕ್ರಮ ಕೈಗೊಳ್ಳಬೇಕು. ಸಂವಿಧಾನದತ್ತ ಹಕ್ಕುಗಳ ಪರವಾದ ನಮ್ಮ ಒತ್ತಾಯಗಳನ್ನು ತಮ್ಮ ಸಾಂವಿಧಾನಿಕ ಕರ್ತವ್ಯದ ಭಾಗವಾಗಿ ಪರಿಗಣಿಸಬೇಕು’ ಎಂದು ವಿನಂತಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT