ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿವೇಶನ: ಸರ್ಕಾರ ವೈಫಲ್ಯ ತೆರೆದಿಡಲು ಕಾಂಗ್ರೆಸ್‌ ನಾಯಕರ ಕಾರ್ಯತಂತ್ರ

Last Updated 19 ಸೆಪ್ಟೆಂಬರ್ 2020, 19:47 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ‌ವಿಧಾನಸೌಧದಲ್ಲಿ ಶನಿವಾರ ನಡೆದ ಕಾಂಗ್ರೆಸ್ಸಿನ ಹಿರಿಯ ನಾಯಕರ ಸಭೆಯಲ್ಲಿ, ಇದೇ 21ರಿಂದ ನಡೆಯಲಿರುವ ವಿಧಾನಮಂಡಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯವನ್ನು ತೆರೆದಿಟ್ಟು, ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ ಬಗ್ಗೆ ಚರ್ಚೆ ನಡೆದಿದೆ.

ಕೇವಲ ಎಂಟು ದಿನಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ 31 ಮಸೂದೆಗಳು ಮಂಡನೆ ಆಗಲಿವೆ. ಈ ಪೈಕಿ, ಭೂಸುಧಾರಣಾ ಕಾಯ್ದೆ ತಿದ್ದುಪಡಿ ಕಾಯ್ದೆ, ಎಪಿಎಂ‍ಸಿ ತಿದ್ದುಪಡಿ ಕಾಯ್ದೆಗಳ ಬಗ್ಗೆ ಸದನದಲ್ಲಿ ಆದ್ಯತೆಯ ಮೇಲೆ ಚರ್ಚೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಅಲ್ಲದೆ, ಸದನದಲ್ಲಿ ನಿಲುವಳಿ ಮಂಡಿಸುವ ವಿಷಯದ ಬಗ್ಗೆಯೂ ಹಿರಿಯ ನಾಯಕರು ವಿಚಾರ ವಿನಿಮಯ ನಡೆಸಿದ್ದಾರೆ. ಕೊರೊನಾ, ಪ್ರವಾಹ, ಡಿ.ಜೆ ಹಳ್ಳಿ ಗಲಭೆ, ಡ್ರಗ್ಸ್‌ ಸೇರಿದಂತೆ ರಾಜ್ಯದ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಯಾವ ಸಂದರ್ಭದಲ್ಲಿ ನಿಲುವಳಿ ಸೂಚನೆ ಮಂಡಿಸಬೇಕು ಎಂಬ ಬಗ್ಗೆಯೂ ಚರ್ಚೆ ನಡೆಯಿತು ಎಂದೂ ಮೂಲಗಳು ಹೇಳಿವೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಆರ್.ವಿ. ದೇಶಪಾಂಡೆ, ಕೆ.ಜೆ. ಜಾರ್ಜ್, ದಿನೇಶ್ ಗುಂಡೂರಾವ್ ಮತ್ತಿತರರು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT