ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದ ವಾಹನಕ್ಕೆ ಬೆಳಗಾವಿಯಲ್ಲಿ ಕಪ್ಪು ಮಸಿ

Last Updated 27 ನವೆಂಬರ್ 2022, 11:12 IST
ಅಕ್ಷರ ಗಾತ್ರ

ಬೆಳಗಾವಿ: ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್‌ಗಳಿಗೆ ಮಸಿ ಬಳಿದು, ಕಲ್ಲು ತೂರಿದ ಘಟನೆಗೆ ಪ್ರತಿಕಾರವಾಗಿ, ಕರ್ನಾಟಕ ರಕ್ಷಣಾ ವೇದಿಕೆ(ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರು ನಗರದಲ್ಲಿ ಭಾನುವಾರ ಮಹಾರಾಷ್ಟ್ರದ ವಾಹನಕ್ಕೆ ಕಪ್ಪು ಮಸಿ ಬಳಿದರು.

ಇಲ್ಲಿನ ಮಹಾಂತೇಶ ನಗರದ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಮಹಾರಾಷ್ಟ್ರದ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಇದೇ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಮಹಾರಾಷ್ಟ್ರದ ವಾಹನ ತಡೆದು, ಅದರ ಗಾಜು ಒಡೆಯಲು ಯತ್ನಿಸಿದರು. ಆಗ, ಪೊಲೀಸರು ಕಾರ್ಯಕರ್ತರನ್ನು ತಡೆದು ವಶಕ್ಕೆ ಪಡೆದರು. ಈ ವೇಳೆ ಪರಸ್ಪರರ ಮಧ್ಯೆ ತಳ್ಳಾಟ ನಡೆಯಿತು.

‘ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಆಗುತ್ತಿರುವ ಅನ್ಯಾಯವನ್ನು ನಾವು ಸಹಿಸುವುದಿಲ್ಲ. ನಮ್ಮ ತಾಳ್ಮೆಯ ದುರುಪಯೋಗ ಪಡೆದುಕೊಳ್ಳಬೇಡಿ. ಒಂದುವೇಳೆ ನಾವು ಸಿಡಿದೆದ್ದರೆ, ಮಹಾರಾಷ್ಟ್ರ ಸರ್ಕಾರ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಕನ್ನಡಿಗರ ಆಕ್ರೋಶ: ಇದಕ್ಕೂ ಮುನ್ನ ಪ್ರತಿಭಟನೆ ಮಾಡಿದ ಕರವೇ ಕಾರ್ಯಕರ್ತರು,
‘ಮಹಾರಾಷ್ಟ್ರದಲ್ಲಿ ನಮ್ಮ ಬಸ್‌ಗಳಿಗೆ ಮಸಿ ಬಳಿದ, ಕಲ್ಲು ತೂರಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಬೇಕು’ ಎಂದು ಆಗ್ರಹಿಸಿದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡನವೀಸ್‌ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ, ‘ಗಡಿ ವಿವಾದ ಕುರಿತು ಮಹಾರಾಷ್ಟ್ರ ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಿದೆ. ಈ ಮಧ್ಯೆ, ಅಲ್ಲಿನ ಜನಪ್ರತಿನಿಧಿಗಳು ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡುತ್ತ ಗಡಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರಲು ಯತ್ನಿಸುತ್ತಿದ್ದಾರೆ. ಆ ರಾಜ್ಯಕ್ಕೆ ಕಾರ್ಯಾಚರಣೆಗೆ ಹೋದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರುತ್ತಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಮಹಾರಾಷ್ಟ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು. ಜನರ ದಿಕ್ಕು ತಪ್ಪಿಸಿ, ಗಡಿಯಲ್ಲಿ ಗೊಂದಲ ಸೃಷ್ಟಿಸುತ್ತಿರುವವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.

‘ಗಡಿ ವಿವಾದ ಪ್ರಕರಣದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಮೌನ ಮುರಿಯಬೇಕು. ಇಲ್ಲದಿದ್ದರೆ ನಿಮ್ಮ ವಿರುದ್ಧ ಹೋರಾಡಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ವೇದಿಕೆ ಸಂಚಾಲಕ ಮಹಾದೇವ ತಳವಾರ, ಮಹೇಶ ಹಟ್ಟಿಹೊಳಿ, ರುದ್ರಗೌಡ ಪಾಟೀಲ, ರಮೇಶ ಯರಗಣ್ಣವರ ಇತರರಿದ್ದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಸ್ಥಗಿತಗೊಂಡು, ವಾಹನಗಳ ಚಾಲಕರು ಪರದಾಡುವಂತಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT