ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂನ್‌ 7ರ ಬಳಿಕವೂ ರಾಜ್ಯದಲ್ಲಿ ಲಾಕ್‌ಡೌನ್‌ ವಿಸ್ತರಣೆ ಸಾಧ್ಯತೆ

ಒಂದು ವಾರ ವಿಸ್ತರಣೆ: ಹಂತ ಹಂತವಾಗಿ ನಿರ್ಬಂಧ ಸಡಿಲಿಕೆ
Last Updated 3 ಜೂನ್ 2021, 0:07 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇರುವುದರಿಂದ ಜೂನ್‌ 7ರ ನಂತರವೂ ಲಾಕ್‌ಡೌನ್‌ ವಿಸ್ತರಣೆ ಮಾಡುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಗುರುವಾರ ಅಥವಾ ಶುಕ್ರವಾರ ಈ ಕುರಿತು ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆ.

ರಾಜ್ಯದಲ್ಲಿ ಹಂತ ಹಂತವಾಗಿ ಲಾಕ್‌ಡೌನ್‌ ಸಡಿಲಿಸುವಂತೆ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿದೆ. ರಾಜ್ಯ ಮಟ್ಟದ ಕೋವಿಡ್‌ ಕಾರ್ಯಪಡೆ ಹಾಗೂ ಸಚಿವರ ಜತೆ ಬುಧವಾರ ಪ್ರತ್ಯೇಕ ಸಭೆಗಳನ್ನು ನಡೆಸಿದ ಮುಖ್ಯಮಂತ್ರಿ, ಲಾಕ್‌ಡೌನ್‌ ವಿಸ್ತರಣೆ ಕುರಿತು ಚರ್ಚೆ ನಡೆಸಿದರು.

ಕೆಲವು ಸಡಿಲಿಕೆಗಳೊಂದಿಗೆ ಒಂದು ವಾರದ ಅವಧಿಗೆ ಲಾಕ್‌ಡೌನ್‌ ವಿಸ್ತರಿಸುವ ತೀರ್ಮಾನಕ್ಕೆ ಬರಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ತಜ್ಞರ ಸಮಿತಿಯ ವರದಿಯ ಆಧಾರದಲ್ಲಿ 15 ದಿನಗಳ ಕಾಲ ನಿರ್ಬಂಧ ಮುಂದುವರಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಜೂನ್‌ 7ರಿಂದ 14ರವರೆಗೂ ನಿರ್ಬಂಧ ವಿಸ್ತರಿಸಿ, ನಂತರದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಆಧರಿಸಿ ಮತ್ತೆ ತೀರ್ಮಾನಕ್ಕೆ ಬರುವ ನಿರ್ಧಾರವನ್ನು ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ಗೊತ್ತಾಗಿದೆ.

ಎರಡೂ ಸಭೆಗಳಿಗೂ ಮೊದಲು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಯಡಿಯೂರಪ್ಪ, ‘ಜೂನ್‌ 7ರವರೆಗೂ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿಯಲ್ಲಿದೆ. ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಕೋವಿಡ್‌ ನಿಯಂತ್ರಣಕ್ಕೆ ಬಂದಿಲ್ಲ. ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಲೇ ಇವೆ. ಇದರಿಂದಾಗಿ ಕೆಲವು ಬಿಗಿ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯ’ ಎಂದು ಲಾಕ್‌ಡೌನ್‌ ವಿಸ್ತರಣೆಯ ಸುಳಿವು ನೀಡಿದ್ದರು.

‘ಮುಂದೆ ಯಾವುದಕ್ಕೆಲ್ಲ ವಿನಾಯಿತಿ ನೀಡಬೇಕು ಎಂಬುದನ್ನು ಸಚಿವರು ಮತ್ತು ಅಧಿಕಾರಿಗಳ ಜತೆ ಚರ್ಚಿಸಿ ತೀರ್ಮಾನಿಸಲಾಗುವುದು. ಒಂದೆರಡು ದಿನಗಳಲ್ಲಿ ಅಂತಿಮ ನಿರ್ಧಾರವನ್ನು ಪ್ರಕಟಿಸಲಾಗುವುದು’ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಕೋವಿಡ್‌ ಕಾರ್ಯಪಡೆಯ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ, ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌, ಅರಣ್ಯ ಸಚಿವ ಅರವಿಂದ ಲಿಂಬಾವಳಿ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌
ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉನ್ನತಮಟ್ಟದ ಸಭೆಯಲ್ಲಿ ಪಾಲ್ಗೊಂಡಿದ್ದರು.

ಕೃಷಿ ಕ್ಷೇತ್ರಕ್ಕೆ ಪೂರಕವಾದ ಉದ್ದಿಮೆಗಳು ಹಾಗೂ ಮಳಿಗೆಗಳು ಸೇರಿದಂತೆ ಕೆಲವು ಚಟುವಟಿಕೆಗಳಿಗೆ ಸಡಿಲಿಕೆ ಮಾಡಲು ಸಭೆಯಲ್ಲಿ ಚರ್ಚಿಸಲಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ಸಮಯದ ಮಿತಿ ಹೆಚ್ಚಿಸುವ ಸಾಧ್ಯತೆಯ ಬಗ್ಗೆಯೂ ಚರ್ಚಿಸಲಾಗಿದೆ. ಮುಖ್ಯಮಂತ್ರಿಯವರು ಗುರುವಾರ ಮತ್ತೊಮ್ಮೆ ಕೆಲವು ಪ್ರಮುಖರ ಜತೆ ಚರ್ಚಿಸಿದ ಬಳಿಕವೇ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ರಫ್ತು ಆಧಾರಿತ ಕೈಗಾರಿಕೆಗಳಿಗೆ ಅವಕಾಶ: ಸಂಪೂರ್ಣವಾಗಿ ರಫ್ತು ಮಾಡಲಾಗುವ ಉತ್ಪನ್ನಗಳನ್ನೇ ತಯಾರಿಸುವ ಕೈಗಾರಿಕೆಗಳು ಒಟ್ಟು ಸಿಬ್ಬಂದಿಯ ಶೇಕಡ 50ರಷ್ಟು ಮಂದಿಯನ್ನು ಬಳಸಿಕೊಂಡು ಗುರುವಾರದಿಂದ ಕಾರ್ಯಾಚರಣೆ ನಡೆಸಲು ಅವಕಾಶ ಕಲ್ಪಿಸಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಬುಧವಾರ ಆದೇಶ ಹೊರಡಿಸಿದ್ದಾರೆ.

ವಿವಿಧ ಹಂತಗಳಲ್ಲಿ ಲಾಕ್‌ಡೌನ್‌ ಸಡಿಲಿಸುವ ಕಾರ್ಯತಂತ್ರದ ಮೊದಲ ಭಾಗವಾಗಿ ಈ ಆದೇಶ ಹೊರಡಿಸಿದ್ದು, ‘1,000ಕ್ಕಿಂತ ಹೆಚ್ಚು ನೌಕರರನ್ನು ಹೊಂದಿರುವ ಎಲ್ಲ ಉದ್ದಿಮೆಗಳೂ ಶೇ 10ರಷ್ಟು ಮಂದಿಗೆ ವಾರಕ್ಕೆ ಎರಡು ಬಾರಿ ಕೋವಿಡ್‌ ಪರೀಕ್ಷೆ ನಡೆಸಬೇಕು’ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

3 ನೇ ಅಲೆ ತಡೆಗೆ ಮುಂದಿನ ವಾರ ವರದಿ: ಕೋವಿಡ್‌ ಮೂರನೇ ಅಲೆ ತಡೆಗಟ್ಟಲು ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಇನ್ನೊಂದು ವಾರದಲ್ಲಿ ವರದಿ ಸಲ್ಲಿಸುವುದಾಗಿ ಡಾ.ದೇವಿಪ್ರಸಾದ್‌ ಶೆಟ್ಟಿ ನೇತೃತ್ವದ ಕಾರ್ಯಪಡೆ ತಿಳಿಸಿದೆ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ದೇವಿಪ್ರಸಾದ್ ಶೆಟ್ಟಿ ಈ ವಿಷಯ ತಿಳಿಸಿದರು.

ಕೋವಿಡ್‌ ಮೂರನೇ ಅಲೆಯನ್ನು ತಡೆಗಟ್ಟಲು ಕೈಗೊಳ್ಳಬೇಕಾಗಿರುವ ಮುಂಜಾಗರೂಕತಾ ಕ್ರಮಗಳು, ಕಲ್ಪಿಸಬೇಕಾದ ಮೂಲಸೌಕರ್ಯ ಹಾಗೂ ಚಿಕಿತ್ಸಾ ಸೌಲಭ್ಯಗಳು, ಅಗತ್ಯವಿರುವ ಮಾನವ ಸಂಪನ್ಮೂಲ ಮತ್ತು ಔಷಧಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.

ಕಾರ್ಯಪಡೆಯ ಶಿಫಾರಸುಗಳನ್ನು ಆಧರಿಸಿ, ಸರ್ಕಾರವು ಕ್ರಮಕೈಗೊಳ್ಳಲಿದೆ ಎಂದು ಯಡಿಯೂರಪ್ಪ ಸಭೆಯಲ್ಲಿ ತಿಳಿಸಿದರು.

ಹಳ್ಳಿಗಳಲ್ಲಿ ಕೊರೊನಾ ನಿಯಂತ್ರಣದ ಬಗ್ಗೆ ಹೆಚ್ಚು ಗಮನಹರಿಸಬೇಕು ಎಂದು ಆ ಬಳಿಕ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.

ಕಪ್ಪು ಶಿಲೀಂಧ್ರದಿಂದಾಗಿ ಸಾವಿನ ಸಂಖ್ಯೆಯ ಹೆಚ್ಚಾಗಿದ್ದು, ಅದನ್ನು ನಿಯಂತ್ರಿಸಲು ಕ್ರಮ ತಗೆದುಕೊಳ್ಳಬೇಕು. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಕೋವಿಡ್‌ ನಿಯಂತ್ರಿಸಬೇಕು ಎಂದೂ ಯಡಿಯೂರಪ್ಪ ತಿಳಿಸಿದರು.

ಸಭೆಯಲ್ಲಿ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಆರೋಗ್ಯ ಸಚಿವ ಡಾ. ಸುಧಾಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT