ಬುಧವಾರ, ಆಗಸ್ಟ್ 10, 2022
20 °C

ಡಿಸೆಂಬರ್‌ವರೆಗೆ ಜಿ.ಪಂ., ತಾ.ಪಂ, ಚುನಾವಣೆ ಇಲ್ಲ: ಸಚಿವ ಈಶ್ವರಪ್ಪ ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ‘ಕೊರೊನಾ ಎರಡನೇ ಅಲೆ ಮುಕ್ತಾಯದ ಹಂತದಲ್ಲಿದೆ. ಆದರೆ ಮುಗಿದಿಲ್ಲ. ಜತೆಗೆ ಮೂರನೇ ಅಲೆಯ ಭೀತಿ ಕೂಡ ಇದೆ. ಹಾಗಾಗಿ ಡಿಸೆಂಬರ್‌ ವರೆಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಸಂಜೆ ನಾಲ್ಕು ಗಂಟೆಗೆ ರಾಜ್ಯ ಸಚಿವ ಸಂಪುಟದ ಸಭೆ ನಡೆಯಲಿದೆ. ಅಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

‘ಟೆಂಡರ್‌ ಆರೋಪ ಮುಗಿದು ಹೋಗಿರೋದು. ಇಲಾಖೆಯ ಕಾರ್ಯದರ್ಶಿಗಳು, ಮುಖ್ಯಮಂತ್ರಿ ಸ್ಪಷ್ಟನೆ ನೀಡಿಯಾಗಿದೆ. ಮತ್ತೆ ಕೇಳಬೇಡಿ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಬಿಜೆಪಿ ಒಂದು ಕುಟುಂಬ ಇದ್ದಂತೆ. ಒಂದು ರಾಜಕೀಯ ಪಕ್ಷದಲ್ಲಿ ಸ್ವಾಭಾವಿಕವಾಗಿ ಸಣ್ಣಪುಟ್ಟ ಸಮಸ್ಯೆಗಳು ಇದ್ದೇ ಇರುತ್ತವೆ. ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಇಲ್ಲಿ ಬಂದು ನಾಲ್ಕು ಗೋಡೆಗಳ ಮಧ್ಯೆ ಕುಳಿತು ಶಾಸಕರಲ್ಲಿ ಮಾತನಾಡಿ ಎಲ್ಲ ಸಮಸ್ಯೆಗಳನ್ನು ಪರಿಹರಿಸಿ ಹೋಗಿದ್ದಾರೆ’ ಎಂದರು.

‘ಈ ರೀತಿ ನಾಲ್ಕು ಗೋಡೆಗಳ ಮಧ್ಯೆ ಕುಳಿತು ಮಾತನಾಡುವ ಅವಕಾಶ ಯಾವ ಪಕ್ಷದಲ್ಲಿ ಇದೆ? ಎಲ್ಲ ಶಾಸಕರು ಅಭಿಪ್ರಾಯ ತಿಳಿಸಿದ್ದಾರೆ. ಕೇವಲ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ನಡೆದಿದ್ದಲ್ಲ. ಕೊರೊನಾ ನಿಯಂತ್ರಣ ಬಗ್ಗೆ ಚರ್ಚೆ ಮಾಡಿದ್ದೇವೆ. ಪಕ್ಷವನ್ನು ಹೇಗೆ ಬಲಪಡಿಸಬೇಕು ಎಂಬ ಚರ್ಚೆ ಮಾಡಿದ್ದೇವೆ. ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆದಿದೆ. ಪರಿಸರದ ಬಗ್ಗೆ ಚರ್ಚೆಯಾಗಿದೆ. ಪ್ಲಾಸ್ಟಿಕ್‌ ಮುಕ್ತ ಮಾಡುವ ಬಗ್ಗೆ ಚರ್ಚೆಯಾಗಿದೆ’ ಎಂದು ಹೇಳಿದರು.

‘ಎಲ್ಲ ಬಡವರಿಗೆ ಉಚಿತ ಪಡಿತರ, ಎಲ್ಲರಿಗೂ ಉಚಿತ ಲಸಿಕೆ ನೀಡುವ ಪ್ರಧಾನಿ ಮೋದಿ ಅವರ ಹೆಜ್ಜೆಯನ್ನು ಸ್ವಾಗತಿಸಿದ್ದೇವೆ. ಅದೇ ರೀತಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಕೊರೊನಾಕ್ಕೆ ಬಲಿಯಾದವರಿಗೆ ₹1 ಲಕ್ಷ ಘೋಷಣೆ ಮಾಡಿರುವುದು ದೇಶದಲ್ಲಿ ಮಾದರಿಯಾದುದು. ಅದಕ್ಕೂ ಅಭಿನಂದನೆ ಸಲ್ಲಿಸಿದ್ದೇವೆ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು