ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಸಿಇಟಿ ಅಂಕ ಮಾತ್ರ ಪರಿಗಣಿಸಿ: ಸುರೇಶ್ ಕುಮಾರ್

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ್‌ಗೆ ಸುರೇಶ್ ಕುಮಾರ್ ಮನವಿ
Last Updated 5 ಜೂನ್ 2021, 10:54 IST
ಅಕ್ಷರ ಗಾತ್ರ

ಬೆಂಗಳೂರು: ‘ಪ್ರಥಮ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ಅಂಕಗಳನ್ನು ಮಾನದಂಡವಾಗಿ ಪರಿಗಣಿಸಿ ಈ‌ ಬಾರಿ ದ್ವಿತೀಯ ಪಿಯುಸಿ ಫಲಿತಾಂಶ ಘೋಷಿಸಲಾಗುತ್ತಿದೆ. ಹೀಗಾಗಿ ವೃತ್ತಿಪರ‌ ಕೋರ್ಸಿಗೆ ಪ್ರವೇಶ ನೀಡಲು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಅಂಕ ಮಾತ್ರ ಪರಿಗಣಿಸಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್ ಅವರು ಉನ್ನತ ಶಿಕ್ಷಣ‌ ಸಚಿವ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ್ ಅವರಿಗೆ ಪತ್ರ ಬರೆದಿದ್ದಾರೆ.

‘ವೃತ್ತಿಪರ‌ ಕೋರ್ಸಿಗೆ ಪ್ರವೇಶ ನೀಡುವ ಸಂದರ್ಭದಲ್ಲಿ ಪಿಯುಸಿ ಫಲಿತಾಂಶ ಪರಿಗಣಿಸಿ, ವೇಟೇಜ್ ನೀಡುವ ಪ್ರಕ್ರಿಯೆಯನ್ನು ಕೈಬಿಟ್ಟು, ಸಿಇಟಿ ಅಂಕ ಮಾತ್ರ ರ‍್ಯಾಂಕಿಂಗ್‌ಗೆ ಪರಿಗಣಿಸಬೇಕು’ ಎಂದು ಮನವಿ ಮಾಡಿದ್ದಾರೆ.

‘ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದುಪಡಿಸುವ ತೀರ್ಮಾನವನ್ನು ಜೂನ್‌ 4ರಂದು ತೆಗೆದುಕೊಳ್ಳಲಾಗಿದೆ. ಕೋವಿಡ್ ತೀವ್ರತೆ ಮತ್ತು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ರೀತಿಯ ನಿರ್ಧಾರ ಅವಶ್ಯಕವಾಗಿತ್ತು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ತೇರ್ಗಡೆ‌ ಮಾಡುವ ನಿರ್ಧಾರದ ಹಿಂದೆ ನಿರ್ದಿಷ್ಟವಾದ ತರ್ಕವನ್ನು ಅನುಸರಿಸಲಾಗಿದೆ. ಪ್ರಥಮ ಪಿಯುಸಿ ಅಂಕಗಳಲ್ಲದೆ, ಎಸ್ಸೆಸ್ಸೆಲ್ಸಿ ಫಲಿತಾಂಶವನ್ನೂ ಪರಿಗಣಿಸಿ ಅದಕ್ಕೆ ಸಮನಾದ ಸೂಕ್ತ ಮೌಲ್ಯ ಸೇರ್ಪಡಿಸಿ ಗ್ರೇಡಿಂಗ್ ಫಲಿತಾಂಶ ನೀಡಲು ನಿರ್ಧರಿಸಲಾಗಿದೆ. ವಿದ್ಯಾರ್ಥಿಗೆ ತನ್ನ ಫಲಿತಾಂಶದ ಬಗ್ಗೆ ಅತೃಪ್ತಿ ಇದ್ದರೆ ಸೂಕ್ತ ಸಮಯದಲ್ಲಿ ನಡೆಸಲಾಗುವ ಪರೀಕ್ಷೆಗಳನ್ನು ಬರೆಯಬಹುದು’ ಎಂದು ಪತ್ರದಲ್ಲಿ ಸುರೇಶ್‌ ಕುಮಾರ್‌ ಉಲ್ಲೇಖಿಸಿದ್ದಾರೆ.

‘ಸಾಮಾನ್ಯವಾಗಿ ದ್ವಿತೀಯ ಪಿಯುಸಿ ಅಂಕ ಮತ್ತು ಸಿಇಟಿ ಪರಿಗಣಿಸಿ ಸೂಕ್ತ ವೇಟೇಜ್ ಕಲ್ಪಿಸುವ ಮೂಲಕ ಫಲಿತಾಂಶ ಘೋಷಿಸಲಾಗುತ್ತದೆ. ಈ ಬಾರಿಯ ಗ್ರೇಡಿಂಗ್ ಫಲಿತಾಂಶ ವಿದ್ಯಾರ್ಥಿಗಳ ಪ್ರತಿಭೆಯನ್ನು ಖಚಿತವಾಗಿ ವ್ಯಕ್ತ‌ಪಡಿಸಿದರೂ ಅವರಿಗೆ ಅದನ್ನು ನಿರಾಕರಿಸಿ ಇನ್ನೊಮ್ಮೆ ಪರೀಕ್ಷೆ ಬರೆಯುವ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ, ಈ ಬಾರಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಸಿಇಟಿ ಪರೀಕ್ಷೆಗೆ ಗಣನೆಗೆ ತೆಗೆದುಕೊಳ್ಳುವಾಗ, ಈ ಫಲಿತಾಂಶವನ್ನು ಪ್ರಶ್ನಿಸಿ ಇನ್ನೊಮ್ಮೆ ಪರೀಕ್ಷೆ ಬರೆಯಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಅನನುಕೂಲ ಆಗಬಹುದು. ಹೀಗಾಗಿ ಈ ಬಾರಿ ತಮ್ಮ ಇಲಾಖೆಯು ನಡೆಸಲು‌ ಉದ್ದೇಶಿಸಿರುವ ಸಿಇಟಿ ವೇಟೇಜ್ ನೀಡುವ ಪ್ರಕ್ರಿಯೆ ಕೈಬಿಟ್ಟು, ಸಿಇಟಿ ಪರೀಕ್ಷೆಗಳ ಅಂಕ ಮಾತ್ರ ರಾಂಕಿಂಗ್‌ಗೆ ಪರಿಗಣಿಸಬೇಕು’ ಎಂದೂ ಸುರೇಶ್‌ ಕುಮಾರ್‌ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT