ಮಂಗಳವಾರ, ಸೆಪ್ಟೆಂಬರ್ 28, 2021
22 °C
ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಒತ್ತಾಯ

ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಆರೋಪಿಯನ್ನು ಬಂಧಿಸಿ: ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಗ್ರಾಮವೊಂದರ ಇಬ್ಬರು ದಲಿತ ಬಾಲಕಿಯರ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಒತ್ತಾಯಿಸಿದ್ದಾರೆ.

ಮಾದಾರ ಚನ್ನಯ್ಯ ಗುರುಪೀಠ ಸಂತ್ರಸ್ತ ಬಾಲಕಿಯರ ಪೋಷಕರ ಜೊತೆಗಿದೆ. ಕೃತ್ಯ ನಡೆದು ವಾರ ಕಳೆದರೂ ಪೊಲೀಸ್‌ ಇಲಾಖೆ ನಿಧಾನಗತಿಯಲ್ಲಿ ತನಿಖೆ ನಡೆಸುತ್ತಿರುವುದು ಖಂಡನೀಯ. ವಿಜಯಪುರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಮಾದಿಗ ಸಮಾಜದ 13 ಮತ್ತು 15 ವರ್ಷದ ಇಬ್ಬರು ಬಾಲಕಿಯರನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ನಡೆಸಲಾಗಿದೆ. ಕೈಕಾಲು ಕಟ್ಟಿಹಾಕಿ ಬಾವಿಗೆ ಬಿಸಾಡಿ ಕೊಲೆ ಮಾಡಲಾಗಿದೆ. ಇದು ಅತ್ಯಂತ ಹೇಯ ಕೃತ್ಯವಾಗಿದ್ದು, ಸಮಾಜದಲ್ಲಿ ಆತಂಕ ಸೃಷ್ಟಿಯಾಗಿದೆ. ಸರ್ಕಾರ ನೀಡುವ ಪರಿಹಾರದಿಂದ ಬಾಲಕಿಯರು ಮರಳಿ ಬರುವುದಿಲ್ಲ. ತಪ್ಪಿತಸ್ಥರನ್ನು ಬಂಧಿಸಿ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ಹೇಳಿದ್ದಾರೆ. ಆದರೆ, ಆರೋಪಿಗಳಿಗೆ ಸಂಬಂಧಿಸಿದಂತೆ ಈವರೆಗೆ ಯಾವುದೇ ಮಾಹಿತಿ ಬಹಿರಂಗಪಡಿಸಿಲ್ಲ. ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಬಗ್ಗೆ ಅನುಮಾನಗಳಿವೆ. ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ದೆಹಲಿಯ ನಿರ್ಭಯ ಪ್ರಕರಣದ ಮಾದರಿಯಲ್ಲಿ ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು