ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅ.21 ರಿಂದ ಮಧ್ಯಾಹ್ನದ ಬಿಸಿಯೂಟ

ನ. 1ರಿಂದ 1ರಿಂದ 5ನೇ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಪ್ರಸ್ತಾವನೆ
Last Updated 17 ಅಕ್ಟೋಬರ್ 2021, 18:36 IST
ಅಕ್ಷರ ಗಾತ್ರ

ಬೆಂಗಳೂರು: ನ. 1 ರಿಂದ ಪ್ರಾಥಮಿಕ ಹಂತದಿಂದಲೇ (1ರಿಂದ 5ರವರೆಗಿನ ತರಗತಿ) ಶಾಲೆಗಳನ್ನು ತೆರೆಯಲು ರಾಜ್ಯ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿರುವಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ, ಇದೇ 21ರಿಂದ ಮಧ್ಯಾಹ್ನದ ಬಿಸಿಯೂಟ ವಿತರಿಸಲು ನಿರ್ಧರಿಸಿದೆ.

2021-22ನೇ ಸಾಲಿನಲ್ಲಿ ‘ಪಿಎಂ– ಪೋಷಣ್‌ ಶಕ್ತಿ ನಿರ್ಮಾಣ್‌’ ಮಧ್ಯಾಹ್ನದ ಉಪಾಹಾರ ಯೋಜನೆಯಡಿ ಶಾಲೆಗಳಲ್ಲಿರುವ ಅಡುಗೆ ಕೇಂದ್ರಗಳಲ್ಲಿ ಬಿಸಿಯೂಟ ಸಿದ್ಧಪಡಿಸುವ ಹಾಗೂ ಸ್ವಯಂಸೇವಾ ಸಂಸ್ಥೆಗಳ ಮೂಲಕ ಬಿಸಿಯೂಟ ಸಿದ್ಧಪಡಿಸಿ ವಿದ್ಯಾರ್ಥಿಗಳಿಗೆ ವಿತರಿಸುವ ವೇಳೆ ಅನುಸರಿಸಬೇಕಾದ ಮಾರ್ಗಸೂಚಿಯನ್ನು ಇಲಾಖೆ ಹೊರಡಿಸಿದೆ.

ಶಾಲೆಯ ಮುಖ್ಯಸ್ಥರು, ಅಡುಗೆ ಸಿಬ್ಬಂದಿ, ಎಸ್‌ಡಿಎಂಸಿ ಸದಸ್ಯರು ಮತ್ತು ತಾಯಂದಿರ ಸಮಿತಿಯ ಸದಸ್ಯರು, ಅಕ್ಷರ ದಾಸೋಹದ ಮೇಲ್ವಿಚಾರಣಾ ಅಧಿಕಾರಿಗಳು ಮತ್ತು ಸಿದ್ಧಪಡಿಸಿದ ಆಹಾರ ವಿತರಿಸುವ ಸ್ವಯಂಸೇವಾ ಸಂಸ್ಥೆಗಳ ಮುಖ್ಯಸ್ಥರು ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಅಡುಗೆ ಕೋಣೆ, ಪಾತ್ರೆ ಪರಿಕರಗಳ ಸ್ವಚ್ಛತೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಅಡುಗೆ ಮಾಡಲು ಅಗತ್ಯವಾದ ಸಿದ್ಧತೆ, ಕೋವಿಡ್‌ ಸೋಂಕು ಹರಡದಂತೆ ವಹಿಸಬೇಕಾದ ಮುನ್ನೆಚ್ಚರಿಕೆಗಳ ಕುರಿತು ಮಾರ್ಗಸೂಚಿಯಲ್ಲಿ ವಿವರವಾಗಿ ತಿಳಿಸಲಾಗಿದೆ.

ಅಡುಗೆ ಸಿಬ್ಬಂದಿ ಕಡ್ಡಾಯವಾಗಿ ಎರಡು ಡೋಸ್‌ ಕೋವಿಡ್‌ ಲಸಿಕೆ ಹಾಕಿಸಿಕೊಂಡಿರಬೇಕು, ಬಿಸಿಯೂಟಕ್ಕೆ ಅಗತ್ಯವಾದ ಆಹಾರ ಪದಾರ್ಥಗಳನ್ನು ಶಾಲೆಯಲ್ಲಿಯೇ ದಾಸ್ತಾನು ಇಟ್ಟುಕೊಳ್ಳಬೇಕು, ಬಿಸಿಯೂಟ ಸಿದ್ಧಪಡಿಸಿ ವಿತರಿಸುವ ಸ್ವಯಂಸೇವಾ ಸಂಸ್ಥೆಗಳು ಕೂಡಾ ಅಡುಗೆ ಸಿದ್ಧತೆ ಮತ್ತು ವಿತರಣೆಯ ಸಂದರ್ಭದಲ್ಲಿ ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್‌ಒಪಿ) ಕಡ್ಡಾಯವಾಗಿ ಪಾಲಿಸಬೇಕು. ಇಲಾಖೆ ಸೂಚಿಸಿದಂತೆ ಆಹಾರ ಸೂಚಿತ ಪಟ್ಟಿಯನ್ನು (ವಾರದ ಮೆನು) ಪಾಲಿಸಬೇಕು ಎಂದೂ ಸ್ಪಷ್ಟವಾಗಿ ಸೂಚಿಸಲಾಗಿದೆ.

ಅಡುಗೆ ಸಿಬ್ಬಂದಿ ಶಾಲೆಗೆ ಪ್ರತಿದಿನ ಬೆಳಿಗ್ಗೆ 9 ಗಂಟೆಗೆ ಹಾಜರಿದ್ದು, ಸ್ವಯಂಸೇವಾ ಸಂಸ್ಥೆಗಳು ಪೂರೈಸುವ ಸಿದ್ಧಪಡಿಸಿದ ಬಿಸಿಯೂಟದ ಬಾಕ್ಸ್‌ ಸ್ವೀಕರಿಸಲು ಸಿದ್ಧರಿರಬೇಕು. ಯಾವುದೇ ವಿದ್ಯಾರ್ಥಿಗೆ ಬಿಸಿಯೂಟದಲ್ಲಿ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದೂ ಮಾರ್ಗಸೂಚಿಯಲ್ಲಿ
ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT