ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಕಿಪಾಕ್ಸ್: ರಾಜ್ಯಾದ್ಯಂತ ಮುನ್ನೆಚ್ಚರಿಕೆ, ವಿಮಾನ ನಿಲ್ದಾಣಗಳಲ್ಲಿ ತಪಾಸಣೆ

Last Updated 7 ಜೂನ್ 2022, 16:06 IST
ಅಕ್ಷರ ಗಾತ್ರ

ಬೆಂಗಳೂರು: ‘ಜಗತ್ತಿನ ವಿವಿಧೆಡೆ ಹರಡುತ್ತಿರುವ ಮಂಕಿಪಾಕ್ಸ್ (ಮಂಗನ ಸಿಡುಬು) ತಡೆಗೆ ವಿಮಾನ ನಿಲ್ದಾಣಗಳಲ್ಲಿ ತಪಾಸಣೆ, ಜಿಲ್ಲಾ ಆಸ್ಪತ್ರೆಗಳಲ್ಲಿ ಹಾಸಿಗೆ ಕಾಯ್ದಿರಿಸುವಿಕೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು, ‘ರೋಗ ಹರಡುತ್ತಿರುವುದನ್ನು ಸೂಕ್ಷ್ಮವಾಗಿ ಗಮನಿಸಿದ್ದೇವೆ. ರಾಜ್ಯದಲ್ಲಿ ಕಾಯಿಲೆಯ ಮುನ್ಸೂಚನೆ ದೊರೆತ ಕೂಡಲೇ ರೋಗ ತಡೆಗೆ ಕಾರ್ಯಗತವಾಗಿದ್ದೇವೆ. ರೋಗ ಲಕ್ಷಣ ಇರುವವರಿಗೆ ತಪಾಸಣೆ ನಡೆಸಲಾಗುತ್ತಿದೆ’ ಎಂದು ಹೇಳಿದ್ದಾರೆ.

ಈ ಬಗ್ಗೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ. ‘ವಿದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿರುವುದರಿಂದ ರಾಜ್ಯದಲ್ಲಿ ಕಣ್ಗಾವಲು ಚಟುವಟಿಕೆಗಳನ್ನು ತೀವ್ರಗೊಳಿಸಲಾಗಿದೆ. ಪ್ರಕರಣಗಳು ವರದಿಯಾದಲ್ಲಿ ರೋಗ ಹರಡದಂತೆ ಕ್ರಮಕೈಗೊಳ್ಳಬೇಕಾಗುತ್ತದೆ’ ಎಂದು ತಿಳಿಸಿದ್ದಾರೆ.

‘ಕೇಂದ್ರ ಸರ್ಕಾರವು ಮಂಕಿಪಾಕ್ಸ್ ನಿರ್ವಹಣೆ ಕುರಿತು ಮಾರ್ಗಸೂಚಿಯನ್ನು ಹೊರಡಿಸಿದೆ. ಶಂಕಿತ ಪ್ರಕರಣಗಳು ವರದಿಯಾದಾಗ ರೋಗಿಗಳನ್ನು ಪ್ರತ್ಯೇಕಿಸಿ, ಚಿಕಿತ್ಸೆ ನೀಡಲು ಜಿಲ್ಲಾ ಆಸ್ಪತ್ರೆಗಳಲ್ಲಿ ಕನಿಷ್ಠ ಎರಡು ಹಾಸಿಗೆಗಳನ್ನು ಮೀಸಲಿಡಬೇಕು. ಬೆಂಗಳೂರು ಮತ್ತು ದಕ್ಷಿಣ ಕನ್ನಡ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ತಪಾಸಣೆ ನಡೆಸಬೇಕು. ಪ್ರಕರಣಗಳು ವರದಿಯಾದಲ್ಲಿ ಬೆಂಗಳೂರಿನಲ್ಲಿ ಇಂದಿರಾನಗರದ ಸಾಂಕ್ರಾಮಿಕ ಆಸ್ಪತ್ರೆ ಹಾಗೂ ಮಂಗಳೂರಿನಲ್ಲಿ ವೆನ್‌ಲಾಕ್ ಆಸ್ಪತ್ರೆಯನ್ನು ಪ್ರತ್ಯೇಕಿಸಿ, ಚಿಕಿತ್ಸೆ ಒದಗಿಸಬೇಕು’ ಎಂದು ಹೇಳಿದ್ದಾರೆ.

‘ಶಂಕಿತರ ಮಾದರಿಗಳನ್ನು ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಗೆ (ಎನ್‌ಐವಿ) ಕಳಿಸಬೇಕು. ಮಂಕಿಪಾಕ್ಸ್‌ಗೆ ಸಂಬಂಧಿಸಿದಂತೆ ಡಾ.ಎನ್. ಶ್ರೀನಿವಾಸ್ ಅವರನ್ನು ರಾಜ್ಯ ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ’ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT