ಗುರುವಾರ , ಡಿಸೆಂಬರ್ 3, 2020
23 °C

ವಿಧಾನ ಪರಿಷತ್‌: ಘೋಷಿತ 4ರಲ್ಲಿ ಮೂರು ಕ್ಷೇತ್ರ ಬಿಜೆಪಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಧಾನ ಪರಿಷತ್ತಿಗೆ ಆಯ್ಕೆಯಾದವರು

ಬೆಂಗಳೂರು: ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳಿಂದ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ನಡೆದ  ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ. ಒಂದು ಕ್ಷೇತ್ರದ ಮತ ಎಣಿಕೆ ಪ್ರಗತಿಯಲ್ಲಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಪುಟ್ಟಣ್ಣ ಮತ್ತು ಪಶ್ಚಿಮ ಪದವೀಧರರ ಕ್ಷೇತ್ರದಿಂದ ಪ್ರೊ.ಎಸ್.ವಿ. ಸಂಕನೂರ ಅವರು ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಗೆಲುವಿನ ದಡ ಸೇರಿದರು. ಆದರೆ, ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶಶೀಲ್‌ ಜಿ. ನಮೋಶಿ ಎರಡನೇ ಪ್ರಾಶಸ್ತ್ಯದ ಮತ ಎಣಿಕೆ ಬಳಿಕ ನಿಗದಿತ ಕೋಟಾದ ಮತಗಳನ್ನು ಪಡೆಯವಲ್ಲಿ ಸಫಲರಾದರು.

ಪುಟ್ಟಣ್ಣ ಅವರು ಈ ಹಿಂದೆ ಹಾಲಿ ಕ್ಷೇತ್ರದಿಂದ ಮೂರು ಬಾರಿ ಜೆಡಿಎಸ್‌ನಿಂದ ಆಯ್ಕೆಯಾಗಿದ್ದರು. ಆದರೆ, ಈ ಬಾರಿ ಪಕ್ಷಾಂತರಗೊಂಡು ಬಿಜೆಪಿಯಿಂದ ಕಣಕ್ಕಿಳಿದಿದ್ದು, ನಾಲ್ಕನೇ ಬಾರಿ ಜಯಭೇರಿ ಬಾರಿಸಿದ್ದಾರೆ. ಇಲ್ಲಿ ಜೆಡಿಎಸ್‌ ಅಭ್ಯರ್ಥಿ ಎ.ಪಿ. ರಂಗನಾಥ ಪ್ರಬಲ ಸ್ಪರ್ಧೆ ಒಡ್ಡಬಹುದೆಂಬ ನಿರೀಕ್ಷೆ ಹುಸಿಯಾಗಿದೆ.

ಪಶ್ಚಿಮ ಪದವೀಧರರ ಕ್ಷೇತ್ರದ ಹಾಲಿ ಸದಸ್ಯರಾಗಿರುವ ಸಂಕನೂರ, ಅವರಿಗೆ ಕಾಂಗ್ರೆಸ್‌ನ ಆರ್.ಎಂ. ಕುಬೇರಪ್ಪ ಮತ್ತು ಜೆಡಿಎಸ್‌ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಸ್ಪರ್ಧೆ ಒಡ್ಡಿದರೂ ಗೆಲುವು ಸಾಧ್ಯವಾಗಲಿಲ್ಲ.

ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಪುನರಾಯ್ಕೆ ಬಯಸಿದ್ದ ಕಾಂಗ್ರೆಸ್‌ನ ಶರಣಪ್ಪ ಮಟ್ಟೂರ ಅವರನ್ನು ಎರಡನೇ ಸ್ಥಾನಕ್ಕೆ ತಳ್ಳಿ ನಮೋಶಿ ಆಯ್ಕೆ ಆಗಿದ್ದಾರೆ. ಇಲ್ಲಿಜೆಡಿಎಸ್‌ ಅಭ್ಯರ್ಥಿ ತಿಮ್ಮಯ್ಯ ಪುರ್ಲೆ ಪರಾಭವಗೊಂಡರೂ ಹೆಚ್ಚು ಮತಗಳನ್ನು ಬುಟ್ಟಿಗೆ ಹಾಕಿಕೊಂಡಿದ್ದಾರೆ. ಆಗ್ನೇಯ ಪದವೀಧರ ಕ್ಷೇತ್ರ ಮತ ಎಣಿಕೆ ಮಂಗಳವಾರ ಸಂಜೆ ಆರಂಭಗೊಂಡಿದ್ದು, ಬುಧವಾರ ಮಧ್ಯಾಹ್ನ ಪೂರ್ಣಗೊಳ್ಳಬಹುದು ಎಂದು ಚುನಾವಣಾಧಿಕಾರಿಗಳು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು