ಸೋಮವಾರ, ಮಾರ್ಚ್ 1, 2021
28 °C

ಗಣಿಗಾರಿಕೆ ಸಕ್ರಮ ಮಾಡಿಕೊಳ್ಳಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ಗಣಿಗಾರಿಕೆಯನ್ನು ನಡೆಸುವುದು ಅನಿವಾರ್ಯ. ಅಕ್ರಮವಾಗಿ ನಡೆಸುತ್ತಿದ್ದರೆ ಅರ್ಜಿ ಸಲ್ಲಿಸಿ ಸಕ್ರಮ ಮಾಡಿಸಿಕೊಳ್ಳಬೇಕು. ಅಕ್ರಮವಾಗಿ ಗಣಿಗಾರಿಕೆ ನಡೆಸಿದರೆ ಎಲ್ಲರಿಗೂ ಕೆಟ್ಟ ಹೆಸರು ಬರುತ್ತದೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

‘ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ರಸ್ತೆಗಳು, ರಾಷ್ಟ್ರೀಯ ಹೆದ್ದಾರಿಗಳು ಹಾಗೂ ಇತರ ಕಾಮಗಾರಿಗಳು ನಡೆಯುತ್ತಿವೆ. ಇದಕ್ಕೆ ಪೂರಕವಾಗಿ ಗಣಿಗಾರಿಕೆ ನಡೆಯಲೇಬೇಕು’ ಎಂದು ಅವರು ಶನಿವಾರ ಇಲ್ಲಿ ಪ್ರತಿಪಾದಿಸಿದರು.

‘ಅಕ್ರಮ ಗಣಿಗಾರಿಕೆ ನಡೆದರೆ ದುಷ್ಪರಿಣಾಮ ಎದುರಿಸಬೇಕಾಗುತ್ತದೆ. ಅದಕ್ಕೆ ಅವಕಾಶ ಕೊಡಬಾರದು. ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಬೇಕು’ ಎಂದು ಸೂಚನೆ ನೀಡಿದರು.

‘ಶಿವಮೊಗ್ಗ ಬಳಿ ಡೈನಮೈಟ್ಸ್ಫೋಟದಿಂದ ಮೃತರಾದವರ ಕುಟುಂಬದವರಿಗೆ ತಲಾ ₹ 5 ಲಕ್ಷ ಪರಿಹಾರ ಘೋಷಿಸಲಾಗಿದೆ’ ಎಂದು ಅವರು ಹೇಳಿದರು.

‘ತನಿಖೆಗೆ ಆದೇಶ ನೀಡಿದ್ದು, ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ. ಸುತ್ತಮುತ್ತಲಿನ ಮನೆಗಳಿಗೂ ಹಾನಿಯಾಗಿದ್ದು, ಇವರಿಗೂ ನ್ಯಾಯ ಒದಗಿಸಲು ಪ್ರಯತ್ನಿಸುತ್ತೇನೆ’ ಎಂದರು.

ಈ ವಿಷಯ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ಅಕ್ರಮ ಗಣಿಗಾರಿಕೆಗೆ ಯಾವುದೇ ಕಾರಣಕ್ಕೂ ಇನ್ನು ಮುಂದೆ ಅವಕಾಶ ಕೊಡುವುದಿಲ್ಲ. ಶಿವಮೊಗ್ಗದ ಹುಣಸೋಡಿ ಬಳಿ ಡೈನಮೈಟ್‌ ಸ್ಫೋಟ ಪ್ರಕರಣದ ಬಗ್ಗೆ ಸಮಗ್ರ ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಕ್ರಷರ್‌ಗಳ ಸ್ಥಳಾಂತರದ ಸುಳಿವು ನೀಡಿದ ಸಿಎಂ: ಶಿವಮೊಗ್ಗ ವರದಿ: ಹುಣಸೋಡು, ಗೆಜ್ಜೇನಹಳ್ಳಿ, ಕಲ್ಲು ಗಂಗೂರು ಭಾಗದ ಎಲ್ಲ ಕ್ರಷರ್‌ಗಳನ್ನೂ ಸುರಕ್ಷಾ ವಲಯಕ್ಕೆ ಸ್ಥಳಾಂತರಿಸುವ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಹುಣಸೋಡು ಸ್ಫೋಟದ ಸ್ಥಳಕ್ಕೆ ಶನಿವಾರ ಭೇಟಿ ನೀಡಿ, ಪರಿಶೀಲಿಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಗಣಿಗಾರಿಕೆ ಪ್ರದೇಶ ಪರಿಸರ ಸೂಕ್ಷ್ಮವಲಯದ ವ್ಯಾಪ್ತಿಗೆ ಸೇರಿರುವ ಕಾರಣ ಸ್ಥಳಾಂತರಿಸಬೇಕು ಎನ್ನುವ ಬೇಡಿಕೆ ಇದೆ. ಈಗ ಕಾಲ ಕೂಡಿ ಬಂದಿದೆ ಎಂದು ಸ್ಥಳಾಂತರವನ್ನು ಖಚಿತಪಡಿಸಿದರು.

‘ಅನಧಿಕೃತ ಕ್ವಾರಿಗಳನ್ನು ಮುಚ್ಚಿಸಿ, ಅಧಿಕೃತ ಕ್ವಾರಿಗಳ ನಿರ್ವಹಣೆಗೆ ಅವಕಾಶ ನೀಡಲಾಗುವುದು. ಈ ಪ್ರದೇಶದ ಎಲ್ಲ ಕ್ರಷರ್‌ಗಳೂ ಪರವಾನಗಿ ಪಡೆದಿವೆ. ಆದರೆ, ಕ್ವಾರಿಗಳಲ್ಲಿ ಸ್ಫೋಟಕ ಬಳಸಲು ಅನುಮತಿ ನೀಡಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತನಿಖೆ ವರದಿ ಬಂದ ನಂತರ ಭಾಗಿಯಾದವರ ವಿರುದ್ಧ ಕ್ರಮಕೈಗೊಳ್ಳಲಾಗುವುದು’ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು