ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ನಿಯಂತ್ರಣಕ್ಕೆ ರಾಜ್ಯದಲ್ಲಿ ಮತ್ತಷ್ಟು ಕಠಿಣ ನಿಯಮಗಳು 

Last Updated 2 ಜನವರಿ 2022, 8:39 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ಮೂರನೇ ಅಲೆ ಬರುವ ಮುನ್ಸೂಚನೆಗಳು ಲಭಿಸುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು.

ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾತ್ರಿ ಕರ್ಫ್ಯೂ ಅವಧಿ ಮುಗಿಯುವ ಮುನ್ನವೇ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಲಾಗುವುದು. ಕಠಿಣ ನಿಯಮ ಜಾರಿ ಕುರಿತು ಆ ಸಭೆಯಲ್ಲೇ ನಿರ್ಧಾರಕ್ಕೆ ಬರಲಾಗುವುದು ಎಂದರು.

ಬೆಂಗಳೂರು ನಗರದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಬೆಂಗಳೂರನ್ನು ʼಕೆಂಪು ವಲಯʼ ಎಂದು ಕೇಂದ್ರ ಸರ್ಕಾರ ಗುರುತಿಸಿದೆ. ನಗರದಲ್ಲಿ ಜನರ ಆರೋಗ್ಯ ರಕ್ಷಣೆಗೆ ಕಠಿಣವಾದ ನಿಯಮಗಳನ್ನು ಜಾರಿಗೊಳಿಸುವುದು ಅನಿವಾರ್ಯ ಎಂದು ಹೇಳಿದರು.ʼ

ಕಠಿಣ ನಿಯಮಗಳ ಜಾರಿಗೆ ಸಂಬಂಧಿಸಿದಂತೆ ತಜ್ಞರ ಸಮಿತಿ ಈಗಾಗಲೇ ಕೆಲವು ಸಲಹೆಗಳನ್ನು ನೀಡಿದೆ. ಉನ್ನತ ಮಟ್ಟದ ಸಭೆಯಲ್ಲಿ ಆ ಕುರಿತು ಚರ್ಚಿಸಿ ನಿರ್ಧಾರಕ್ಕ ಬರಲಾಗುವುದು. ಎರಡನೇ ಅಲೆಯ ಸಂದರ್ಭದಲ್ಲಿ ಎದುರಾದ ಸಂಕಷ್ಟ ಮರುಕಳಿಸದಂತೆ ತಡೆಯುವುದು ಸರ್ಕಾರದ ಜವಾಬ್ದಾರಿ. ಆ ದಿಸೆಯಲ್ಲಿ ಬಿಗಿಯಾದ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು

ಕೋವಿಡ್‌ ನಿಯಂತ್ರಣಕ್ಕೆ ಬಿಗಿಯಾದ ಕ್ರಮ ಜಾರಿಗೊಳಿಸುವ ವಿಚಾರದಲ್ಲಿ ಜಾತ್ರೆ, ಪಾದಯಾತ್ರೆ, ಬಹಿರಂಗ ಸಭೆ ಯಾವುದನ್ನೂ ಪರಿಗಣಿಸುವುದಿಲ್ಲ. ಜನರ ಜೀವ ರಕ್ಷಣೆಯೇ ಸರ್ಕಾರದ ಮುಂದಿರುವ ಆದ್ಯತೆಯ ವಿಷಯ. ಕಾಂಗ್ರೆಸ್‌, ಜೆಡಿಎಸ್‌ ಪಕ್ಷದವರು ಏನಾದರೂ ಕಾರ್ಯಕ್ರಮ ಮಾಡಿಕೊಳ್ಳಲಿ. ಆದರೆ, ಜನರ ಜೀವ ರಕ್ಷಣೆಗಾಗಿ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ಅಶೋಕ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT