ಭಾನುವಾರ, ನವೆಂಬರ್ 28, 2021
19 °C

ಹಿಂದುಳಿದ, ದಲಿತ ಮಠಗಳಿಗೆ ನೆರವು: ಸಚಿವ ಈಶ್ವರಪ್ಪ, ಕೋಟ ಭೇಟಿಯಾದ ಮಠಾಧೀಶರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಹಿಂದುಳಿದ ವರ್ಗಗಳು ಮತ್ತು ದಲಿತ ಸಮುದಾಯದ ಮಠಗಳಿಗೆ ಅಗತ್ಯವಿರುವ ನೆರವನ್ನು ರಾಜ್ಯ ಸರ್ಕಾರದಿಂದ ಒದಗಿಸಲಾಗುವುದು ಎಂದು ಸಚಿವರಾದ ಕೆ.ಎಸ್‌. ಈಶ್ವರಪ್ಪ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಮಠಾಧೀಶರಿಗೆ ಭರವಸೆ ನೀಡಿದರು.

ರಾಜ್ಯ ಹಿಂದುಳಿದ ವರ್ಗಗಳು ಮತ್ತು ದಲಿತ ಮಠಾಧಿಪತಿಗಳ ಒಕ್ಕೂಟದ ನೇತೃತ್ವದಲ್ಲಿ ಹಲವು ಮಠಾಧೀಶರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ನಿವಾಸಕ್ಕೆ ಶನಿವಾರ ಭೇಟಿ ನೀಡಿ ಚರ್ಚಿಸಿದರು. ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೂಡ ಸಭೆಯಲ್ಲಿದ್ದರು. ಒಕ್ಕೂಟದ ಅಧ್ಯಕ್ಷರಾಗಿರುವ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ನಿಯೋಗದ ನೇತೃತ್ವ ವಹಿಸಿದ್ದರು.

ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ನಿರಂಜನನಾಂದಪುರಿ ಸ್ವಾಮೀಜಿ, ‘ಹಿಂದುಳಿದ ವರ್ಗಗಳು ಮತ್ತು ದಲಿತ ಸಮುದಾಯಗಳ ಹಲವು ಮಠಗಳಿಗೆ ಸರಿಯಾದ ಸೂರಿಲ್ಲ. ಈ ಕುರಿತು ಚರ್ಚಿಸಲಾಗಿದೆ. ಸಂಕಷ್ಟದಲ್ಲಿರುವ ಮಠಗಳಿಗೆ ಅಗತ್ಯ ಸೌಲಭ್ಯ ಒದಗಿಸುವಂತೆ ಸಚಿವರನ್ನು ಒತ್ತಾಯಿಸುವುದಕ್ಕಾಗಿ ಎಲ್ಲರೂ ಒಟ್ಟಾಗಿ ಬಂದಿದ್ದೇವೆ’ ಎಂದರು.

ನೆರವಿನ ಭರವಸೆ: ಸಚಿವ ಕೆ.ಎಸ್‌. ಈಶ್ವರಪ್ಪ ಮಾತನಾಡಿ, ‘ಸ್ವಾಮೀಜಿಗಳು ತಮ್ಮ ಸಮಸ್ಯೆಗಳನ್ನು ನಮ್ಮ ಮುಂದಿಟ್ಟಿದ್ದಾರೆ. ಅಗತ್ಯವಿರುವ ನೆರವನ್ನು ಒದಗಿಸುವ ಭರವಸೆ ನೀಡಿದ್ದೇವೆ. ಈ ಉದ್ದೇಶಕ್ಕಾಗಿ ಮಠಾಧೀಶರ ನಿಯೋಗವನ್ನು ಕರೆದೊಯ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸುವ ಭರವಸೆಯನ್ನೂ ನೀಡಿದ್ದೇವೆ’ ಎಂದರು.

ಸರ್ಕಾರ ಮಾಡಬೇಕಾದ ಕೆಲಸಗಳನ್ನು ಮಠಾಧೀಶರು ನಿಸ್ವಾರ್ಥವಾಗಿ ಮಾಡುತ್ತಿದ್ದಾರೆ. ಅವರಿಗೆ ಅಗತ್ಯ ನೆರವು ಒದಗಿಸುವುದು ಸರ್ಕಾರದ ಕರ್ತವ್ಯ. ಹಿಂದೆಯೂ ಸರ್ಕಾರ ನೆರವು ನೀಡಿತ್ತು. ಮುಂದೆಯೂ ಮಠಗಳಿಗೆ ಅಗತ್ಯವಿರುವ ನೆರವು ನೀಡಲಾಗುವುದು ಎಂದು ಹೇಳಿದರು.

‘ತಕ್ಷಣದಲ್ಲಿ ಆಯಾ ಇಲಾಖೆಗಳಿಂದ ಮಾಡಬಹುದಾದ ಕೆಲಸಗಳನ್ನು ಮಾಡಿಕೊಡಲಾಗುವುದು. ಮಠಗಳು ಮತ್ತು ಮಠಗಳ ಅಧೀನದ ಶಿಕ್ಷಣ ಸಂಸ್ಥೆಗಳಿಗೆ ಮೂಲಸೌಕರ್ಯ ಕಲ್ಪಿಸಲು ಅನುದಾನ ಒದಗಿಸಲಾಗುವುದು. ಪ್ರಮುಖ ಬೇಡಿಕೆಗಳ ಕುರಿತು ಮುಖ್ಯಮಂತ್ರಿಯವರ ಜತೆ ಚರ್ಚಿಸಲಾಗುವುದು’ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು