ಭಾನುವಾರ, ಮಾರ್ಚ್ 7, 2021
32 °C

ಸಮ್ಮಿಶ್ರ ಸರ್ಕಾರ ಪತನಕ್ಕೆ ₹ 9 ಕೋಟಿ: ಕಾಂಗ್ರೆಸ್‌ನಿಂದ ತನಿಖೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಮ್ಮಿಶ್ರ ಸರ್ಕಾರ ಉರುಳಿಸಲು ಸಚಿವ ಸಿ.ಪಿ. ಯೋಗೇಶ್ವರ್‌ ತಮ್ಮ ಮನೆ ಅಡವಿಟ್ಟು ಸಾಲ ಪಡೆದು ₹ 9 ಕೋಟಿ ಬಳಸಿದ್ದರು ಎಂಬ ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿಕೆ ಕುರಿತು ಉನ್ನತಮಟ್ಟದ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿದೆ.

ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಇತರ ಮುಖಂಡರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ, ‘ಸಮ್ಮಿಶ್ರ ಸರ್ಕಾರ ಕೆಡವಲು ಸಂಚು ಮಾಡಿರುವುದು, ಭ್ರಷ್ಟಾಚಾರದ ಹಣ ಬಳಸಿರುವುದು ಮತ್ತು ಆಪರೇಷನ್‌ ಕಮಲದ ಮೂಲಕ ಶಾಸಕರನ್ನು ಖರೀದಿಸಿರುವ ಕುರಿತು ತನಿಖೆ ನಡೆಸಬೇಕು. ರಾಜ್ಯದಲ್ಲಿ ಪೊಲೀಸ್‌ ಇಲಾಖೆ ಮತ್ತು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಜೀವಂತವಾಗಿದ್ದರೆ ತಕ್ಷಣವೇ ಸ್ವಯಂಪ್ರೇರಿತವಾಗಿ ಕ್ರಿಮಿನಲ್‌ ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಬೇಕು’ ಎಂದು ಒತ್ತಾಯಿಸಿದರು.

ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಸಚಿವರಾದ ರಮೇಶ ಜಾರಕಿಹೊಳಿ, ಸಿ.ಪಿ. ಯೋಗೇಶ್ವರ್‌, ಬಿಜೆಪಿ ವರಿಷ್ಠರು ಎಲ್ಲರೂ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆಗಳು ನಿಜವಾಗಿಯೂ ದೇಶದಲ್ಲಿ ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿದ್ದರೆ ರಮೇಶ ಜಾರಕಿಹೊಳಿ ಹೇಳಿಕೆ ಆಧಾರದಲ್ಲಿ ತಕ್ಷಣ ತನಿಖೆ ಆರಂಭಿಸಬೇಕು ಎಂದು ಆಗ್ರಹಿಸಿದರು.

ಕಣ್ಣಿಗೆ ಕಾಣಿಸುತ್ತಿಲ್ಲವೇ?: ಬಿಜೆಪಿಯ ಶಾಸಕರೇ ಈ ಪ್ರಕರಣದ ಕುರಿತು ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ತಾನೂ ತಿನ್ನುವುದಿಲ್ಲ, ತಿನ್ನಲೂ ಬಿಡುವುದಿಲ್ಲ ಎಂದು ಹೇಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್‌ ಸರಸಂಘಚಾಲಕ ಮೋಹನ್‌ ಭಾಗವತ್‌ ಅವರಿಗೆಲ್ಲ ಈ ವಿಷಯ ಕಾಣಿಸುತ್ತಿಲ್ಲವೆ ಎಂದು ಉಗ್ರಪ್ಪ ಪ್ರಶ್ನಿಸಿದರು.

ತಪ್ಪು ಮಾಡಿಲ್ಲ ಎಂದಾದರೆ ಯಡಿಯೂರಪ್ಪ ಏಕೆ ಹೆದರಬೇಕು. ಆರೋಪದ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಲಿ. ತನಿಖಾ ಸಂಸ್ಥೆಗಳು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು ಎಂಬುದು ಕಾಂಗ್ರೆಸ್‌ ಆಗ್ರಹ. ಕ್ರಮ ಕೈಗೊಳ್ಳದೇ ಇದ್ದರೆ ತಮ್ಮ ಪಕ್ಷ ಒಂದು ನಿರ್ಧಾರಕ್ಕೆ ಬರಲಿದೆ ಎಂದರು.

ವಿಧಾನ ಪರಿಷತ್‌ ಸದಸ್ಯ ಪ್ರಕಾಶ್‌ ರಾಠೋಡ್‌, ಪಿ.ಆರ್‌. ರಮೇಶ್‌, ಮಾಜಿ ಶಾಸಕ ಪಿ.ಎಂ. ಅಶೋಕ್‌, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಫಿ, ಮಾಜಿ ಮೇಯರ್‌ ರಾಮಚಂದ್ರಪ್ಪ ಪತ್ರಿಕಾಗೋಷ್ಠಿಯಲ್ಲಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು