ಎಸ್‌ಎಸ್‌ಸಿ ಕನ್ನಡ ವಿರೋಧಿ ನೀತಿ ವಿರುದ್ಧ ನ್ಯಾಯಾಂಗ ಹೋರಾಟ: ಮಹೇಶ ಜೋಶಿ

ಬೆಂಗಳೂರು: ‘ಸ್ಟಾಫ್ ಸೆಲೆಕ್ಷನ್ ಕಮಿಷನ್‌ನ (ಎಸ್‌ಎಸ್‌ಸಿ) ಕನ್ನಡ ವಿರೋಧಿ ನೀತಿ ವಿರುದ್ಧ ನ್ಯಾಯಾಂಗ ಹೋರಾಟಕ್ಕೆ ಚಿಂತನೆ ನಡೆಸಲಾಗಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.
‘ಎಸ್‌ಎಸ್‌ಸಿ ನಡೆಸುತ್ತಿರುವ ಪ್ರವೇಶ ಪರೀಕ್ಷೆಯಲ್ಲಿ ಕನ್ನಡಿಗರಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಕಾನ್‌ಸ್ಟೆಬಲ್ ಹುದ್ದೆಗಳಿಗೆ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಪ್ರವೇಶ ಪರೀಕ್ಷೆ ನಡೆಸುತ್ತಿರುವುದನ್ನು ಆರಂಭದಿಂದಲೂ ವಿರೋಧಿಸಲಾಗಿದೆ. ಹಿಂದಿ ಭಾಷೆಗೆ ಬೆಣ್ಣೆ, ಕನ್ನಡಕ್ಕೆ
ಸುಣ್ಣ ಎನ್ನುವ ರೀತಿಯಲ್ಲಿ ಎಸ್‌ಎಸ್‌ಸಿ ನಡೆದುಕೊಳ್ಳುತ್ತಿರುವುದನ್ನು ಸಹಿಸಿಕೊಳ್ಳಲು ಸಾಧ್ಯವೇ ಇಲ್ಲ’ ಎಂದು ಅವರು ಅಸಮಾ ಧಾನ ವ್ಯಕ್ತಪಡಿಸಿದ್ದಾರೆ.
‘ಗಡಿ ಭದ್ರತಾ ಪಡೆ (ಬಿಎಸ್‌ಎಫ್), ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಏಫ್) ಸೇರಿ ಕೇಂದ್ರ ಭದ್ರತಾ ಪಡೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಇತ್ತೀಚಿಗೆ ಅರ್ಜಿ ಆಹ್ವಾನಿಸಿರುವ ಎಸ್‌ಎಸ್‌ಸಿ, ಮತ್ತೆ ಪ್ರಾದೇಶಿಕ ಭಾಷೆಗಳ ವಿರೋಧಿ ನೀತಿಯನ್ನು ಅನುಸರಿಸಿದೆ. ಕಂಪ್ಯೂಟರ್ ಆಧರಿತ ಈ ಪರೀಕ್ಷೆಯಲ್ಲಿ ಕೇವಲ ಇಂಗ್ಲಿಷ್, ಹಿಂದಿ ಭಾಷೆ ಮಾತ್ರ ಇರಲಿದೆ. ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿಯಿಂದ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಎನ್ನುವ ನಿಯಮವಿದೆ. 10ನೇ ತರಗತಿಯವರೆಗೆ ಓದಿದ ಪ್ರಾದೇಶಿಕ ಅಭ್ಯರ್ಥಿಗಳಿಗೆ ಹಿಂದಿ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಎಷ್ಟರ ಮಟ್ಟಿಗೆ ಪ್ರಾಬಲ್ಯ ಇರುವುದಕ್ಕೆ ಸಾಧ್ಯ’ ಎಂದು ಪ್ರಶ್ನಿಸಿದ್ದಾರೆ.
‘ಪರಿಷತ್ತಿನ ಕೆಲ ಸದಸ್ಯರು ಎಸ್‌ಎಸ್‌ಸಿಯ ಕನ್ನಡ ವಿರೋಧಿ ನೀತಿ ಪ್ರಶ್ನಿಸಿ, ನ್ಯಾಯಾಲಯದ ಮೆಟ್ಟಿ ಲೆರಲು ಸೂಚಿಸಿದ್ದಾರೆ. ಆದ್ದರಿಂದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ್ ಅವರೊಂದಿಗೆ ಸಮಾಲೋಚನೆ ನಡೆಸಿ, ನ್ಯಾಯಾಂಗ ಹೋರಾಟ ನಡೆಸುತ್ತೇವೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.