ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಚುರುಕಾದ ಮುಂಗಾರು ಮಳೆ

ಬಂಟ್ವಾಳ ತಾಲ್ಲೂಕಿನ ಪಂಜಿಕಲ್ಲು ಗ್ರಾಮದಲ್ಲಿ ಭೂಕುಸಿತ: ಮತ್ತೆ ಇಬ್ಬರು ಕಾರ್ಮಿಕರ ಸಾವು
Last Updated 7 ಜುಲೈ 2022, 18:53 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದೆ. ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದೆ. ಕೆಲವೆಡೆ ಗುಡ್ಡ ಕುಸಿದ ಪರಿಣಾಮ ವಾಹನಗಳ ಸಂಚಾರಕ್ಕೆ ಅಡಚಣೆ ಆಯಿತು.

ಹೊಲ, ತೋಟಗಳಿಗೆ ನೀರು ನುಗ್ಗಿ ಹಾನಿಯುಂಟಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನಲ್ಲಿ ಸೌಪರ್ಣಿಕ ನದಿ ತುಂಬಿ ಹರಿದು ನಾವುಂದ ಗ್ರಾಮ ಮುಳುಗಡೆಯಾಗಿದೆ. ಜಿಲ್ಲಾಡಳಿತಸಂತ್ರಸ್ತರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಿದೆ.

ಕೊಡಗು ಜಿಲ್ಲೆಯಲ್ಲಿ ಗುರುವಾರ ಧಾರಾಕಾರ ಮಳೆ ಸುರಿದಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೋರು ಮಳೆ
ಯಾಗಿದೆ.ಕುಂದಾಪುರ ತಾಲ್ಲೂಕಿನ ಗೋಳಿಹೊಳೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು 27.8 ಸೆಂ.ಮೀ ಮಳೆಯಾಗಿದೆ.

ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ 10,015 ಕ್ಯುಸೆಕ್‌ಗೆ ಏರಿಕೆಯಾಗಿದೆ. 15,560 ಕ್ಯುಸೆಕ್‌ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು, ಬೆಳಗಾವಿ ಜಿಲ್ಲೆಯ ಹಿಡಕಲ್‌ನ ರಾಜಾ ಲಖಮಗೌಡ ಜಲಾಶಯದ ನೀರಿನ ಮಟ್ಟ ಗುರುವಾರ ಒಂದೇ ದಿನ 3.08 ಅಡಿಯಷ್ಟು ಏರಿಕೆಯಾಗಿದೆ.

ಬಂಟ್ವಾಳ ತಾಲ್ಲೂಕಿನ ಪಂಜಿಕಲ್ಲು ಗ್ರಾಮದ ಮುಕ್ಕುಡದಲ್ಲಿ ಬುಧವಾರ ರಾತ್ರಿ ಗುಡ್ಡ ಕುಸಿತಕ್ಕೊಳಗಾಗಿ ಗಾಯಗೊಂಡಿದ್ದ ಕೇರಳದ ಇಬ್ಬರು ಕಾರ್ಮಿಕರು ಗುರುವಾರ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮೂರಕ್ಕೇರಿದೆ. ಹೆನ್ರಿ ಕಾರ್ಲೊ ಅವರ ರಬ್ಬರ್ ತೋಟದಲ್ಲಿ ಕೆಲಸಕ್ಕಿದ್ದ ನಾಲ್ವರು ವಾಸಿಸುತ್ತಿದ್ದ ಶೆಡ್‌ ಮೇಲೆ ಗುಡ್ಡದ ಮಣ್ಣು ಕುಸಿದು ಬಿದ್ದಿತ್ತು.

ಕೊಡಗು, ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ, ಶಿರಸಿ, ಸಿದ್ದಾಪುರ ಮತ್ತು ಜೊಯಿಡಾ ತಾಲ್ಲೂಕುಗಳಲ್ಲಿ ಶಾಲಾ–ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 8 ಹಾಗೂ 9ರಂದು ರಜೆ ಘೋಷಿಸಲಾಗಿದೆ.

ಕರಾವಳಿಯ ಕೆಲವೆಡೆ ಶುಕ್ರವಾರ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗೆ ‘ಆರೆಂಜ್ ಅಲರ್ಟ್’, ಹಾಸನ, ಹಾವೇರಿ, ಧಾರವಾಡ, ಬೆಳಗಾವಿ ಹಾಗೂ ಕಲಬುರ್ಗಿಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT