ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್‌: ಬಾಬುರಾವ್‌ ಚಿಂಚನಸೂರು ಬಿಜೆಪಿ ಅಭ್ಯರ್ಥಿ

Last Updated 30 ಜುಲೈ 2022, 19:33 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ಆಗಸ್ಟ್‌ 11ರಂದು ನಡೆಯುತ್ತಿರುವ ಚುನಾವಣೆಗೆ ನಿಜ ಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್‌ ಚಿಂಚನಸೂರು ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ.

ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಈ ನಿರ್ಧಾರ ಕೈಗೊಂಡಿದ್ದು, ಚಿಂಚನಸೂರು ಅವರಿಗೆ ಟಿಕೆಟ್‌ ನೀಡುವ ತೀರ್ಮಾನವನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಶನಿವಾರ ಪ್ರಕಟಿಸಿದ್ದಾರೆ.

ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷರಾಗಿರುವ ಸಿ.ಎಂ. ಇಬ್ರಾಹಿಂ ಈ ಹಿಂದೆ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ ಸದಸ್ಯರಾಗಿದ್ದರು. ಜೆಡಿಎಸ್‌ ಸೇರುವುದಕ್ಕಾಗಿ ಅವರು ಮಾರ್ಚ್‌ 31ರಂದು ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸದಸ್ಯತ್ವದ 20 ತಿಂಗಳ ಅವಧಿಗಾಗಿ ಚುನಾವಣೆ ನಡೆಯುತ್ತಿದೆ.

ವಿಧಾನ ಪರಿಷತ್‌ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ, ಬ್ರಾಹ್ಮಣ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ, ಪಕ್ಷದ ಮುಖಂಡ ಲಿಂಗರಾಜ ಪಾಟೀಲ ಸೇರಿದಂತೆ ಹಲವರು ಈ ಚುನಾವಣೆಯ ಟಿಕೆಟ್‌ ಆಕಾಂಕ್ಷಿಗಳಾಗಿದ್ದರು. ಆದರೆ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಿ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟು ಚಿಂಚನಸೂರು ಅವರಿಗೆ ಟಿಕೆಟ್‌ ನೀಡಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ದೀರ್ಘಕಾಲ ಕಾಂಗ್ರೆಸ್‌ ಪಕ್ಷದಲ್ಲಿದ್ದ ಚಿಂಚನಸೂರು, 5 ಬಾರಿ ವಿಧಾನಸಭಾ ಸದಸ್ಯರಾಗಿದ್ದರು. ಎಸ್‌.ಎಂ. ಕೃಷ್ಣ ಮತ್ತು ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದರು. 2018ರಲ್ಲಿ ಬಿಜೆಪಿ ಸೇರಿ, ಆ ಪಕ್ಷದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು. ಬಳಿಕ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರನ್ನಾಗಿ ಅವರನ್ನು ನೇಮಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT