ಭಾನುವಾರ, ಮಾರ್ಚ್ 7, 2021
31 °C

ತಿಂಗಳಲ್ಲಿ 2,500 ವೈದ್ಯರ ನೇಮಕ: ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ.ಸುಧಾಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಂತಾಮಣಿ: ‘ರಾಜ್ಯದಲ್ಲಿ ವೈದ್ಯರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಒಂದು ತಿಂಗಳಲ್ಲಿ 2,500 ವೈದ್ಯರ ನೇರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ’ ಎಂದು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

ನಗರದಲ್ಲಿ ಶುಕ್ರವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಚೇರಿಯ ಉದ್ಘಾಟನೆ ಹಾಗೂ ಶ್ರೀರಾಮ ಮಂದಿರಕ್ಕೆ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಶುಕ್ರವಾರ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ನೀಗಿಸಲು ಈ ನೇಮಕಾತಿ ನಡೆಯುತ್ತಿದೆ. ತಿಂಗಳಲ್ಲಿ ರಾಜ್ಯದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ’ ಎಂದರು.

‘ರಾಜ್ಯದಲ್ಲಿ ಹೊಸ ವೈದ್ಯಕೀಯ ನೀತಿ ಜಾರಿಗೊಳಿಸಲಿದ್ದೇವೆ. ಆರೋಗ್ಯ ಸೇವೆ ಮತ್ತು ವೈದ್ಯಕೀಯ ಶಿಕ್ಷಣ ಇನ್ನಷ್ಟು ಸುಧಾರಣೆ ಆಗಲಿದೆ. 30 ತಜ್ಞರು ನೂತನ ನೀತಿಯ ಬಗ್ಗೆ ಉಪಯುಕ್ತ ಸಲಹೆ, ಮಾರ್ಗದರ್ಶನ, ಸೂಚನೆ ನೀಡಲಿದ್ದಾರೆ’ ಎಂದರು.

‘ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ ಇಡೀ ದೇಶದಲ್ಲಿ ವಿಶಿಷ್ಟ ಮತ್ತು ವೈಶಿಷ್ಟ್ಯವಾದ ಸಮಗ್ರ ವಿಮಾ ಯೋಜನೆಯಾಗಿದೆ. ಇತರೇ ರಾಜ್ಯಗಳಲ್ಲಿ ಬಿಪಿಎಲ್ ಕಾರ್ಡ್‌ದಾರರಿಗೆ ಮತ್ತು ಬಡವರಿಗೆ ಮಾತ್ರ ಇದೆ. ಆದರೆ, ಕರ್ನಾಟಕದಲ್ಲಿ ಬಿ.ಪಿ.ಎಲ್ ಕಾರ್ಡ್‌ದಾರರ ಜತೆಗೆ ಮಧ್ಯಮವರ್ಗ ಮತ್ತು ಮೇಲ್ವರ್ಗದ ಜನರಿಗೂ ಶೇಕಡ 30ರಷ್ಟು ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ಎಲ್ಲರಿಗೂ ವಿಮೆ, ಎಲ್ಲರಿಗೂ ಆರೋಗ್ಯ ಎನ್ನುವ ಉತ್ತಮ ಕಾರ್ಯಕ್ರಮ ಇದಾಗಿದೆ’ ಎಂದರು.

 ‘ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪರಸ್ಪರ ಪೂರಕವಾದ ಒಂದೇ ಇಲಾಖೆ. ಎಲ್ಲ ರಾಜ್ಯಗಳಲ್ಲಿ ಒಂದೇ ಆಗಿದೆ. ರಾಜ್ಯದಲ್ಲಿ ರಾಜಕೀಯ ಕಾರಣದಿಂದ ಬೇರೆ ಬೇರೆ ಮಾಡುವ ಮೂಲಕ ಆಗಿದ್ದ ತಪ್ಪನ್ನು ಮುಖ್ಯಮಂತ್ರಿ ಅವರು ಒಂದು ಮಾಡುವ ಮೂಲಕ ಸರಿಪಡಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಇನ್‌ಪುಟ್; ಆರೋಗ್ಯ ಔಟ್‌ಪುಟ್. ಒಂದಾಗಿದ್ದರಿಂದ ಕೋವಿಡ್ ನಿಯಂತ್ರಣಕ್ಕೆ ಸಹಕಾರಿಯಾಯಿತು’ ಎಂದು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು