ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೂರ್ತಿ ಶರಣರ ಅಧಿಕಾರ ನಿರ್ಬಂಧ | ಸೌಭಾಗ್ಯ ಬಸವರಾಜನ್‌ ಪೊಲೀಸ್‌ ವಶಕ್ಕೆ

Last Updated 16 ಡಿಸೆಂಬರ್ 2022, 5:15 IST
ಅಕ್ಷರ ಗಾತ್ರ

ಚಿತ್ರದುರ್ಗ: ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಶರಣರ ಅಧಿಕಾರವನ್ನು ಪ್ರಕರಣ ಇತ್ಯರ್ಥವಾಗುವವರೆಗೆ ನಿರ್ಬಂಧಿಸಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಗುರುವಾರ ಆದೇಶಿಸಿದೆ.

ಮುರುಘಾ ಮಠ ಹಾಗೂ ಎಸ್‌ಜೆಎಂ ವಿದ್ಯಾಪೀಠದಲ್ಲಿ ಶಿವಮೂರ್ತಿ ಶರಣರು ಹೊಂದಿದ್ದ ಅಧಿಕಾರವನ್ನು ‘ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ–1988’ ಸೆಕ್ಷನ್‌ 8ರ ಅಡಿಯಲ್ಲಿ ನಿರ್ಬಂಧಿಸಲಾಗಿದೆ.

ಪೋಕ್ಸೊ ಹಾಗೂ ಪರಿಶಿಷ್ಟ ಜಾತಿ ಮತ್ತು ದೌರ್ಜನ್ಯ ತಡೆ ಕಾಯ್ದೆಯಡಿ ಆ. 28ರಂದು ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ, ‘ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ’ ಉಲ್ಲಂಘನೆಯಾಗಿರುವುದು ಕಂಡುಬಂದಿತ್ತು. ಕಾಯ್ದೆಯ ಸೆಕ್ಷನ್‌– 3 ಮತ್ತು 7ರ ಅಡಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಇದನ್ನು ಆಧರಿಸಿ ಪೀಠಾಧ್ಯಕ್ಷರ ಅಧಿಕಾರವನ್ನು ನಿರ್ಬಂಧಿ ಸುವಂತೆ ಕೋರಿ ಪ್ರಾಸಿಕ್ಯೂಷನ್‌ ಪರವಾಗಿ ಸರ್ಕಾರಿ ವಕೀಲರಾದ ಕೆ.ಬಿ. ನಾಗವೇಣಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಾಧೀಶೆ ಬಿ.ಕೆ. ಕೋಮಲಾ ಗುರುವಾರ ಆದೇಶ ಪ್ರಕಟಿಸಿದರು.

ಹೈಕೋರ್ಟ್‌ಗೆ ಮೊರೆ– ವಕೀಲ: ಜಿಲ್ಲಾ ನ್ಯಾಯಾಲಯ ನೀಡಿದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋಗುತ್ತೇವೆ ಎಂದು ಮುರುಘಾ ಮಠದ ಪರ ವಕೀಲ ಉಮೇಶ್‌ ತಿಳಿಸಿದರು.

ಪಿ.ಎಸ್‌. ವಸ್ತ್ರದ್‌ ಅಧಿಕಾರ ಸ್ವೀಕಾರ: ಮುರುಘಾ ಮಠದ ‘ಶ್ರೀಚಿನ್ಮುಲಾದ್ರಿ ಬೃಹನ್ಮಠ ಟ್ರಸ್ಟ್‌’ ಹಾಗೂ ಎಸ್‌ಜೆಎಂ ವಿದ್ಯಾಪೀಠದ ಆಡಳಿತಾಧಿಕಾರಿಯಾಗಿ ರಾಜ್ಯ ಸರ್ಕಾರದಿಂದ ನೇಮಕಗೊಂಡ ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್‌. ವಸ್ತ್ರದ್‌ ಗುರುವಾರ ಅಧಿಕಾರ ಸ್ವೀಕರಿಸಿದರು.

ರಿಟ್‌: ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸ
ಲಾಗಿದೆ. ಈ ರಿಟ್‌ ಅರ್ಜಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದ ಮುಂದೆ ಶುಕ್ರವಾರ (ಡಿ.16) ವಿಚಾರಣೆಗೆ ನಿಗದಿಯಾಗಿದೆ.

ಸೌಭಾಗ್ಯ ಬಸವರಾಜನ್‌ ಪೊಲೀಸ್‌ ವಶಕ್ಕೆ

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸಲು ವಿದ್ಯಾರ್ಥಿನಿಯರಿಗೆ ಕುಮ್ಮಕ್ಕು ನೀಡಿದ ಹಾಗೂ ಪಿತೂರಿ ನಡೆಸಿದ ಆರೋಪದಡಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್‌ ಅವರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.

ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನಕ್ಕೆ ಪೊಲೀಸ್‌ ತಂಡ ರಚಿಸಲಾಗಿತ್ತು. ದಾವಣಗೆರೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್‌ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ.

ಬಂಧನ ಭೀತಿ ಎದುರಿಸುತ್ತಿದ್ದ ಸೌಭಾಗ್ಯ, ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯ ಅರ್ಜಿ ವಜಾ ಮಾಡಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಸೌಭಾಗ್ಯ ಅವರ ಪತಿ ಎಸ್‌.ಕೆ. ಬಸವರಾಜನ್‌, ಶಿಕ್ಷಕ ಬಸವರಾಜೇಂದ್ರ, ಛಾಯಾಚಿತ್ರಗ್ರಾಹಕ ಮಯೂರ ಬಂಧಿತರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT