ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಕೆದಾಟು: ಮುಂದಿನ ವಾರ ಸರ್ವಪಕ್ಷ ಸಭೆ

ತಮಿಳುನಾಡಿನೊಂದಿಗೆ ಮಾತುಕತೆ ಇಲ್ಲ: ಬೊಮ್ಮಾಯಿ ಸ್ಪಷ್ಟೋಕ್ತಿ
Last Updated 8 ಮಾರ್ಚ್ 2022, 18:50 IST
ಅಕ್ಷರ ಗಾತ್ರ

ಬೆಂಗಳೂರು: ‘ಮೇಕೆದಾಟು ಯೋಜನೆಯ ಬಗ್ಗೆ ತಮಿಳುನಾಡು ಸರ್ಕಾರದೊಂದಿಗೆ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ. ಯೋಜನೆಯ ಅನುಷ್ಠಾನದ ಬಗ್ಗೆ ಚರ್ಚಿಸಲು ಮುಂದಿನ ವಾರ ಸರ್ವಪಕ್ಷ ಸಭೆ ಕರೆಯಲಾಗುತ್ತದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸಭೆಯಲ್ಲಿ ಮಂಗಳವಾರ ಬಜೆಟ್‌ ಮೇಲಿನ ಚರ್ಚೆಯ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೇಕೆದಾಟು ಯೋಜನೆಯ ಬಗ್ಗೆ ಪ್ರಸ್ತಾಪಿಸಿದರು. ‘ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರ ಮಾತು
ಕತೆಯ ಮೂಲಕ ವಿವಾದ ‍ಪರಿಹರಿಸಿಕೊಳ್ಳಬೇಕು ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಸಲಹೆ ನೀಡಿದ್ದಾರೆ. ಇದರ ಬಗ್ಗೆ ಮುಖ್ಯಮಂತ್ರಿಯವರು ಪ್ರತಿಕ್ರಿಯೆಯನ್ನೇ ನೀಡಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆಗ ಮಧ್ಯಪ್ರವೇಶಿಸಿದ ಬೊಮ್ಮಾಯಿ, ‘ತಮಿಳುನಾಡಿನೊಂದಿಗೆ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದೇನೆ. ಮೇಕೆದಾಟು ಯೋಜನೆಯ ಬಗ್ಗೆ 2018ರಲ್ಲಿ ವಿಸ್ತೃತ ಯೋಜನಾ ವರದಿ ತಯಾರಿಸಲಾಗಿದ್ದು, ಅದಕ್ಕೆ ಕಾವೇರಿ ನೀರು ನಿರ್ವಹಣಾ ಮಂಡಳಿಯಿಂದ ಅನುಮತಿ ಸಿಗಬೇಕಿದೆ. ಪರಿಸರ ಅನುಮೋದನೆಯೂ ಬಾಕಿ ಇದೆ. ಇನ್ನೊಂದೆಡೆ, ಯೋಜನೆಯನ್ನು ವಿರೋಧಿಸಿ ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಈ ಎಲ್ಲ ವಿಷಯಗಳ ಬಗ್ಗೆ ರಾಜ್ಯದ ಕಾನೂನು ತಜ್ಞರ ಜತೆಗೆ ಸಮಾಲೋಚನೆ ನಡೆಸುತ್ತೇನೆ. ಸರ್ವಪಕ್ಷ ಸಭೆ ನಡೆಸಿದ ಬಳಿಕ ಕೇಂದ್ರಕ್ಕೆ ಮತ್ತೊಂದು ಪತ್ರ ಬರೆಯಲಾಗುವುದು’ ಎಂದರು.

---

‘ರಾಜಕೀಯ ಕಾರಣಕ್ಕೆ ತಮಿಳುನಾಡು ತಕರಾರು’

‘ಮೇಕೆದಾಟು ಯೋಜನೆಯ ಬಗ್ಗೆ ತಮಿಳುನಾಡು ಸರ್ಕಾರ ರಾಜಕೀಯಕ್ಕಾಗಿ, ಮತ ಬ್ಯಾಂಕ್‌ಗಾಗಿ ತಕರಾರು ಎತ್ತುತ್ತಿದೆ’ ಎಂದು ಸಿದ್ದರಾಮಯ್ಯ ಆರೋಪಿಸಿದರು.

‘ಕಾವೇರಿ ನೀರು ಹಂಚಿಕೆ ವಿವಾದ ಇತ್ಯರ್ಥ ಆಗಿದೆ. ತಮಿಳುನಾಡಿಗೆ ಪ್ರತಿವರ್ಷ 177 ಟಿಎಂಸಿ ಅಡಿ ನೀರು ಬಿಡಬೇಕಿದೆ. ಅದಕ್ಕಿಂತಲೂ ಹೆಚ್ಚು ನೀರು ಬಿಡುತ್ತಿದ್ದೇವೆ. ನಮ್ಮ ಪಾಲಿನ ನೀರನ್ನು ಮೇಕೆದಾಟು ಯೋಜನೆಗೆ ಬಳಸಿಕೊಳ್ಳುತ್ತಿದ್ದೇವೆ’ ಎಂದರು.

ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ‘ಹಂಚಿಕೆಯಾಗಿದ್ದಕ್ಕಿಂತ ಹೆಚ್ಚು ನೀರು ಬಳಸಬಾರದು ಎಂಬುದು ತಮಿಳುನಾಡಿನ ಆಕ್ಷೇಪ. ಕೋಲಾರ, ಚಿಕ್ಕಬಳ್ಳಾಪುರಕ್ಕೆ ಸಂಸ್ಕರಿಸಿದ ನೀರನ್ನು ಪೂರೈಕೆ ಮಾಡುವ ಯೋಜನೆಯೂ ತಮಿಳುನಾಡು ಸರ್ಕಾರ ತಕರಾರು ಎತ್ತಿದೆ’ ಎಂದರು.

ಕಾಂಗ್ರೆಸ್‌ನ ಎಚ್‌.ಕೆ.ಪಾಟೀಲ, ‘ಕಾವೇರಿ ನೀರಿನ ವಿವಾದ ಇತ್ಯರ್ಥಗೊಂಡಿದೆ. ಈ ವಿಚಾರದಲ್ಲಿ ಸರ್ಕಾರ ದ್ವಂದ್ವ ನಿಲುವು ತಾಳಬಾರದು’ ಎಂದು ಕಿವಿಮಾತು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT