ಗುರುವಾರ , ಜನವರಿ 28, 2021
28 °C

ಮದರಸಾ ಶಿಕ್ಷಣ ಎಸ್ಸೆಸ್ಸೆಲ್ಸಿಗೆ ತತ್ಸಮಾನ: ಸರ್ಕಾರ ಚಿಂತನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣದ ಜತೆಗೆ ಆಧುನಿಕ ಶಿಕ್ಷಣವನ್ನು ನೀಡುವ ಮೂಲಕ ಎಸ್ಸೆಸ್ಸೆಲ್ಸಿಗೆ ತತ್ಸಮಾನ ಎಂದು ಪರಿಗಣಿಸಲು ಚಿಂತನೆ ನಡೆಸಿರುವುದಾಗಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ ತಿಳಿಸಿದ್ದಾರೆ.

ಮುಖ್ಯವಾಗಿ, ಇಂಗ್ಲಿಷ್‌, ವಿಜ್ಞಾನ ಮತ್ತು  ಗಣಿತದ ಪಠ್ಯವನ್ನು ಬೋಧಿಸಲಾಗುವುದು. ಅಲ್ಲಿ ಕಲಿತು ಹೊರಬರುವಾಗ ಐಟಿಐನಂತಹ ಕೌಶಲ ಆಧರಿತ ಶಿಕ್ಷಣ ಪಡೆಯಲು ಅನುಕೂಲವಾಗುತ್ತದೆ ಎಂದು ಅವರು ವಿಧಾನಸೌಧದಲ್ಲಿ ಸುದ್ದಿಗಾರರಿಗೆ ವಿವರಿಸಿದರು.

ಮುಸ್ಲಿಂ ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕು ಎಂಬ ಕಾರಣಕ್ಕೆ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವುದು ಮತ್ತು ಉದ್ಯೋಗ ಆಧಾರಿತ ಶಿಕ್ಷಣ ನೀಡಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಸುಮಾರು 800 ಕ್ಕೂ ಹೆಚ್ಚು ಮದರಸಾಗಳಿವೆ. ಆಧುನಿಕ ಶಿಕ್ಷಣ ಯಾವ ರೀತಿಯಲ್ಲಿ ಜಾರಿಗೊಳಿಸಬೇಕು ಎಂಬ ಚರ್ಚೆ ನಡೆದಿದೆ. ಕೇಂದ್ರ ಸರ್ಕಾರ ಕೂಡ ಕರ್ನಾಟಕ, ತಮಿಳುನಾಡು, ಕೇರಳ, ಪಶ್ಚಿಮಬಂಗಾಳಗಳಲ್ಲಿರುವ ಮದರಸಾಗಳಲ್ಲಿ ಆಧುನಿಕ ಶಿಕ್ಷಣ ಮತ್ತು ಡಿಪ್ಲೊಮೊ ಆರಂಭಿಸಲು ಉದ್ದೇಶಿಸಿದ್ದು, ಇದರ ಸಲುವಾಗಿ ಮಂಡಳಿಯನ್ನು ರಚಿಸುವ ಚಿಂತನೆ ಹೊಂದಿದೆ ಎಂದು ಇಲಾಖೆ ಅಧಿಕಾರಿಯೊಬ್ಬರು ಹೇಳಿದರು.

ಅನುದಾನ ಕಡಿತ: ಕೋವಿಡ್‌ ಕಾರಣ ಇತರ ಎಲ್ಲ ಇಲಾಖೆಗಳಂತೆ ನಮ್ಮ ಇಲಾಖೆಗೂ ಅನುದಾನ ಕಡಿತ ಆಗಿದೆ. ಇದರಿಂದಾಗಿ ಅಭಿವೃದ್ಧಿ ಕಾರ್ಯಗಳನ್ನು ರದ್ದುಪಡಿಸಿದ್ದೇವೆ. ಶಾದಿಮಹಲ್‌ ಯೋಜನೆಗೂ ತಡೆ ನೀಡಲಾಗಿದೆ ಎಂದು ಶ್ರೀಮಂತ ಪಾಟೀಲ ಹೇಳಿದರು.

ಸಂಪುಟದಿಂದ ನನ್ನನ್ನು ಕೈಬಿಡುತ್ತಾರೆ ಎಂಬುದರಲ್ಲಿ ಹುರುಳಿಲ್ಲ. ನಮ್ಮ ಜತೆಯಲ್ಲಿ ಕಾಂಗ್ರೆಸ್–ಜೆಡಿಎಸ್‌ ಬಿಟ್ಟು ಬಂದವರಿಗೆ ಸಚಿವ ಸ್ಥಾನ ಸಿಗಲಿದೆ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು