ಮಂಗಳವಾರ, ಮೇ 17, 2022
25 °C
ಶ್ರೀರಂಗಪಟ್ಟಣ-ಕುಶಾಲನಗರ ರಸ್ತೆ ಕಾಮಗಾರಿ: ಸಂಸದರ ಅಧ್ಯಕ್ಷತೆಯಲ್ಲಿ ಸಭೆ

ಚತುಷ್ಪಥ ರಸ್ತೆ ಕಾಮಗಾರಿಗೆ 15 ತಿಂಗಳಲ್ಲಿ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ‘15 ತಿಂಗಳ ಒಳಗಾಗಿ ಶ್ರೀರಂಗಪಟ್ಟಣ ಮತ್ತು ಕುಶಾಲನಗರ ಮಾರ್ಗದ ಚತುಷ್ಪಥ ರಸ್ತೆ ಕಾಮಗಾರಿ ಆರಂಭವಾಗಲಿದೆ’ ಎಂದು ಸಂಸದ ಪ್ರತಾಪಸಿಂಹ ಇಲ್ಲಿ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಮೈಸೂರು-ಮಡಿಕೇರಿ ಮಾರ್ಗದಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು, ಚತುಷ್ಪಥ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಶ್ರೀರಂಗಪಟ್ಟಣದಿಂದ ಕುಶಾಲನಗರದವರೆಗೆ ರಸ್ತೆ ಕಾಮಗಾರಿ ಕೈಗೊಳ್ಳಲಾಗುವುದು’ ಎಂದರು.

ಕುಶಾಲನಗರದಲ್ಲಿ ಹೊಸ ಕೈಗಾರಿಕಾ ಪ್ರದೇಶ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮುಂದಾಗಬೇಕು. ಹಾಗೆಯೇ 25 ಅಥವಾ 50 ಹಾಸಿಗೆಯ ಇಎಸ್‍ಐ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸುವಂತೆಯೂ ಸಲಹೆ ನೀಡಿದರು.

ಈಗಿರುವ ರಾಷ್ಟ್ರೀಯ ಹೆದ್ದಾರಿಯನ್ನು ಸರಿಪಡಿಸಬೇಕು. ತಡೆಗೋಡೆ ನಿರ್ಮಾಣ ಮಾಡಬೇಕು. ಜೊತೆಗೆ ಕುಶಾಲನಗರದ ತಾವರೆಕೆರೆ ಪ್ರತಿ ವರ್ಷದ ಮಳೆಗಾಲದಲ್ಲಿ ರಸ್ತೆ ಸಂಪರ್ಕಕ್ಕೆ ವ್ಯತ್ಯಯ ಉಂಟು ಮಾಡುತ್ತಿದ್ದು, ರಸ್ತೆಯನ್ನು ಎತ್ತರಿಸುವಂತೆ ಪ್ರತಾಪಸಿಂಹ ಅಧಿಕಾರಿಗಳಿಗೆ ಸೂಚಿಸಿದರು.

ಜಲ ಜೀವನ್ ಯೋಜನೆಯಡಿ ಜಿಲ್ಲೆಯ ಎಲ್ಲಾ ಬಡ ಕುಟುಂಬಗಳಿಗೂ ನಲ್ಲಿ ನೀರು ಸಂಪರ್ಕ ಕಲ್ಪಿಸುವಂತೆ ಸಂಬಂಧಪಟ್ಟ ಎಂಜಿನಿಯರ್‌ಗೆ ಸಂಸದರು ನಿರ್ದೇಶನ ನೀಡಿದರು.

ಸರ್ಕಾರ ಜಲ ಜೀವನ್ ಯೋಜನೆ ಅನುಷ್ಠಾನಕ್ಕೆ ₹ 111 ಕೋಟಿ ಬಿಡುಗಡೆ ಮಾಡಿದ್ದು, ಪ್ರತಿ ಕುಟುಂಬಕ್ಕೂ ನಲ್ಲಿ ನೀರು ಸಂಪರ್ಕ ಕಲ್ಪಿಸಬೇಕು. ಈ ಸಂಬಂಧ ತ್ವರಿತವಾಗಿ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿ.ಪಂ. ಇಇ ಶ್ರೀಕಂಠಯ್ಯ, ಜಿಲ್ಲೆಯಲ್ಲಿ 1,32,752 ಕುಟುಂಬಗಳಿದ್ದು, ಪ್ರಥಮ ಹಂತದಲ್ಲಿ 54,216 ಕುಟುಂಬಗಳಿಗೆ ನಲ್ಲಿ ನೀರು ಸಂಪರ್ಕ ಕಲ್ಪಿಸಲಾಗುತ್ತಿದೆ. ಉಳಿದ ಕುಟುಂಬಗಳಿಗೆ ಎರಡನೇ ಹಂತದಲ್ಲಿ ನಲ್ಲಿ ನೀರು ಸಂಪರ್ಕ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದರು.

ಪಶ್ಚಿಮಘಟ್ಟ ಕಾರ್ಯಪಡೆಯ ಅಧ್ಯಕ್ಷರಾದ ಶಾಂತೆಯಂಡ ರವಿಕುಶಾಲಪ್ಪ ಮಾತನಾಡಿ, ಜಿಲ್ಲೆಯ ಎಲ್ಲಾ ಬಡ ಕುಟುಂಬಗಳಿಗೂ ವಸತಿ ಹಾಗೂ ನಿವೇಶನ ಕಲ್ಪಿಸಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಕ್ರಮ–ಸಕ್ರಮ ಯೋಜನೆಯಡಿ 4,500 ಅರ್ಜಿಗಳು ಇತ್ಯರ್ಥಕ್ಕೆ ಬಾಕಿ ಇದ್ದು, ಇದನ್ನು ಪರಿಹರಿಸುವಲ್ಲಿ ಆರ್‌ಟಿಸಿ ನೀಡಬೇಕಿದೆ. ಆ ನಿಟ್ಟಿನಲ್ಲಿ ಜಂಟಿ ಸರ್ವೆ ಮಾಡಬೇಕಿದೆ ಎಂದು ತಿಳಿಸಿದರು.

ಕನಿಷ್ಠ ಮೂಲ ಸೌಲಭ್ಯವನ್ನಾದರೂ ಜಿಲ್ಲೆಯ ಬಡ ಜನರಿಗೆ ಕಲ್ಪಿಸದಿದ್ದಲ್ಲಿ ಸಾರ್ವಜನಿಕರಿಗೆ ಯಾವ ರೀತಿಯ ಸಂದೇಶ ಹೋಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಸಮಸ್ಯೆಗಳಿದ್ದಲ್ಲಿ ಗಮನಕ್ಕೆ ತರಬೇಕು ಎಂದು ರವಿಕುಶಾಲಪ್ಪ ಹೇಳಿದರು.

ಸೌಭಾಗ್ಯ ಯೋಜನೆಯಡಿ ಸಂಪಾಜೆ, ಚೆಂಬು, ಪೆರಾಜೆಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ. ವಿದ್ಯುತ್ ಸಂಪರ್ಕ ಕಲ್ಪಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಅಡಚಣೆ ಉಂಟುಮಾಡಬಾರದು. ಆದಿವಾಸಿ ಗಿರಿಜನರಿಗೆ ಸೌಲಭ್ಯ ಕಲ್ಪಿಸಬೇಕು ಎಂದು ಸೂಚಿಸಿದರು.

ಕೊಡಗು ಜಿಲ್ಲೆಯಲ್ಲಿ ಪ್ಲಾಸ್ಟಿಕ್ ನಿಷೇಧವನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಸಂಸದರು ಹೇಳಿದರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಪ್ರತ್ಯೇಕವಾಗಿ ಕೆಎಸ್‍ಆರ್‌ಟಿಸಿ ಬಸ್ ಓಡಾಟಕ್ಕೆ ಅವಕಾಶ ಮಾಡುವಂತೆ ಮಡಿಕೇರಿ ಕೆಎಸ್‍ಆರ್‌ಟಿಸಿ ಘಟಕದ ವ್ಯವಸ್ಥಾಪಕರಿಗೆ ಸಂಸದರು ಸೂಚಿಸಿದರು.

ಈ ಕುರಿತು ಮಾಹಿತಿ ನೀಡಿದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಕಾರ್ಯಪ್ಪ, ಜಿಲ್ಲಾ ಆಸ್ಪತ್ರೆಯಿಂದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ತೆರಳಲು ಬಸ್ ಸೌಲಭ್ಯ ಕಲ್ಪಿಸಬೇಕಿದೆ ಎಂದು ಸಂಸದರ ಗಮನಕ್ಕೆ ತಂದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಶಬಾನಾ ಎಂ.ಶೇಖ್, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 46 ಸಾವಿರ ಕುಟುಂಬಗಳಿಗೆ ಹಣ ಪಾವತಿಸಲಾಗಿದೆ ಎಂದು ತಿಳಿಸಿದರು.

ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕಾಫಿ ಬೆಳೆ ಆಯ್ಕೆಯಾಗಿದ್ದು, ಸಹಾಯಧನ ದೊರೆಯಲಿದೆ ಎಂದರು.

ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು