ಭಾನುವಾರ, ಸೆಪ್ಟೆಂಬರ್ 19, 2021
29 °C

ಮಾಫಿಯಾ ಜತೆ ನಂಟು ಬೇಡ: ಐಪಿಎಸ್ ಅಧಿಕಾರಿಗಳಿಗೆ ಸಿಎಂ ತಾಕೀತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭೂ ಕಬಳಿಕೆ ಮಾಡುವವರು, ಮರಳು ಕಳ್ಳಸಾಗಣೆದಾರರು ಸೇರಿದಂತೆ ಯಾವುದೇ ಮಾಫಿಯಾಗಳ ಜತೆ ನಂಟು ಇರಿಸಿಕೊಳ್ಳಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಐಪಿಎಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಸೋಮವಾರ ನಡೆದ ಐಪಿಎಸ್ ಅಧಿಕಾರಿಗಳ ಸಮ್ಮೇಳನ ಉದ್ಘಾಟಿಸಿ, ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು ಈ ಎಚ್ಚರಿಕೆ ನೀಡಿದ್ದಾರೆ.

ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ, 'ಭೂ ಮಾಫಿಯಾ, ಮರಳು ಕಳ್ಳಸಾಗಣೆ ಮಾಡುವವರು, ಕ್ರಿಮಿನಲ್ ಹಿನ್ನೆಲೆಯವರು, ಅವರ ಏಜೆಂಟರು ಸೇರಿದಂತೆ ಯಾವುದೇ ಮಾಫಿಯಾ ಜತೆ ಪೊಲೀಸರು ನಂಟು ಇರಿಸಿಕೊಳ್ಳಬಾರದು ಎಂದು ನಿರ್ದೇಶನ ನೀಡಿದ್ದೇನೆ. ಸಿವಿಲ್ ವ್ಯಾಜ್ಯಗಳಲ್ಲಿ ಮಧ್ಯಪ್ರವೇಶ ಮಾಡದಂತೆಯೂ ಸೂಚಿಸಲಾಗಿದೆ' ಎಂದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಪೊಲೀಸ್ ಕಮಿಷನರ್ ಗಳು ಮತ್ತು ಎಲ್ಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನಿರಂತರವಾಗಿ ಪ್ರಕರಣಗಳ ಮೇಲ್ವಿಚಾರಣೆ ನಡೆಸಬೇಕು. ಇದಕ್ಕಾಗಿ ಪ್ರತ್ಯೇಕ ಡ್ಯಾಷ್ ಬೋರ್ಡ್ ರೂಪಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಸೈಬರ್ ಅಪರಾಧ ಕೃತ್ಯಗಳು ಸೇರಿದಂತೆ ತನಿಖೆಯಲ್ಲಿ ಹೊಸ ಸವಾಲುಗಳನ್ನು ಎದುರಿಸುವುದಕ್ಕಾಗಿ ತನಿಖೆಯಲ್ಲಿ ನೂತನ ವಿಧಾನ ಮತ್ತು ತಂತ್ರಜ್ಞಾನ ಅಳವಡಿಸಿಕೊಳ್ಳಲು ಸಲಹೆ ನೀಡಲಾಗಿದೆ. ಅಪರಾಧ ಪ್ರಕರಣಗಳ ವಿಚಾರಣೆಯಲ್ಲಿ ಹಿನ್ನಡೆ ಆಗದಂತೆಯೂ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದರು.

'ಜನಸ್ನೇಹಿ ಪೊಲೀಸ್ ವ್ಯವಸ್ಥೆ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲ ಅಧಿಕಾರಿಗಳಿಗೂ ಸೂಚನೆ ನೀಡಿದ್ದೇನೆ. ಪೊಲೀಸರು ಸಾರ್ವಜನಿಕರ ಜತೆ ಸೌಜನ್ಯಯುತವಾಗಿ ವರ್ತಿಸುವಂತೆ ನಿರ್ದೇಶನ ನೀಡಲು ತಿಳಿಸಲಾಗಿದೆ ಎಂದು ಬೊಮ್ಮಾಯಿ ಹೇಳಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್ ಸಭೆಯಲ್ಲಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು