ಗುರುವಾರ , ಮೇ 26, 2022
28 °C

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ. ಪಾಟೀಲ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ (ಕೆಪಿಸಿಸಿ) ಪ್ರಚಾರ ಸಮಿತಿ ಅಧ್ಯಕ್ಷರಾಗಿ ಶಾಸಕ ಎಂ.ಬಿ. ಪಾಟೀಲ ಅವರನ್ನು ನೇಮಿಸಲಾಗಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಒಂದು ವರ್ಷ ಮೂರು ತಿಂಗಳು ಬಾಕಿ ಇರುವಂತೆ ಕಾಂಗ್ರೆಸ್ ಹೈಕಮಾಂಡ್‌ ಈ ನಿರ್ಧಾರ ತೆಗೆದುಕೊಂಡಿದೆ.

ಎಂ.ಬಿ. ಪಾಟೀಲ ಅವರನ್ನು ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಬೇಕೆಂಬ ಪ್ರಸ್ತಾವವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಂಗೀಕರಿಸಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ತಿಳಿಸಿದ್ದಾರೆ.

ವಿಜಯಪುರದ ಬಬಲೇಶ್ವರ ಕ್ಷೇತ್ರದಿಂದ 2008, 2013, 2018ರಲ್ಲಿ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಎಂ.ಬಿ ಪಾಟೀಲ ಅವರು ಈ ಹಿಂದೆ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಜಲಸಂಪನ್ಮೂಲ ಸಚಿವರಾಗಿ ಕೆಲಸ ಮಾಡಿದ್ದರು. ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ಎಂ.ಬಿ ಪಾಟೀಲ ಲಿಂಗಾಯತ ಸಮುದಾಯದವರು. ಕೆಪಿಸಿಸಿ ಅಧ್ಯಕ್ಷರಾಗಿ ಒಕ್ಕಲಿಗ ಸಮುದಾಯದ ಡಿ.ಕೆ. ಶಿವಕುಮಾರ್ ಇದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೆ, ಸತೀಶ ಜಾರಕಿಹೊಳಿ, ಸಲೀಂ ಅಹ್ಮದ್, ರಾಮಲಿಂಗಾ ರೆಡ್ಡಿ, ಆರ್. ಧ್ರುವನಾರಾಯಣ ಇದ್ದಾರೆ. ಮುಂದಿನ ಚುನಾವಣೆಯಲ್ಲಿ ಮತ ಬ್ಯಾಂಕ್, ಜಾತಿ ಲೆಕ್ಕಾಚಾರದ ಮೇಲೆ ಕಣ್ಣಿಟ್ಟು ಎಂ.ಬಿ ಪಾಟೀಲ ಅವರಿಗೆ ಪ್ರಚಾರ ಸಮಿತಿ ನೇತೃತ್ವವನ್ನು ಕಾಂಗ್ರೆಸ್‌ ನೀಡಿದೆ ಎಂದು ಹೇಳಲಾಗುತ್ತಿದೆ.

‘ಅಧಿಕಾರಕ್ಕೆ ತರಲು ಯತ್ನಿಸುವೆ’: ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ‘2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 150 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಗುರಿ ಇದ್ದು, ಒಂದು ತಂಡವಾಗಿ ಸಂಘಟಿತ ಹೋರಾಟ ನಡೆಸುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸಲಾಗುವುದು’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು