ಭಾನುವಾರ, ಜೂನ್ 26, 2022
21 °C

11 ಜಿಲ್ಲೆಗಷ್ಟೇ ಲಾಕ್‌ಡೌನ್‌, ಉಳಿದ ಜಿಲ್ಲೆಗಳಲ್ಲಿ ನಿರ್ಬಂಧ ಸಡಿಲ: ಬಿಎಸ್‌ವೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌ ಪ್ರಕರಣಗಳು ಹೆಚ್ಚಾಗಿರುವ 11 ಜಿಲ್ಲೆಗಳಲ್ಲಿ ಇದೇ 21ರ ವರೆಗೆ ಲಾಕ್‌ಡೌನ್‌ನ ಕಠಿಣ ನಿಯಮಗಳು ಯಥಾಸ್ಥಿತಿಯಲ್ಲಿ ಮುಂದುವರಿಯಲಿದ್ದು, ಉಳಿದ ಜಿಲ್ಲೆಗಳಲ್ಲಿ ಇದೇ 14ರಿಂದ ನಿರ್ಬಂಧಗಳನ್ನು ಸ್ವಲ್ಪಮಟ್ಟಿಗೆ ಸಡಿಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸಚಿವರ ಜತೆ ಗುರುವಾರ ಸಭೆ ನಡೆಸಿದರು. ಬಳಿಕ ಸುದ್ದಿಗಾರರಿಗೆ ನಿಯಮ ಸಡಿಲಿಕೆಯ ವಿವರ ನೀಡಿದರು.

ಕೋವಿಡ್‌ ಪ್ರಕರಣಗಳು ನಿಯಂತ್ರಣಕ್ಕೆ ಬರದೇ ಇರುವ 11 ಜಿಲ್ಲೆಗಳಲ್ಲಿ ಇನ್ನಷ್ಟು ಕಠಿಣ ಕ್ರಮಗಳನ್ನು  ಜಾರಿಗೊಳಿಸುವ ಅಗತ್ಯವಿದ್ದರೆ, ಜಿಲ್ಲಾ ಉಸ್ತುವಾರಿ ಸಚಿವರ ಜತೆ ಜಿಲ್ಲಾಧಿಕಾರಿಗಳು ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಪ್ರಕರಣಗಳು ಕಡಿಮೆಯಾಗಿರುವ ಉಳಿದ ಜಿಲ್ಲೆಗಳಲ್ಲಿ ನಿಯಮಗಳನ್ನು ಸಡಿಲಿಕೆ ಮಾಡಲು ನಿರ್ಧರಿಸಲಾಗಿದ್ದು, ಮೊದಲ ಹಂತದ ಸಡಿಲಿಕೆ ಜೂನ್‌ 14 ರ ಬೆಳಿಗ್ಗೆ 6 ಗಂಟೆಯಿಂದ ಜೂನ್‌ 21 ರ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗುತ್ತದೆ. ನಂತರದ ಹಂತಗಳಲ್ಲಿ ಪರಿಸ್ಥಿತಿ ನೋಡಿಕೊಂಡು ಇನ್ನಷ್ಟು ಸಡಿಲಿಕೆ ಮಾಡಲಾಗುವುದು ಎಂದರು.

ಜಿಲ್ಲಾಧಿಕಾರಿಗಳ ಜತೆ ಸಂವಾದ: ಕೋವಿಡ್‌ ಪ್ರಕರಣಗಳು ಹೆಚ್ಚಾಗಿರುವ ಎಂಟು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಯಡಿಯೂರಪ್ಪ ಗುರುವಾರ ಬೆಳಿಗ್ಗೆ ವಿಡಿಯೊ ಸಂವಾದ ನಡೆಸಿ, ಲಾಕ್‌ಡೌನ್‌ ಸಡಿಲಿಸುವ ಕುರಿತು ಅಭಿಪ್ರಾಯ ಪಡೆದರು.

ಕೋವಿಡ್‌ ದೃಢ ಪ್ರಮಾಣವನ್ನು ಶೇ 5 ಕ್ಕಿಂತ ಕಡಿಮೆಗೊಳಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು, ಮಂಡ್ಯ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.

ರಾಜ್ಯದ ಒಟ್ಟು ಪ್ರಕರಣಗಳಲ್ಲಿ 65 ಸಾವಿರ ಸಕ್ರಿಯ ಪ್ರಕರಣಗಳು ಈ ಎಂಟು ಜಿಲ್ಲೆಗಳಲ್ಲಿವೆ. ಸರ್ಕಾರ ಕೈಗೊಂಡಿರುವ ಕಠಿಣ ನಿರ್ಬಂಧಗಳಿಂದಾಗಿ ಸೋಂಕಿನ ತೀವ್ರತೆ ಇಳಿಮುಖವಾಗುತ್ತಿದೆ. ಆದರೆ, ಎಂಟು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿಲ್ಲ. ಮೈಸೂರು ಹೊರತುಪಡಿಸಿ ಇತರ ಜಿಲ್ಲೆಗಳಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹೆಚ್ಚಿದೆ’ ಎಂದು ಮುಖ್ಯಮಂತ್ರಿ  ಕಳವಳ ವ್ಯಕ್ತಪಡಿಸಿದರು.

 ‘ಚಿಕ್ಕಮಗಳೂರು ಜಿಲ್ಲೆಯಲ್ಲಿ ಜೂನ್ ಮೊದಲ ವಾರದಲ್ಲಿ ಕೋವಿಡ್‌ ದೃಢ ಪ್ರಮಾಣ ಅತಿ ಹೆಚ್ಚು ಅಂದರೆ, ಸರಾಸರಿ ಶೇ 25.17 ದಾಖಲಾಗಿದೆ. ಮೈಸೂರಿನಲ್ಲಿಯೂ ಶೇ 22ರಷ್ಟಿದೆ. ಕೋವಿಡ್ ನಿಯಂತ್ರಣಕ್ಕೆ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಸಲಹೆ ನೀಡಿದರು.

ಲಾಕ್‌ಡೌನ್‌ ಜಿಲ್ಲೆಗಳು:

ಚಿಕ್ಕಮಗಳೂರು

ಶಿವಮೊಗ್ಗ

ದಾವಣಗೆರೆ

ಮೈಸೂರು

ಚಾಮರಾಜನಗರ

ಹಾಸನ

ದಕ್ಷಿಣಕನ್ನಡ

ಬೆಂಗಳೂರು ಗ್ರಾಮಾಂತರ

ಮಂಡ್ಯ

ಬೆಳಗಾವಿ

ಕೊಡಗು

ನಿಯಮಗಳ ಸಡಿಲಿಕೆ ಯಾವುವು:

* ಎಲ್ಲ ಕಾರ್ಖಾನೆಗಳಲ್ಲಿ ಶೇ 50 ರಷ್ಟು ಸಿಬ್ಬಂದಿ ಹಾಗೂ ಗಾರ್ಮೆಂಟ್ಸ್‌ಗಳಲ್ಲಿ ಶೇ 30 ರಷ್ಟು ಹಾಜರಾತಿಯೊಂದಿಗೆ ಕಾರ್ಯ ನಿರ್ವಹಿಸಬಹುದು.

* ಅಗತ್ಯ ವಸ್ತುಗಳ ಮಾರಾಟದ ಅಂಗಡಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಹಿವಾಟು ನಡೆಸಬಹುದು.

* ಕಟ್ಟಡ ಮತ್ತು ಇತರ ನಿರ್ಮಾಣ ಕಾಮಗಾರಿ ನಡೆಸಲು ಅವಕಾಶ. ಅದಕ್ಕೆ ಪೂರಕವಾದ ಸಾಮಗ್ರಿಗಳು, ಸ್ಟೀಲ್‌ ಮತ್ತು ಸಿಮೆಂಟ್‌ ಮಾರಾಟಕ್ಕೆ ಅವಕಾಶ

* ಉದ್ಯಾನಗಳಲ್ಲಿ ಬೆಳಿಗ್ಗೆ 5 ಗಂಟೆಯಿಂದ ಬೆಳಿಗ್ಗೆ 10 ಗಂಟೆಯವರೆಗೆ ವಾಯುವಿಹಾರ ಮಾಡಬಹುದು

* ಬೀದಿ ವ್ಯಾಪಾರಿಗಳು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾರಾಟ ಮಾಡಬಹುದು

* ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ. ಆದರೆ, ಬಿಎಂಟಿಸಿ ಮತ್ತು ಇತರ ಸಮೂಹ ಸಾರಿಗೆಗಳಿಗೆ ಅವಕಾಶವಿಲ್ಲ.

* ತುರ್ತು ಕಾರ್ಯದ ನಿಮಿತ್ತ ಅಂತರ್‌ ಜಿಲ್ಲಾ ಪ್ರಯಾಣಕ್ಕೆ ಅವಕಾಶವೂ ಇದೆ.

ರಾತ್ರಿ ಕರ್ಫ್ಯೂ

*ಪ್ರತಿ ದಿನ ರಾತ್ರಿ 7 ಗಂಟೆಯಿಂದ ಮಾರನೇ ದಿನ ಬೆಳಿಗ್ಗೆ 5 ಗಂಟೆಯವರೆಗೆ

ವಾರಾಂತ್ಯ ಕರ್ಫ್ಯೂ

* ಜೂನ್ 18 ರ ಶುಕ್ರವಾರ ರಾತ್ರಿ 7 ರಿಂದ ಜೂನ್ 21 ರ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು