ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಾಠ ಅಭಿವೃದ್ದಿ ಪ್ರಾಧಿಕಾರ: ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

Last Updated 18 ನವೆಂಬರ್ 2020, 12:06 IST
ಅಕ್ಷರ ಗಾತ್ರ

ಬೆಂಗಳೂರು: ಮರಾಠ ಅಭಿವೃದ್ದಿ ಪ್ರಾಧಿಕಾರ ಘೋಷಿಸುವ ಮೂಲಕ ರಾಜ್ಯ ಸರ್ಕಾರ ಅನಗತ್ಯವಾಗಿ ಕನ್ನಡಿಗರನ್ನು ಕೆರಳಿಸುವ ಮೂರ್ಖತನ ತೋರಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಬುಧವಾರ ಸರಣಿ ಟ್ವೀಟ್‌ ಮಾಡಿರುವ ಅವರು, 'ಗಡಿಭಾಗದಲ್ಲಿ ಕನ್ನಡ ಮತ್ತು ಮರಾಠಿಗರ ನಡುವೆ ಆಗಾಗ ಸಂಘರ್ಷ ನಡೆದರೂ, ರಾಜ್ಯಾದ್ಯಂತ ಎರಡೂ ಸಮುದಾಯಗಳು ಸೌಹಾರ್ದತೆಯಿಂದ ಬದುಕುತ್ತಿವೆ. ಸರ್ಕಾರ ಮರಾಠ ಅಭಿವೃದ್ದಿ ಪ್ರಾಧಿಕಾರ ಘೋಷಿಸಿ ಅನಗತ್ಯವಾಗಿ ಕನ್ನಡಿಗರನ್ನು ಕೆರಳಿಸುವ ಮೂರ್ಖತನ ತೋರಿದೆ. ಇದರಿಂದಾಗಿ ರಾಜ್ಯದ ಶಾಂತಿ-ಸುವ್ಯವಸ್ಥೆಗೆ ಭಂಗ ಉಂಟಾದಲ್ಲಿ ಅದಕ್ಕೆ ಮುಖ್ಯಮಂತ್ರಿಗಳೇ ಹೊಣೆ' ಎಂದು ಕಿಡಿ ಕಾರಿದ್ದಾರೆ.

'ಯಾವುದೇ ವೈಜ್ಞಾನಿಕ ಅಧ್ಯಯನಗಳಿಲ್ಲದೆ ಜಾತಿ ಆಧಾರಿತ ನಿಗಮ-ಪ್ರಾಧಿಕಾರ ಸ್ಥಾಪನೆ ಸಮಾಜ ವಿರೋಧಿ ಮಾತ್ರವಲ್ಲ, ಪ್ರಜಾಪ್ರಭುತ್ವ ವಿರೋಧಿ ತೀರ್ಮಾನ ಕೂಡ ಹೌದು. ಚುನಾವಣೆಗಳನ್ನು ಸಾಧನೆಯ ಬಲದಿಂದ ಗೆಲ್ಲಲಾಗದ ರಾಜ್ಯದ ಮತಿಹೀನ ಬಿಜೆಪಿ ಸರ್ಕಾರ ಇಂತಹ ಅಗ್ಗದ ತಂತ್ರ-ಕುತಂತ್ರಗಳನ್ನು ಮಾಡಿ ಸಮಾಜವನ್ನು ಒಡೆಯಲು ಹೊರಟಿದೆ' ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬಡತನ ನಿರ್ಮೂಲನೆಯ ಕಾರ್ಯಕ್ರಮಗಳಿಗೆ ವೈಜ್ಞಾನಿಕವಾದ ಅಧ್ಯಯನ ಆಧಾರಿತವಾಗಬೇಕು ಎಂದಿರುವ ಅವರು, 'ಮುಖ್ಯಮಂತ್ರಿಗಳು ಬಡತನ ನಿರ್ಮೂಲನೆಯ ಬಗ್ಗೆ ಪ್ರಾಮಾಣಿಕ ಕಾಳಜಿ ಹೊಂದಿದ್ದರೆ ಈಗಾಗಲೇ ಅವರ ಮುಂದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಒಪ್ಪಿಕೊಂಡು ಕಾರ್ಯಕ್ರಮಗಳನ್ನು ರೂಪಿಸಲಿ' ಎಂದು ಒತ್ತಾಯಿಸಿದ್ದಾರೆ.

'ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ನಮ್ಮ ವಿರೋಧ ಇಲ್ಲ. ಜಾತಿ-ಧರ್ಮಗಳನ್ನು ಮೀರಿದ್ದು ಬಡತನ. ತಳಸಮುದಾಯಗಳಲ್ಲಿ ಮಾತ್ರವಲ್ಲ ಮೇಲ್ಜಾತಿಗಳಲ್ಲಿಯೂ ಬಡವರಿದ್ದಾರೆ. ಎಲ್ಲ ಜಾತಿ-ಧರ್ಮಗಳ ಬಡವರ ಕಲ್ಯಾಣ ಕಾರ್ಯಕ್ರಮಗಳಿಗೆ ನನ್ನ ಸ್ವಾಗತವಿದೆ. ಕೇವಲ ರಾಜಕೀಯ ಲಾಭಕ್ಕಾಗಿ ನಡೆಸುವ ಇಂತಹ ಕ್ಷುಲ್ಲಕ ಬುದ್ದಿಯ ಕಸರತ್ತುಗಳನ್ನು ಖಂಡಿಸುತ್ತೇನೆ' ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

'ನಾನು ಮುಖ್ಯಮಂತ್ರಿಯಾಗಿ ಅನುಷ್ಠಾನಗೊಳಿಸಿರುವ ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಕಾರ್ಯಕ್ರಮಗಳು ನಿರ್ದಿಷ್ಠ ಜಾತಿ-ಧರ್ಮಕ್ಕೆ ಸೀಮಿತವಾದುದಲ್ಲ. ಇವೆಲ್ಲವೂ ಸರ್ವಜನಾಂಗದ ಬಡವರ ಕಲ್ಯಾಣ ಕಾರ್ಯಕ್ರಮಗಳು. ನಾನು ಜಾತಿ-ಜಾತಿ ನಡುವೆ ವೈಷಮ್ಯ ಹುಟ್ಟಿಸುವ ಕೆಲಸ ಮಾಡಿಲ್ಲ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮೀಸಲಾತಿ, ಸಾಮಾಜಿಕ ನ್ಯಾಯದ ಬಗ್ಗೆ ನಾವು ಮಾತನಾಡಿದಾಗ ನಮ್ಮನ್ನು ಜಾತಿವಾದಿಗಳೆಂದು ಟೀಕಿಸುವ, ಹಂಗಿಸುವ ಬಿಜೆಪಿ ಈಗ ಮಾಡುತ್ತಿರುವುದೇನು ಎಂದು ಪ್ರಶ್ನಿಸಿರುವ ಅವರು, 'ಜಾತಿ-ಜಾತಿ ನಡುವೆ ಮಾತ್ರವಲ್ಲ ಭಾಷೆ-ಭಾಷೆ ನಡುವೆ ಕೂಡಾ ಜಗಳ ಹುಟ್ಟುಹಾಕುತ್ತಿದೆ. ಇಂತಹ ತುಘಲಕ್ ನಿರ್ಧಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ' ಎಂದು ತಿಳಿಸಿದ್ದಾರೆ.

'ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಗ್ಯತೆ ಇಲ್ಲ. ವೃದ್ಧಾಪ್ಯವೇತನ, ವಿಧವಾ ವೇತನ, ಅಂಗವಿಕಲ ವೇತನಕ್ಕೆ ದುಡ್ಡಿಲ್ಲ, ಅತಿವೃಷ್ಟಿಯಿಂದ ಕಷ್ಟ-ನಷ್ಟಕ್ಕೀಡಾಗಿರುವ ಜನ ಬೀದಿಯಲ್ಲಿದ್ದಾರೆ, ಕೋರೊನಾ ಸೋಂಕಿನಿಂದ ಜನ ಸಾಯುತ್ತಿದ್ದಾರೆ. ಇವೆಲ್ಲಕ್ಕೂ ಸರ್ಕಾರದ ಬಳಿ ಹಣ ಇಲ್ಲ, ಜಾತಿ ನಿಗಮ-ಪ್ರಾಧಿಕಾರಕ್ಕೆ ನೂರಾರು ಕೋಟಿ ಎಲ್ಲಿಂದ ಬಂತು?' ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT